ಪ್ರಯೋಗಾಲಯದಲ್ಲಿ ಕೊಳೆಯುತ್ತಿರುವ ಕೃಷಿ ಸಂಶೋಧನೆ
ಕ.ಪ್ರ. ವಾರ್ತೆ ತುಮಕೂರು ಮಾ.17
ಕೃಷಿ ಸಂಶೋಧನೆಗಳು ಪ್ರಯೋಗಾಲಯಗಳಲ್ಲಿ ಕೊಳೆಯುತ್ತಿವೆ ಎಂದು ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಚಿರಂಜೀವಿ ಸಿಂಗ್ ವಿಷಾದಿಸಿದರು.
ಅವರು ಇಲ್ಲಿನ ಸಿದ್ಧಗಂಗಾ ಮಠದಲ್ಲಿ ಏರ್ಪಾಟಾಗಿದ್ದ ಕೃಷಿ ಮತ್ತು ಕೈಗಾರಿಕಾ ವಸ್ತುಪ್ರದರ್ಶನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ವಿಶ್ವವಿದ್ಯಾಲಯ ಹಾಗೂ ಉನ್ನತ ಸಂಶೋಧನಾ ಸಂಸ್ಥೆಗಳ ಸಂಶೋಧನೆಗಳು ರೈತರಿಗೆ ತಲುಪುತ್ತಿಲ್ಲ. ಬದಲಿಗೆ ಪ್ರಯೋಗಾಲಯಗಳಲ್ಲೇ ಕೊಳೆಯುತ್ತಿವೆ ಎಂದು ತಿಳಿಸಿದರು.
ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಪಶುಸಂಗೋಪನೆಗೆ ಸಂಬಂಧಿಸಿದ ಸಂಶೋಧನೆಗಳು ಪ್ರಯೋಗಾಲಯದಿಂದ ಕೃಷಿ, ರೈತರ ಭೂಮಿಗೆ ತಲುಪಬೇಕು ಎಂದರು.
ರಾಜಸ್ಥಾನದ ನಂತರ ಕರ್ನಾಟಕದಲ್ಲಿ ಅತಿ ಹೆಚ್ಚು ಒಣಭೂಮಿಯಲ್ಲಿ ವ್ಯವಸಾಯ ನಡೆಯುತ್ತಿದೆ. ಇದು ರೈತರ ಪ್ರಗತಿಗೆ ಮಾರಕವಾಗಿದೆ. ಒಣಭೂಮಿಯಲ್ಲಿ ಕಡಿಮೆ ನೀರು ಬಳಸುವ ಬಳಕೆ ಬಗ್ಗೆ ರೈತರಿಗೆ ತರಬೇತಿ ನೀಡಬೇಕು. ಆದರೆ ಇದು ಸಮರ್ಪಕವಾಗಿ ಆಗಿಲ್ಲ. ಕೃಷಿ ಇಲ್ಲದ ಭಾರತವನ್ನು ಊಹಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.
ಕೃಷಿ ಕ್ಷೇತ್ರ ಕಡೆಗಣನೆ: ಕಾರ್ಯಕ್ರಮದಲ್ಲಿ ಸಂಸದ ಜಿ.ಎಸ್. ಬಸವರಾಜು ಮಾತನಾಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೃಷಿ ಕ್ಷೇತ್ರವನ್ನು ಸಂಪೂರ್ಣವಾಗಿ ಕಡೆಗೆಣಿಸಿದೆ. ರೈತರ ಬದುಕು ಸಮಸ್ಯೆಯಲ್ಲಿದೆ. ರೈತರಿಗೆ ಸರ್ಕಾರದ ಸವಲತ್ತುಗಳು ದೊರೆಯಬೇಕು. ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳುವ ಮೂಲಕ ರೈತನಿಗೆ ಬೆಂಬಲವಾಗಿ ನಿಲ್ಲಬೇಕು ಎಂದರು.
ಕೃಷಿ ಕ್ಷೇತ್ರದಲ್ಲಿ ಇದೇ ಪರಿಸ್ಥಿತಿ ಮುಂದುವರೆದರೆ ಮುಂದಿನ 10 ವರ್ಷಗಳಲ್ಲಿ ಆಹಾರಕ್ಕಾಗಿ ಹಾಹಾಕಾರ ಉಂಟಾಗಬಹುದು. ಯುವ ಜನಾಂಗ ಕೃಷಿಯಿಂದ ದೂರ ಸಾಗುತ್ತಿದ್ದಾರೆ. ರೈತರು ಕೃಷಿಯನ್ನೇ ನೆಚ್ಚಿ ಬದುಕಲು ಸಾಧ್ಯವಾಗುತ್ತಿಲ್ಲ. ಜಾನುವಾರು ಸಾಕಾಣಿಕೆ ಸಹ ಲಾಭದಾಯಕವಾಗಿಲ್ಲ. ಕೃಷಿಕರು ಕೈಗಾರಿಕಾ ಕಾರ್ಮಿಕರಾಗಿ ಬದಲಾಗುತ್ತಿದ್ದಾರೆ. ಕೂಲಿ ಕಾರ್ಮಿಕರಿಗಿಂತ ಕೆಳಮಟ್ಟದ ಜೀವನ ನಡೆಸುತ್ತಿದ್ದಾರೆ ಎಂದು ವಿಷಾದಿಸಿದರು.
ಆಧುನಿಕ ಕೃಷಿ ಪದ್ಧತಿ ಕುರಿತು ರೈತರಿಗೆ ತರಬೇತಿ ನೀಡಬೇಕು. ಅದಕ್ಕಾಗಿ ಅಗತ್ಯ ಸೌಲಭ್ಯ ಕಲ್ಪಿಸಬೇಕು. ಅನುಭವಿಗಳ ಸೇವೆಯನ್ನು ಬಳಕೆ ಮಾಡಿಕೊಳ್ಳುವಲ್ಲಿ ರಾಜಕೀಯ ಹಸ್ತಕ್ಷೇಪ ಆಗಬಾರದು ಎಂದರು.
ರೈತರಿಗೆ ಉತ್ತಮ ಮಾರುಕಟ್ಟೆ ಹಾಗೂ ದಾಸ್ತಾನು ವ್ಯವಸ್ಥೆ ಕಲ್ಪಿಸುವ ಮೂಲಕ ರೈತರ ಬೆಂಬಲಕ್ಕೆ ಸರ್ಕಾರ ಮುಂದಾಗಬೇಕು ಎಂದರು. ಕಾರ್ಯಕ್ರಮದಲ್ಲಿ ಸಿದ್ಧಗಂಗಾ ಕಿರಿಯ ಶ್ರೀ ಸಿದ್ಧಲಿಂಗ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿ ಸದಾಶಿವರೆಡ್ಡಿ ಬಿ. ಪಾಟೀಲ, ಹೆಚ್ಚುವರಿ ಕಾರ್ಯದರ್ಶಿ ಎಂ.ಬಿ. ಬರುಜಿ, ಗ್ರಾ.ಪಂ. ಅಧ್ಯಕ್ಷೆ ನಳಿನ ಇತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

