ಕುಡಿವ ನೀರಿನ ಯೋಜನೆ ಕೈಗೆತ್ತಿಕೊಳ್ಳಿ
ಕ.ಪ್ರ.ವಾರ್ತೆ ್ಣ ತುಮಕೂರು ್ಣ ಮಾ. 19
ಬೇಸಿಗೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗ, ಬೆಸ್ಕಾಂ ಮತ್ತು ಇತರೆ ಸಂಬಂಧಿಸಿದ ಅಧಿಕಾರಿಗಳು ಕುಡಿವ ನೀರಿನ ಯೋಜನೆ ಕೈಗೆತ್ತಿಕೊಂಡು ಮಾಸಾಂತ್ಯದೊಳಗೆ ಪೂರ್ಣಗೊಳಿಸುವಂತೆ ಜಿ.ಪಂ. ಸಿಇಓ ಗೋವಿಂದರಾಜು ಅಧಿಕಾರಿಗಳಿಗೆ ತಾಕೀತು ನೀಡಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ನಡೆದ ಮಾಸಿಕ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ ಬೋರ್ವೆಲ್ಗಳನ್ನು ಕೊರೆದ 10 ದಿನದೊಳಗಾಗಿ ಹ್ಯಾಂಡ್ ಪಂಪ್ ಅಥವಾ ಪೈಪ್ಲೈನ್ ಮೋಟಾರ್ ಹಾಕಿಸಬೇಕು. ಬೋರ್ ಕೊರೆದು ಕ್ಯಾಪ್ ಮುಚ್ಚಿ ಹಾಗೆ ಬಿಡುವುದರಿಂದ ಬೋರ್ವೆಲ್ ಕೊರೆದವರನ್ನು ಹೊರತುಪಡಿಸಿ ಬೇರಾರಿಗೂ ಉಪಯೋಗವಾಗುವುದಿಲ್ಲ ಎಂದರು.
ಬೇಸಿಗೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ತುರ್ತಾಗಿ ಕುಡಿಯುವ ನೀರಿನ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಇಲ್ಲಿಯವರೆಗೆ ಸರ್ಕಾರ 108.67 ಕೋಟಿ ಬಿಡುಗಡೆ ಮಾಡಿದ್ದು, ಈ ಪೈಕಿ 83 ಕೋಟಿ 18 ಲಕ್ಷ ಖರ್ಚಾಗಿದ್ದು, ಜಿಲ್ಲೆ 5 ನೇ ಸ್ಥಾನದಲ್ಲಿದೆ. ಇನ್ನೂ 25 ಕೋಟಿ ಅನುದಾನ ಬಾಕಿ ಇದೆ. ತುರ್ತು ಕುಡಿಯುವ ನೀರಿನ ಯೋಜನೆಗಳನ್ನು ಕೈಗೆತ್ತಿಕೊಳ್ಳಲು 26 ಕೋಟಿ ರು. ಮೊತ್ತದ ಕ್ರಿಯಾ ಯೋಜನೆಗೆ ಈಗಾಗಲೇ ಅನುಮೋದನೆ ನೀಡಲಾಗಿದೆ.
ಅನುಮೋದನೆ: ಪ್ರತಿ ತಾಲೂಕಿಗೆ 6 ಲಕ್ಷದಂತೆ 60 ಲಕ್ಷ ರು. ಗಳ ಕ್ರಿಯಾಯೋಜನೆಗೂ ಸಹ ಅನುಮೋದನೆ ನೀಡಲಾಗಿದೆ. ಕಂಟಿಂಜೆನ್ಸಿ ಕ್ರಿಯಾಯೋಜನೆಯನ್ವಯ ತುರ್ತಾಗಿ ಕೆಲಸಗಳು ಆಗಿದ್ದರೆ 25 ಕೋಟಿ ರು. ಖರ್ಚಾಗುತ್ತಿತ್ತು. ಕ್ರಿಯಾ ಯೋಜನೆಗೆ ಅನುಮೋದನೆ ನೀಡಿ 3 ತಿಂಗಳಾಗಿದೆ. ಆದ್ದರಿಂದ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ತುರ್ತಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ತಿಳಿಸಿದರು.
ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗ, ಬೆಸ್ಕಾಂ, ಕಾರ್ಯನಿರ್ವಹಣಾಧಿಕಾರಿಗಳು ಮತ್ತು ತಹಸೀಲ್ದಾರ್ಗಳು ಕುಳಿತು ಆಯಾ ತಾಲೂಕಿನ ಕುಡಿಯುವ ನೀರಿನ ಸಮಸ್ಯೆಗಳ ಬಗ್ಗೆ ಚರ್ಚಿಸಬೇಕು ಎಂದರು.
ತುಮಕೂರಿನ 22 ಗ್ರಾಮಗಳು, ಗುಬ್ಬಿ 24, ಕುಣಿಗಲ್ 37, ತಿಪಟೂರು 3, ತುರುವೇಕರೆ 12, ಶಿರಾ 3, ಮಧುಗಿರಿ 6 ಮತ್ತು ಚಿ.ನಾ.ಹಳ್ಳಿ 11 ಗ್ರಾಮಗಳಲ್ಲಿ ಟ್ಯಾಂಕರ್ಗಳ ಮೂಲಕ ಕುಡಿಯುವ ನೀರನ್ನು ಸರಬರಾಜು ಮಾಡಲಾಗುತ್ತಿದ್ದು, ಈ ಗ್ರಾಮಗಳಲ್ಲಿ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಮಾಡುವ ಮೂಲಕ ತಾತ್ಕಾಲಿಕ ಟ್ಯಾಂಕರ್ ಮೂಲಕ ನೀರು ಸರಬರಾಜು ವ್ಯವಸ್ಥೆಯನ್ನು ಒಂದು ತಿಂಗಳು ಮೀರದಂತೆ ಕ್ರಮ ಕೈಗೊಳ್ಳುವಂತೆ ಅವರು ತಿಳಿಸಿದರು.
ಕಾಮಗಾರಿ ಕೈಗೆತ್ತಿಕೊಳ್ಳಿ: ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಗಂಭೀರ ಸಮಸ್ಯೆ ಇದ್ದಲ್ಲಿ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಕಾರ್ಯನಿರ್ವಾಹಕ ಎಂಜನಿಯರ್ ಮತ್ತು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಕ್ಷಣ ಕ್ರಮಕೈಗೊಳ್ಳಬೇಕು. ಬಿಡುಗಡೆಯಾದ ಹಣ ಪೋಲಾಗದಂತೆ ತುರ್ತಾಗಿ ಕಂಟಿಂಜೆನ್ಸಿ ಯೋಜನೆಯಡಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು ಎಂದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಪ್ರೇಮಾ ಮಹಲಿಂಗಪ್ಪ ಮಾತನಾಡಿ, ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಸಭೆಯಲ್ಲಿ ಅಧಿಕಾರಿಗಳು ನೀಡಿದ ಅಂಕಿ ಅಂಶಗಳು ತೃಪ್ತಿಕರವಾಗಿದೆ. ಆದರೆ ವಾಸ್ತವ ಪರಿಸ್ಥಿತಿ ಬೇರೆಯೇ ಇದೆ. ಗ್ರಾಮೀಣ ಭಾಗಗಳಲ್ಲಿ ಕುಡಿಯುವ ನೀರಿಗೆ ತೀವ್ರ ಸಮಸ್ಯೆಯಾಗಿದ್ದು, ಜನರು ಪ್ರತಿದಿನ ತಂಡೋಪತಂಡವಾಗಿ ತಮ್ಮ ಕಚೇರಿಗೆ ಬಂದು ತಮ್ಮನ್ನು ಭೇಟಿ ಮಾಡುವ ಮೂಲಕ ಕುಡಿಯುವ ನೀರಿನ ಸಮಸ್ಯೆ ಕುರಿತಂತೆ ವ್ಯಾಪಕ ದೂರು ನೀಡುತ್ತಿದ್ದು, ಅಧಿಕಾರಿಗಳು ಈ ನಿಟ್ಟಿನಲ್ಲಿ ಗಮನಹರಿಸುವಂತೆ ತಿಳಿಸಿದರು.
ಎನ್.ಆರ್.ಇ.ಜಿ. ಯೋಜನೆಯಡಿ ಶೌಚಾಲಯಗಳನ್ನು ಕಟ್ಟಿದರೂ ಗ್ರಾಮಪಂಚಾಯತಿ ವತಿಯಿಂದ ಹಣ ನೀಡುತ್ತಿಲ್ಲ ಎಂಬ ದೂರುಗಳು ಬರುತ್ತಿದ್ದು, ಆಯಾ ತಾಲೂಕುಗಳ ಕಾರ್ಯ ನಿರ್ವಾಹಣಾಧಿಕಾರಿಗಳು ಈ ಯೋಜನೆಯಡಿ ಗ್ರಾಮಪಂಚಾಯತಿವಾರು ಬೇಕಾಗುವ ಅನುದಾನಕ್ಕೆ ಪಟ್ಟಿಮಾಡಿ ಬೇಡಿಕೆ ಸಲ್ಲಿಸುವಂತೆ ಅವರು ತಿಳಿಸಿದರು.
ಸಭೆಯಲ್ಲಿ ಉಪಾಧ್ಯಕ್ಷೆ ಮಮತಾ ಶಿವಲಿಂಗಯ್ಯ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಹುಚ್ಚಯ್ಯ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಉಗ್ರಯ್ಯ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ ಜಗದೀಶ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

