ಮಲತಾಯಿ ಧೋರಣೆ ನಡುವೆಯೂ ಸಾಕಷ್ಟು ಅಭಿವೃದ್ಧಿ ಕಾರ್ಯ
ಕುಣಿಗಲ್: ತಮ್ಮ ಅಧಿಕಾರವಧಿಯಲ್ಲಿ ತಾಲೂಕಿನಾದ್ಯಂತ ಕೋಮು ಸೌಹಾರ್ದತೆಗೆ ಧಕ್ಕೆ ಬಾರದ ರೀತಿಯಲ್ಲಿ ಕಾರ್ಯ ನಿರ್ವಹಿಸಿದ್ದೇನೆ. ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರದ ಮಲತಾಯಿ ಧೋರಣೆಯ ನಡುವೆಯೂ ಕೇಂದ್ರ ಸರ್ಕಾರದ ನೆರವಿನಿಂದ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿರುವುದಾಗಿ ಕಾಂಗ್ರೆಸ್ ಅಭ್ಯರ್ಥಿ, ಶಾಸಕ ಬಿ.ಬಿ.ರಾಮಸ್ವಾಮಿಗೌಡ ತಿಳಿಸಿದರು. ಬುಧವಾರ, ಪಟ್ಟಣದ ಕೋಟೆ ಪ್ರದೇಶದಲ್ಲಿನ ಪ್ರಮುಖ ಜೆಡಿಎಸ್ ಮುಖಂಡರ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಾವು ಶಾಸಕರಾಗಿ ಆಯ್ಕೆಯಾದಾಗಿನಿಂದ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ್ದು, ಮುಸ್ಲಿಂ ಕಬರಸ್ಥಾನಗಳ ರಕ್ಷಣಾಗೋಡೆ ಸೇರಿದಂತೆ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಿಸಿ ಮೊರಾರ್ಜಿ ಶಾಲೆಗಳ ಪ್ರಾರಂಭಕ್ಕೆ ಒತ್ತು ನೀಡಿದ್ದೇನೆ ಎಂದರು.
ಹಸ್ತಕ್ಷೇಪ ಮಾಡಿಲ್ಲ: ಈ ಹಿಂದೆ ಕೆಲ ರಾಜಕಾರಣಿಗಳು ವೈಯುಕ್ತಿಕ ಸ್ವಾರ್ಥ ಸಾಧನೆಗೆ ಕೋಮುಭಾವನೆಗಳನ್ನು ಕೆರಳಿಸಿ ಶಾಂತಿ, ಸುವ್ಯವಸ್ಥೆಗೆ ತೊಡಕುಂಟು ಮಾಡಿರುವ ಹಲವು ನಿದರ್ಶನಗಳಿದ್ದು, ತಮ್ಮ ಅವಧಿಯಲ್ಲಿ ತಾವು ಯಾವುದೇ ಕಾರಣಕ್ಕೂ ಶಾಂತಿ, ಸುವ್ಯವಸ್ಥೆ ಕಾಪಾಡುವ ವಿಷಯದಲ್ಲಿ ಹಸ್ತಕ್ಷೇಪ ಮಾಡದೆ, ಅಲ್ಪಸಂಖ್ಯಾತ ಸಮುದಾಯಕ್ಕೆ ಯಾವುದೇ ರೀತಿ ತೊಂದರೆಯಾಗದಂತೆ ಕ್ರಮ ಕೈಗೊಂಡಿದ್ದೇನೆ. ಕಾಂಗ್ರೆಸ್ ಪಕ್ಷದಿಂದಲೇ ಅಲ್ಪಸಂಖ್ಯಾತರ ಸಮಗ್ರ ಅಭಿವೃದ್ಧಿ ಸಾಧ್ಯವಾಗಿದ್ದು, ಇದಕ್ಕಾಗಿ ಕೇಂದ್ರ ಸರ್ಕಾರ ಹಲವು ವಿನೂತನ ಕಾರ್ಯಕ್ರಮ ಜಾರಿಗೊಳಿಸಿದೆ. ಅಲ್ಪಸಂಖ್ಯಾತ ಬಾಂಧವರು ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸಿ ಸಮುದಾಯದ ಸಮಗ್ರ ಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಿಸಲು ಮುಂದಾಗುವಂತೆ ಮನವಿ ಮಾಡಿದರು.
ಕಳೆದ ಪುರಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಹಮದ್ ಫಾಜಿಲ್, ಜೆಡಿಎಸ್ ಮುಖಂಡರಾದ ಸೈಯದ್ ಕಲೀಂ, ಕಲೀಂವುಲ್ಲಾ, ಶ್ರೀಕಂಠಯ್ಯ ಮೂರ್ತಿ ಸೇರಿದಂತೆ ಹಲವು ಪ್ರಮುಖರು ಜೆಡಿಎಸ್ ತೊರೆದು ಶಾಸಕ ಬಿ.ಬಿ.ರಾಮಸ್ವಾಮಿಗೌಡರ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು.
ಅಕ್ರಮ ನಿವೇಶನ ಕೊಟ್ಟ ಮಾಜಿ ಸಚಿವ
ತುಮಕೂರು: ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಪಕ್ಷೇತರ ಶಾಸಕ ವೆಂಕಟರಮಣಪ್ಪ ಅವರು ಕಾನೂನುಬಾಹಿರವಾಗಿ ಅವರ ಪುತ್ರ ವೆಂಕಟೇಶ್ಗೆ 4 ಹಾಗೂ ಅವರ ಸೊಸೆಗೆ 1 ನಿವೇಶನ ನೀಡಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಶಿವಪ್ರಸಾದ್ ಆರೋಪಿಸಿದ್ದಾರೆ. ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ತುಮಕೂರಿನ ವಸಂತನರಸಾಪುರದಲ್ಲಿ ಮಾಜಿ ಸಚಿವ ವೆಂಕಟರಮಣಪ್ಪ ಅವರು ತಮ್ಮ ಪುತ್ರ ಹಾಗೂ ಪಾವಗಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟೇಶ್ಗೆ 4 ನಿವೇಶ ನೀಡಿದ್ದಾರೆ ಎಂದು ಆರೋಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

