ತುಮಕೂರು

ಮಂತ್ರಿ ರೇಸ್‌ನಲ್ಲಿ ಜಯಚಂದ್ರ, ರಾಜಣ್ಣ

Published On :

 ಅದಲಗೆರೆ ನಾಗೇಂದ್ರಕುಮಾರ್
ತುಮಕೂರು: ಅಹಿಂದ ನಾಯಕ ಸಿದ್ದರಾಮಯ್ಯ ಈಗಾಗಲೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿಯಾಗಿದೆ. ಇನ್ನೇನಿದ್ದರೂ ಸಚಿವ ಸಂಪುಟ ವಿಸ್ತರಣೆಯತ್ತ ಎಲ್ಲರ ಚಿತ್ತ. ಯಾರಿಗೆ ಯಾವ ಖಾತೆ, ಯಾರ್ಯಾರು ಖಾತೆಗಾಗಿ ಲಾಬಿ ನಡೆಸುತ್ತಿದ್ದಾರೆ ಎಂಬ ವಿಷಯ ಚರ್ಚಾಸ್ಪದ. ತುಮಕೂರು ಜಿಲ್ಲೆಯ ಮಧುಗಿರಿ, ಶಿರಾ, ತಿಪಟೂರು, ತುಮಕೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದಿದ್ದು, ತುಮಕೂರು ನಗರ ಬಿಟ್ಟು ಎಲ್ಲರೂ ಹಳೇ ಹುಲಿಗಳೇ.
ಮಾಜಿ ಮುಖ್ಯಮಂತ್ರಿ, ಮಾಜಿ ವಿದೇಶಾಂಗ ಸಚಿವ ಎಸ್.ಎಂ. ಕೃಷ್ಣರ ಆಪ್ತ ಎಂದೇ ಗುರುತಿಸಲ್ಪಡುವ ಶಿರಾ ಶಾಸಕ ಟಿ.ಬಿ. ಜಯಚಂದ್ರ 6 ಬಾರಿ ವಿಧಾನಸಭಾ ಸದಸ್ಯರಾಗಿ ಆಯ್ಕೆಯಾಗಿದ್ದು, ಮಂತ್ರಿಗಿರಿಯ ರೇಸ್‌ನಲ್ಲಿದ್ದಾರೆ. ಈ ಹಿಂದೆ ಕಳ್ಳಂಬೆಳ್ಳ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಇವರು, ಕ್ಷೇತ್ರ ಪುನರ್‌ವಿಂಗಡಣೆಯಾದ ಹಿನ್ನೆಲೆಯಲ್ಲಿ ಶಿರಾಕ್ಕೆ ಕ್ಷೇತ್ರ ಬದಲಿಸಿ, 2 ನೇ ಬಾರಿ ಶಿರಾದಿಂದ ಆಯ್ಕೆಯಾಗಿದ್ದಾರೆ.
ಎಸ್.ಎಂ. ಕೃಷ್ಣ ಸಚಿವ ಸಂಪುಟದಲ್ಲಿ ಕೃಷಿ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಅನುಭವ ಹಾಗೂ ಕೃಷ್ಣ ಅವಧಿಯಲ್ಲೇ ಕರ್ನಾಟಕದ ದೆಹಲಿ ವಿಶೇಷ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸಿದ್ದರು.  ಜಯಚಂದ್ರ ಕೃಷಿ ಸಚಿವರಾಗಿದ್ದ ವೇಳೆ ರಾಜ್ಯದಲ್ಲಿ ತೆಂಗು ಬೆಳೆಗೆ ನುಸಿಪೀಡೆ ರೋಗ ಬಂದು ಬೆಳೆಗೆ ತೀವ್ರ ಹಾನಿಯಾಗಿತ್ತು. ಆ ಸಂದರ್ಭದಲ್ಲಿ ತೆಂಗಿನ ನುಸಿಪೀಡೆಗೆ ಸರಿಯಾದ ಔಷಧ ಸಿಗದೆ ಬೆಳೆಗೆ ತೀವ್ರ ಹಾನಿಯಾಗಿತ್ತು. ಈ ಕುರಿತಂತೆ ವ್ಯಾಪಕ ಚರ್ಚೆಯಾಗಿ, ಸಚಿವರು ತೀವ್ರ ಟೀಕೆ ಎದುರಿಸಿದ್ದರು. ಕಾಂಗ್ರೆಸ್ ಅಧಿಕಾರದಲ್ಲಿರಲಿ, ಬಿಡಲಿ ಜಯಚಂದ್ರ ಮಾತ್ರ ಶಾಸಕರಾಗಿ ಆಯ್ಕೆಯಾಗುತ್ತಲೇ ಬಂದಿದ್ದಾರೆ. ಒಂದು ಬಾರಿ ಮಾತ್ರ ಬಿಜೆಪಿಯ ಕಿರಣ್‌ಕುಮಾರ್ ವಿರುದ್ದ ಕಳ್ಳಂಬೆಳ್ಳದಲ್ಲಿ ಸೋಲನ್ನು ಅನುಭವಿಸಿದ್ದರು. ಕಳೆದ ವಿಧಾನಸಭೆಯಲ್ಲಿ ವಿರೋಧಫಕ್ಷದ ಉಪನಾಯಕನಾಗಿ ಕರ್ತವ್ಯ ನಿರ್ವಹಿಸಿದ್ದರು.
ಕೆಎನ್‌ಆರ್: ಸಿದ್ದು ಆಪ್ತ, ಅಹಿಂದ ಮುಖಂಡ, ಸಹಕಾರಿ ಧುರೀಣ ಎಂದೇ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿರುವ ಮಧುಗಿರಿ ಕಾಂಗ್ರೆಸ್ ಶಾಸಕ ಕೆ.ಎನ್. ರಾಜಣ್ಣ ಕೂಡ ಕಾಂಗ್ರೆಸ್‌ನ ಹಿರಿಯ ಮುಖಂಡ. ಈ ಹಿಂದೆ ಕಾಂಗ್ರೆಸ್‌ನಿಂದ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗಿ, ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿ ಸಹಕಾರಿ ರಂಗದಲ್ಲಿ ಹೆಸರು ಮಾಡಿದ ಕೀರ್ತಿಗೆ ಪಾತ್ರರಾಗಿದ್ದಾರೆ.
 ಒಮ್ಮೆ ಬೆಳ್ಳಾವಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಕ್ಷೇತ್ರ ಪುನರ್ ವಿಂಗಡಣೆ ಹಿನ್ನೆಲೆಯಲ್ಲಿ ಮಧುಗಿರಿಗೆ ಕ್ಷೇತ್ರ ಬದಲಿಸಿ, ಅದೇ ಕ್ಷೇತ್ರದಲ್ಲಿ ಎರಡು ಬಾರಿ ಸೋತು, ಈ ಬಾರಿ ಜಯಗಳಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಆಪರೇಷನ್ ಕಮಲದ ಹಿನ್ನೆಲೆಯಲ್ಲಿ ತೆರವಾದ ಸ್ಥಾನದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಸೊಸೆ ಅನಿತಾ ಕುಮಾರಸ್ವಾಮಿ ವಿರುದ್ದ ಸ್ಫರ್ಧಿಸಿ ಪರಾಜಯಗೊಂಡಿದ್ದರು.
 2 ಬಾರಿ ಸೋತರು ಕ್ಷೇತ್ರದ ಜನತೆಯ ಸಮಸ್ಯೆಗಳಿಗೆ ಸ್ಪಂದಿಸುತ್ತಲೇ, ಈ ಬಾರಿ ಶಾಸಕರಾಗಿ ಆಯ್ಕೆಯಾಗಿರುವುದು ಗಮನಾರ್ಹ. ಹಾಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ರಾಜಣ್ಣ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದು, ಈಗಾಗಲೇ ತಾವೊಬ್ಬ ಪ್ರಬಲ ಸಚಿವ ಆಕಾಂಕ್ಷಿ ಎಂದು ಘೋಷಿಸಿದ್ದಾರೆ. ತಮ್ಮ ನೆಚ್ಚಿನ ಸಹಕಾರ ಖಾತೆ ಕೊಟ್ಟರೆ ಸಮರ್ಥವಾಗಿ ನಿಭಾಯಿಸುವುದಾಗಿಯೂ ಹೇಳಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.