ತುಮಕೂರು

ಗ್ರಾಮೀಣ ಪ್ರದೇಶದಲ್ಲಿ ವೈದ್ಯರ ಕೊರತೆಗೆ ಕೌನ್ಸೆಲಿಂಗ್ ವರ್ಗಾವಣೆ ಕಾರಣ: ಶಾಸಕ

Published On :

ಸಕಲೇಶಪುರ: ಸರ್ಕಾರ ವೈದ್ಯರನ್ನು ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡುತ್ತಿರುವುದೇ ಗ್ರಾಮಾಂತರ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಎದುರಾಗಲು ಕಾರಣವಾಗಿದೆ ಎಂದು ಶಾಸಕ ಎಚ್.ಕೆ. ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಗುರುವಾರ ಪಟ್ಟಣದ ಕ್ರಾಫರ್ಡ್ ಆಸ್ಪತ್ರೆಯಲ್ಲಿ ನಡೆದ ರಕ್ಷಾ ಸಮಿತಿ ಸಭೆಯಲ್ಲಿ ಮಾತನಾಡಿದ ಶಾಸಕರು, 150 ಹಾಸಿಗೆ ಸಾಮರ್ಥ್ಯದ ಈ ಆಸ್ಪತ್ರೆಯಲ್ಲಿ 6 ವೈದ್ಯರ ಕೊರತೆ ಇದ್ದು, ಡಿ ಗ್ರೂಪ್ ಸೇರಿದಂತೆ ಹಲವು ಸಿಬ್ಬಂದಿ ಕೊರತೆ ಇದೆ.
 ಆಸ್ಪತ್ರೆಗೆ ವೈದ್ಯರು ಹಾಗೂ ಸಿಬ್ಬಂದಿ ನೇಮಿಸುವಂತೆ ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳಲ್ಲಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ತಾಲೂಕು ಹಾಗೂ ಗ್ರಾಮಾಂತರ ಆಸ್ಪತ್ರೆಗಳಿಗೆ ಬರಲು ವೈದ್ಯರು ಹಿಂಜರಿಯುತ್ತಿದ್ದಾರೆ ಎಂದು ಹೇಳಿದರು.  ಈ ಸಮಸ್ಯೆಗೆ ಕೌನ್ಸಿಲಿಂಗ್ ಪದ್ಧತಿಯಲ್ಲಿ ವರ್ಗಾವಣೆ ಮಾಡುತ್ತಿರುವುದೇ ಕಾರಣವಾಗಿದ್ದು, ಸರ್ಕಾರ ಇದನ್ನು ರದ್ದು ಪಡಿಸಿ ನೇರ ವರ್ಗಾವಣೆ ಪದ್ಧತಿ ಜಾರಿಗೊಳಿಸಿದರೆ ಈ ಸಮಸ್ಯೆ ಬಗೆಹರಿಯಲು ಸಾಧ್ಯ ಎಂದರು. ಜೈ ಭೀಮು ಮಂಜು, ಚನ್ನವೇಣಿ ಎಂ ಶೆಟ್ಟಿ, ಡಾ.ಸುಧಾಕರ್, ವೈದ್ಯಾಧಿಕಾರಿ ಇಂದುಶೇಖರ್ ಇತರರು ಇದ್ದರು.

ಕಲುಷಿತ ನೀರು ಕುಡಿದು ಹಲವರು ಅಸ್ವಸ್ಥ
ಮೈಸೂರು: ನಗರದ ಹೃದಯ ಭಾಗದಲ್ಲಿನ ಹಳ್ಳದಕೇರಿ ಮತ್ತು ಸುತ್ತಮುತ್ತಲ ಪ್ರದೇಶಕ್ಕೆ ಪೂರೈಕೆಯಾಗುತ್ತಿರುವ ಕಲುಷಿತ ನೀರು ಕುಡಿದ ಹಿನ್ನೆಲೆಯಲ್ಲಿ ಹಲವು ಮಂದಿ ಅಸ್ವಸ್ಥಗೊಂಡಿದ್ದಾರೆ.
ಗ್ರಾಮಾಂತರ ಬಸ್ ನಿಲ್ದಾಣ ಹಿಂಭಾಗದ ಅನೇಕ ಮನೆಗಳಿಗೆ ಚರಂಡಿ ನೀರು ಮಿಶ್ರಿತ ಕಲುಷಿತ ನೀರು ಪೂರೈಕೆಯಾಗಿದೆ. ಕಳೆದ 15 ದಿನಗಳಿಂದ ಕಲುಷಿತ ಮತ್ತು ಗಬ್ಬು ನಾರುವ ನೀರು ಸರಬರಾಜಾಗುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.
 ಈ ಕಲುಷಿತ ನೀರು ಸೇವನೆಯಿಂದ ಅನೇಕರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ವಾಂತಿ, ಬೇಧಿ ಕಾಣಿಸಿಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಈ ಸಂಬಂಧ ಹಲವು ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಗುರುವಾರ ಶಾಸಕ ವಾಸು ಅವರು ಪಾಲಿಕೆ ಆಯುಕ್ತ ಪಿ.ಜಿ. ರಮೇಶ್ ಮತ್ತು ತಂಡದೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಮಹಿಳೆಯರು ಮನೆಯಲ್ಲಿ ಸಂಗ್ರಹಿಸಿಟ್ಟ ನೀರು ವಾಸನೆ ಬರುತ್ತಿರುವುದು ಮತ್ತು ಕಲುಷಿತಗೊಂಡಿರುವುದನ್ನು ತೋರಿಸಿದರು. ಅಲ್ಲದೆ, ನಲ್ಲಿಯಲ್ಲಿಯೂ ಕಲುಷಿತ ನೀರು ಪೂರೈಕೆ ಆಗುತ್ತಿರುವುದು ಮತ್ತು ನೀರಿನ ಪೈಪ್ ಒಡೆದು ಚರಂಡಿ ನೀರು ಸೇರುತ್ತಿರುವುದು ಕಂಡುಬಂತು.
ಈ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಶಾಸಕ ವಾಸು, ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಪೂರೈಸಲಾಗದ ಪರಿಸ್ಥಿಗೆ ನಾವು ಬಂದಿರುವುದು ನಾಚಿಕೆಗೇಡಿನ ಸಂಗತಿ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಶುದ್ಧ ಕುಡಿಯುವ ನೀರು ಪೂರೈಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.