ಪೌರಕಾರ್ಮಿಕರಿಂದ ಡಿಸಿ ಕಚೇರಿ ಎದುರು ಧರಣಿ ಆರಂಭ
ತುಮಕೂರು: ನಗರ ಪಾಲಿಕೆ, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತ್ಗಳಲ್ಲಿ 15-20 ವರ್ಷಗಳಿಂದ ಸಾವಿರಾರು ಜನ ಪೌರಕಾರ್ಮಿಕರು ದುಡಿಯುತ್ತಿದ್ದು ಪೌರಕಾರ್ಮಿಕರ ಸೇವೆಯನ್ನು ಕಾಯಂಗೊಳಿಸಬೇಕು, ಕಾಯಂಗೊಳಿಸುವವರೆಗೂ ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿಮಾಡಬೇಕು ಎಂದು ಒತ್ತಾಯಿಸಿ ಜಿಲ್ಲಾ ಪೌರಕಾರ್ಮಿಕರ ಸಂಘ ಅನಿರ್ದಿಷ್ಟ ಧರಣಿ ಆರಂಭಿಸಿತು.
ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಹೋರಾಟ ಬೆಂಬಲಿಸಿ ಮಾತನಾಡಿದ ಪಾವಗಡ ಶಾಸಕ ತಿಮ್ಮರಾಯಪ್ಪ ಮಾತನಾಡಿ ಪೌರಕಾರ್ಮಿಕರ ನ್ಯಾಯಯುತ ಹೋರಾಟಕ್ಕೆ ಬೆಂಬಲ ನೀಡುವುದರ ಜೊತೆಗೆ ನಾಳೆ ನಡೆಯಲಿರುವ ಬಜೆಟ್ ಅಧಿವೇಶನದಲ್ಲಿ ಪೌರಕಾರ್ಮಿಕರ ಕಾಯಮಾತಿ ಸೇರಿದಂತೆ ವಿವಿಧ ಬೇಡಿಕೆಗಳ ಬಗ್ಗೆ ಮಾತನಾಡುವುದಾಗಿ ಭರವಸೆ ನೀಡಿದರು.
ಮುನಿಸಿಪಲ್ ಕಾರ್ಮಿಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಸೈಯದ್ ಮುಜೀಬ್ ಮಾತನಾಡಿಕ ರಾಜ್ಯ ಎಲ್ಲಾ ನಗರ ಪಾಲಿಕೆ, ನಗರ ಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತ್ಗಳಲ್ಲಿ 15-20 ವರ್ಷಗಳಿಂದ ಸಾವಿರಾರು ಜನರು ಸ್ವಚ್ಛ ಲೋಡರ್, ಯುಜಿಡಿ ಕಾರ್ಮಿಕರು, ವಾಟರ್ ಮ್ಯಾನ್, ಡ್ರೈವರ್, ಎಲೆಕ್ಟ್ರೀಷಿಯನ್ ಕಚೇರಿ ಸಹಾಯಕರಾಗಿ, ಕಂಪ್ಯೂಟರ್ ಆಪರೇಟರ್ ಹಾಗೂ ಎಸ್.ಎ.ಎಸ್ ನೌಕರರಾಗಿ ದಿನಗೂಲಿ, ಗುತ್ತಿಗೆ ಹಾಗೂ ಹೊರಗುತ್ತಿಗೆ ಕಾರ್ಮಿಕರಾಗಿ ದುಡಿಯುತ್ತಾ ಬಂದಿದ್ದಾರೆ ಎಂದರು.
ನಗರ ಸ್ಥಳೀಯ ಸಂಸ್ಥೆಗಳಲ್ಲಿ ದುಡಿಯುತ್ತಿರುವ ಒಟ್ಟು ನೌಕರರಲ್ಲಿ ಅದಕ್ಕಿಂತ ಹೆಚ್ಚು ನೌಕರರು, ಗುತ್ತಿಗೆ ಕಾರ್ಮಿಕರಾಗಿಯೇ ದುಡಿಯುತ್ತಿದ್ದಾರೆ. ಈ ಕಾರ್ಮಿಕರಿಲ್ಲದೆ ನಗರ ಸ್ಥಳೀಯ ಸಂಸ್ಥೆಗಳ ಕೆಲಸಗಳು ನಡೆಯಲಾರವು. ಆದರೆ ಈ ಕಾರ್ಮಿಕರಿಗೆ ಕನಿಷ್ಠ ವೇತನವಿಲ್ಲದೆ, ಉದ್ಯೋಗ ಭದ್ರತೆಯಿಲ್ಲದೆ, ಕಾರ್ಮಿಕ ಕಾನೂನುಗಳ ಪ್ರಯೋಜನವಿಲ್ಲದೆ. ಸಾಮಾಜಿಕ ಭದ್ರತೆಗಳಿಲ್ಲದೆ ಅತೀವ ಸಂಕಷ್ಟಮಯವಾದ ಜೀವನ ನಡೆಸುತ್ತಿದ್ದಾರೆ ಎಂದರು.
ಪೌರ ಕಾರ್ಮಿಕರ ಸಂಘದ ಜಿಲ್ಲಾ ಉಪಾಧ್ಯಕ್ಷ ಚಂದ್ರಪ್ಪ ಮಾತನಾಡಿ ಕಾಂಗ್ರೆಸ್ ಪಕ್ಷವು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಅಶ್ವಾಸನೆ ನೀಡಿರುವಂತೆ, ರಾಜ್ಯದ ಮುಖ್ಯಮಂತ್ರಿಗಳು ಕಳೆದ ಬಜೆಟ್ನಲ್ಲಿ ಘೋಷಿಸಿರುವಂತೆ ಗುತ್ತಿಗೆ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸಬೇಕು. ಕಾಯಂಗೊಳಿಸುವತನಕ ಈ ಕೂಡಲೇ ಸಮಾನ ಕೆಲಸಕ್ಕೆ ಸಮಾನ ವೇತನಕ್ಕೆ ಒತ್ತಾಯಿಸಿ ಸರ್ಕಾರದ ಗಮನ ಸೆಳೆಯಲಾಗಿದೆ ಎಂದರು.
ಪೌರಕಾರ್ಮಿಕರಿಗೆ ಬೆಳಗಿನ ಉಪಹಾರವನ್ನು ಉಚಿತವಾಗಿ ನೀಡಬೇಕು, ಮನೆ ಬಾಡಿಗೆ ದುಬಾರಿ ಆಗುತ್ತಿರುವ ಕಾರಣ ಎಲ್ಲಾ ವಸತಿ ರಹಿತ ಪೌರಕಾರ್ಮಿಕರಿಗೆ ಉಚಿತ ವಸತಿ ವ್ಯವಸ್ಥೆಯನ್ನು ಒದಗಿಸಬೇಕು. ಕಾರ್ಮಿಕ ಕಾನೂನುಗಳನ್ನು ಸಮರ್ಪಕವಾಗಿ ಜಾರಿಗೊಳಿಸಿ, ಕಾರ್ಮಿಕರಿಗೆ ಸುರಕ್ಷತಾ ಸಲಕರಣೆಗಳನ್ನು ನೀಡಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ. ಉಮೇಶ್, ಕರ್ನಾಟಕ ಪ್ರಾಂತ ರೈತ ಸಂಘದ ನೌಷಾದ್ ಸೆಹಗನ್, ಪೌರಕಾರ್ಮಿಕರ ಸಂಘದ ಮಂಜುನಾಥ್, ಸ್ವಾಮಿ, ಜೂನಿ, ರಾಮಕೃಷ್ಣಪ್ಪ, ದೇವರಾಜುಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

