ತುಮಕೂರು

ಕಾನೂನಿನ ಬಗ್ಗೆ ಅರಿವು ಅಗತ್ಯ

Published On :

ತುಮಕೂರು: ಕಾನೂನಿನ ಬಗ್ಗೆ ಅರಿವು ಅಧಿಕಾರಿಗಳಿಗೆ, ಸಾರ್ವಜನಿಕರಿಗೆ ಅವಶ್ಯ ಎಂದು ಸಿವಿಲ್ ನ್ಯಾಯಾಧೀಶ ಡಿ. ರಾಘವೇಂದ್ರ ಅಭಿಪ್ರಾಯಪಟ್ಟರು.
ಅವರು ಕೊರಟಗೆರೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಹಾಗೂ ಕಾನೂನು ಸೇವಾ ಪ್ರಾಧಿಕಾರದ ಆಶ್ರಯದಲ್ಲಿ ಸಮಗ್ರ ಮಕ್ಕಳ ರಕ್ಷಣಾ ಯೋಜನೆ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ-2006 ರ ಕುರಿತು ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಇದರಿಂದ ಸಮಾಜದಲ್ಲಿ ತಪ್ಪುಗಳು ಆಗದಂತೆ ನೋಡಿಕೊಳ್ಳಬಹುದೆಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಕೊರಟಗೆರೆ ತಹಸೀಲ್ದಾರ್ ರಾಮಚಂದ್ರಪ್ಪ ಮಾತನಾಡಿ ಬಾಲ್ಯ ವಿವಾಹ ನಿಷೇಧ ಕಾಯ್ದೆ ಅನುಷ್ಠಾನಗೊಳಿಸುವಲ್ಲಿ ಅಧಿಕಾರಿಗಳ ಪಾತ್ರ ಬಹುಮುಖ್ಯವಾಗಿದ್ದು, ಯಾರೂ ಸಹ ನಿರ್ಲಕ್ಷ್ಯತನ ತೋರಬಾರದೆಂದು ತಿಳಿಸಿದರು.
ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ದೇವರಾಜ್ ಮಾತನಾಡಿ ಶಾಲಾ ಮಕ್ಕಳಿಗೂ ಸಹ ಮಕ್ಕಳ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಿ ಆ ಮೂಲಕ ಸಾಮಾಜಿಕ ಪಿಡುಗುಗಳನ್ನು ದೂರ ಮಾಡಬೇಕೆಂದು ಕರೆಕೊಟ್ಟರು.
ಪ್ರೋತ್ಸಾಹ ಬೇಡ: ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ತಾಲೂಕು ಆರೋಗ್ಯ ಅಧಿಕಾರಿ  ಡಾ. ಮೋಹನ್ ದಾಸ್ ಅವರು ಅಪ್ರಾಪ್ತ ವಯಸ್ಸಿನಲ್ಲಿ ಬಾಲಕಿಯರ ದೈಹಿಕ ಹಾಗೂ ಮಾನಸಿಕ ಬೆಳವಣಿಗೆ ಪೂರ್ಣವಾಗಿಲ್ಲದ ಕಾರಣ ಬಾಲ್ಯವಿವಾಹದಿಂದ ಮುಂದೆ ಹಲವಾರು ತೊಂದರೆಗಳು ಸಂಭವಿಸುತ್ತವೆ. ಕಾರಣ ಯಾರೂ ಇದನ್ನು ಪ್ರೋತ್ಸಾಹಿಸಬಾರದೆಂದು ತಿಳಿಸಿದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವಾಸಂತಿ ಉಪ್ಪಾರ್ ಮಾತನಾಡಿ ಬಾಲ್ಯ ವಿವಾಹದಿಂದಾಗುವ ವಿವಿಧ ರೀತಿಯ ಸಂಕಷ್ಟಗಳ ಮಾಹಿತಿ ನೀಡುತ್ತಾ ಬಾಲ್ಯ ವಿವಾಹಕ್ಕೊಳಗಾದ ಬಾಲಕಿಯರಿಗೆ ಪ್ರಾಯೋಜಿತ ಕಾರ್ಯಕ್ರಮದಡಿಯಲ್ಲಿ ಹಾಗೂ ಸರ್ಕಾರದ ಸಂಸ್ಥೆಗಳಲ್ಲಿ ಪುನರ್ವಸತಿ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಮಾಹಿತಿ: ಅಲ್ಲದೇ ಸಮಗ್ರ ಮಕ್ಕಳ ರಕ್ಷಣಾ ಯೋಜನೆ ಮಾಹಿತಿ ನೀಡುತ್ತಾ ಎಚ್.ಐ.ವಿ, ಏಡ್ಸ್ ಬಾಧಿತ ಸೋಂಕಿತರಿಗೆ ಇರುವ ವಿಶೇಷ ಪಾಲನಾ ಯೋಜನೆ, ಅನಾಥ, ನಿರ್ಗತಿಕ, ಪರಿತ್ಯಕ್ತ ಮಕ್ಕಳಿಗಿರುವ ದತ್ತು ಕಾರ್ಯಕ್ರಮ, ಮಕ್ಕಳ ಕಲ್ಯಾಣ ಸಮಿತಿ ಹಾಗೂ ಬಾಲನ್ಯಾಯ ಮಂಡಳಿಯ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.
ತರಬೇತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಶಾಲಾ ಮುಖ್ಯೋಪಾಧ್ಯಾಯರು, ಅಂಗನವಾಡಿ ಮೇಲ್ವಿಚಾರಕಿಯರು ಹಾಗೂ ಕಂದಾಯ ನಿರೀಕ್ಷಕರು ಹಾಜರಿದ್ದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿಶ್ವನಾಥ್ ಅವರು ಪ್ರಾಸ್ತಾವಿಕ ಭಾಷಣ ಮಾಡಿ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.