ತುಮಕೂರು

ಸಮಾವೇಶದಲ್ಲೇ ಕಾಂಗ್ರೆಸ್ ಮಗ್ನ

Published On :

ತುಮಕೂರು: ಕಳೆದ ಒಂದು ತಿಂಗಳಿನಿಂದ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೇವಲ ಜಾತಿ ಆಧಾರಿತ ಸಮಾವೇಶ ಮಾಡುತ್ತಾ ಕಾಲಹರಣ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.
ಅವರು ತುಮಕೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಜಾತಿ ಆಧಾರಿತ ಸಮಾವೇಶದಲ್ಲಿ ಜಾತಿ ಪ್ರಮುಖರು ಕೊಟ್ಟಿರುವ ಬೇಡಿಕೆಯನ್ನು ಈಡೇರಿಸಲು ಯಾವಾಗ ಕಾರ್ಯೋನ್ಮುಖರಾಗುತ್ತಾರೆ ಎಂದು ಪ್ರಶ್ನಿಸಿದರು.
ಕಳೆದ 8 ತಿಂಗಳಿನಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿಲ್ಲ ಎಂದು ಆರೋಪಿಸಿದರು. ಬಜೆಟ್‌ನಲ್ಲಿ 50 ಸಾವಿರ ಕೋಟಿ ನೀರಾವರಿಗೆ ಇಟ್ಟಿರುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ ಎತ್ತಿನಹೊಳೆ ಯೋಜನೆ ಇನ್ನು ಎತ್ತೇ ಇಲ್ಲ ಎಂದು ವ್ಯಂಗ್ಯವಾಡಿದರು. ನೀರಾವರಿ ಸೇರಿದಂತೆ ಯಾವುದೇ ಅಭಿವೃದ್ಧಿ ಕಾರ್ಯಗಳಿಗೂ ಕಾಂಗ್ರೆಸ್ ಮುಂದಾಗುತ್ತಿಲ್ಲ ಎಂದರು.
ಕೆಲವರು ಜೆಡಿಎಸ್ ನೆಲೆ ಕುಸಿತವಾಗುತ್ತಿದೆ ಎಂದು ಅಪಪ್ರಚಾರದಲ್ಲಿ ತೊಡಿಗಿದ್ದಾರೆ. ಅಲ್ಲದೇ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ಗೆ ಕೇವಲ 3 ಸ್ಥಾನ ಮಾತ್ರ ಬರುತ್ತದೆ ಎಂದು ಸುದ್ದಿ ಹಬ್ಬಿಸುತ್ತಿದ್ದಾರೆ. ಅವರಿಗೆಲ್ಲಾ ತಕ್ಕ ಪಾಠ ಕಲಿಸುವ ಎಚ್ಚರಿಕೆಯನ್ನು ಕುಮಾರಸ್ವಾಮಿ ನೀಡಿದರು.
ಪೊಳ್ಳು ಘೋಷಣೆ: ಕಾನೂನು ಸಚಿವ ಟಿ.ಬಿ. ಜಯಚಂದ್ರ ಅವರು ತುಮಕೂರು ಜಿಲ್ಲೆಗೆ ಎತ್ತಿನಹೊಳೆ, ಭದ್ರ ಮೇಲ್ದಂಡೆ ಹಾಗೂ ಹೇಮಾವತಿ ಯೋಜನೆಯಿಂದ ನೀರು ತರುವುದಾಗಿ ಪೊಳ್ಳು ಘೋಷಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಎತ್ತಿನಹೊಳೆ ಯೋಜನೆಗೆ ಬಗ್ಗೆ ಸಾರ್ವಜನಿಕರಲ್ಲಿ ಸರ್ಕಾರ ಗೊಂದಲ ಮೂಡಿಸುತ್ತಿದೆ. ಇದನ್ನೆಲ್ಲಾ ಗಮನಿಸಿದರೆ ಸರ್ಕಾರಕ್ಕೆ ಎಷ್ಟರ ಮಟ್ಟಿಗೆ  ಬದ್ಧತೆ ಇದೆ ಎಂಬುದು ಅರ್ಥ ಮಾಡಿಕೊಳ್ಳಬೇಕು ಎಂದು ಕಟಕಿಯಾಡಿದರು.
ರಾಜ್ಯದಲ್ಲಿ ನಮೋ ಗಾಳಿ ಇಲ್ಲ ಎಂದ ಅವರು ಮುಂಬರುವ ಲೋಕಸಭಾ ಚುನಾವಣೆಯನ್ನು ಜೆಡಿಎಸ್ ಸವಾಲಾಗಿ ಸ್ವೀಕರಿಸುತ್ತದೆ ಎಂದು ತಿಳಿಸಿದರು.
15 ಕ್ಷೇತ್ರಗಳ ಗುರಿ: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ 15 ಕ್ಷೇತ್ರಗಳಲ್ಲಿ ಗೆಲ್ಲಲ್ಲು ಪ್ರಯತ್ನಿಸುತ್ತಿದೆ ಎಂದ ಅವರು ಇನ್ನು ಎರಡು ದಿವಸದಲ್ಲಿ ರಾಜ್ಯದ ಎಲ್ಲಾ 28 ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಲಾಗುವುದು ಎಂದು ತಿಳಿಸಿದರು.
ಟಿಬಿಜೆ ಬಗ್ಗೆ ಆಕ್ರೋಶ: ತುಮಕೂರು ಜಿಲ್ಲೆಗೆ ನಿಗದಿಯಾಗಿರುವ ನೀರಿನಲ್ಲಿ ಹೆಚ್ಚುವರಿಯಾಗಿ 1 ಟಿಎಂಸಿ ನೀರನ್ನು ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ. ಜಯಚಂದ್ರ ಅವರು ಶಿರಾಕ್ಕೆ ತೆಗೆದುಕೊಂಡು ಹೋಗಿದ್ದಾರೆ ಎಂದು ಕುಣಿಗಲ್ ಶಾಸಕ ಹಾಗೂ ಮಾಜಿ ಸಚಿವ ಡಿ. ನಾಗರಾಜಯ್ಯ ಆರೋಪ ಮಾಡಿದರು. ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಡಾ. ಎಂ.ಆರ್. ಹುಲಿನಾಯ್ಕರ್, ಶಾಸಕರಾದ ಸುರೇಶ್‌ಬಾಬು, ಎಂ.ಟಿ. ಕೃಷ್ಣಪ್ಪ, ಎಸ್.ಆರ್. ಶ್ರೀನಿವಾಸ್, ಮಾಜಿ ಸಚಿವ ಬಿ. ಸತ್ಯನಾರಾಯಣ ಇತರರು ಇದ್ದರು.
ಆಕಾಂಕ್ಷಿಗಳ ದೊಡ್ಡ ಪಟ್ಟಿ
ತುಮಕೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಿಂದ ಸ್ಪರ್ಧಿಸಲು ಆಕಾಂಕ್ಷಿಗಳ ದೊಡ್ಡ ಪಟ್ಟಿಯೇ ತಮ್ಮ ಮುಂದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು. ಅವರು ತುಮಕೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ತುಮಕೂರಿಗೆ ಯಾರನ್ನು ಅಭ್ಯರ್ಥಿಯನ್ನಾಗಿ ಮಾಡಬೇಕು ಎಂಬ ಬಗ್ಗೆ ಮೊದಲ ಹಂತದ ಮಾತುಕತೆ ಮುಗಿದಿದೆ. ಎರಡನೇ ಹಂತದಲ್ಲಿ ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗುವುದು ಎಂದರು. ಜೆಡಿಎಸ್ ರಾಜ್ಯಾಧ್ಯಕ್ಷ ಎ. ಕೃಷ್ಣಪ್ಪ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಹುಲಿನಾಯ್ಕರ್, ಮಾಜಿ ಸಚಿವ ಚನ್ನಿಗಪ್ಪ, ಬಿ. ಸತ್ಯನಾರಾಯಣ, ಡಿ. ನಾಗರಾಜಯ್ಯ ಮುಂತಾದವರ ಹೆಸರು ಇದೆ. 2 ದಿವಸದಲ್ಲಿ ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗುವುದು ಎಂದರು.
ಕೇರಳ, ಮಹಾರಾಷ್ಟ್ರದಲ್ಲೂ ಜೆಡಿಎಸ್ ಅಭ್ಯರ್ಥಿ
ತುಮಕೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವ ಇಂಗಿತವನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸಿದರು. ಕೇರಳ ಮತ್ತು ಮಹಾರಾಷ್ಟ್ರದಲ್ಲಿ ತಲಾ ಒಂದು ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವುದಾಗಿ ತಿಳಿಸಿದರು. ಲೋಕಸಭಾ ಚುನಾವಣೆಯಲ್ಲಿ ಯಾವ ಪಕ್ಷದ ಜೊತೆಯೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಕಮ್ಯುನಿಸ್ಟರಿಗೆ ಒಂದು ಕ್ಷೇತ್ರವನ್ನು ಬಿಟ್ಟುಕೊಡುವುದಾಗಿ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.