ತುಮಕೂರು

ಯುವಜನತೆ ಚುನಾವಣಾ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳಲಿ

Published On :

ತುಮಕೂರು: ಪ್ರಜಾಪ್ರಭುತ್ವದಲ್ಲಿ ದೃಢವಿಶ್ವಾಸವುಳ್ಳ ಭಾರತದ ಪ್ರಜೆಗಳಾದ ನಾವು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಲು ಚುನಾವಣಾ ಪ್ರಕ್ರಿಯೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕಿದೆ. ಅದರಲ್ಲೂ ಯುವ ಜನತೆ ಚುನಾವಣಾ ಪ್ರಕ್ರಿಯೆಗಳಲ್ಲಿ ತಮ್ಮನ್ನು ತಾವು  ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ.ಎಸ್. ಸತ್ಯಮೂರ್ತಿ ಕರೆ ನೀಡಿದರು.
ನಗರದ ಗುಬ್ಬಿ ವೀರಣ್ಣ ಕಲಾಮಂದಿರದಲ್ಲಿ ಜಿಲ್ಲಾಡಳಿತದ ವತಿಯಿಂದ ಏರ್ಪಡಿಸಲಾಗಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ದೇಶಾದ್ಯಂತ ಪ್ರತಿವರ್ಷ ಆಚರಿಸಲಾಗುತ್ತಿದ್ದು, ಈ ದಿನ ಮತದಾರರಾಗಿ ನೋಂದಾವಣೆಗೊಳ್ಳುವ ಯುವ ಮತದಾರರು ಯಾವ ಆಮಿಷಕ್ಕೂ ಒಳಗಾಗದೆ ತಮ್ಮ ಪಾಲಿಗೆ ದೊರೆತಿರುವ ಮತದಾನ ಮಾಡುವ ಅಧಿಕಾರವನ್ನು ಎಚ್ಚರದಿಂದ ಚಲಾಯಿಸುವಂತೆ ಜಿಲ್ಲಾಧಿಕಾರಿಗಳು ಕರೆ ನೀಡಿದರು.
ಯಾವುದೇ ಆಮಿಷಕ್ಕೊಳಗಾಗದೆ ಮತ್ತು ಯಾರಿಗೂ ಮತ ಮಾರಿಕೊಳ್ಳದೆ ಯುವ ಜನಾಂಗ ಸ್ವಂತ ವಿವೇಚನೆಯಿಂದ ದೇಶದ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು  ಮತದಾನದ ಹಕ್ಕನ್ನು ಚಲಾಯಿಸಿದಲ್ಲಿ ಉತ್ತಮ ಸರ್ಕಾರ ನಮ್ಮದಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಮಸ್ಯೆ ಬಗೆ ಹರಿಸಲು ಕ್ರಮ: ಮೂಲಭೂತ ಸೌಕರ್ಯಗಳಿಗೆ ಮತ್ತು ಸಮಸ್ಯೆಗಳ ಪರಿಹಾರ ಕೋರಿ ಹಲವು ಕಡೆ ಚುನಾವಣಾ ಸಂದರ್ಭ ಜನತೆ ಚುನಾವಣೆಯನ್ನು ಬಹಿಷ್ಕರಿಸುವ ಸಾಧ್ಯತೆ ಇದ್ದು, ಬೂತ್ ಮಟ್ಟದ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಮತದಾರರ ಸ್ಥಳೀಯ ಸಮಸ್ಯೆಗಳ ಕುರಿತಂತೆ ಜಿಲ್ಲಾಡಳಿತದ ಗಮನಕ್ಕೆ ತಂದಲ್ಲಿ ಜಿಲ್ಲಾಡಳಿತ ಸಮಸ್ಯೆಯನ್ನು ಚುನಾವಣೆಗೆ ಮುಂಚಿತವಾಗಿ ಬಗೆಹರಿಸಲು ಕ್ರಮ ಕೈಗೊಳ್ಳುವುದು ಎಂದು ತಿಳಿಸಿದ ಜಿಲ್ಲಾಧಿಕಾರಿಗಳು, ಚುನಾವಣೆಯ ದಿನ ಯಾವುದೇ ಸಮಸ್ಯೆಗೆ ತಕ್ಷಣ ಪರಿಹಾರ ನೀಡುವುದು ಕಷ್ಟಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಉತ್ತಮ ಆಯ್ಕೆ ಮಾಡಿ: ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ರಮಣಗುಪ್ತ ಮಾತನಾಡಿ, ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆ ವಿಶ್ವದಲ್ಲೇ ಅತಿ ದೊಡ್ಡ ವ್ಯವಸ್ಥೆಯಾಗಿದ್ದು, ಈ ವ್ಯವಸ್ಥೆಯು ಯಶಸ್ವಿಯಾಗಿ ಪರಿಣಾಮಕಾರಿಯಾಗಿ ಅನುಷ್ಠಾನವಾಗಬೇಕಾದರೆ ಉತ್ತಮ ಜನಪ್ರತಿನಿಧಿಗಳ ಆಯ್ಕೆ ಅತ್ಯಗತ್ಯ, ಉತ್ತಮ ಆಡಳಿತ ನಡೆಸುವ ಉತ್ತಮ ಗುರಿಯನ್ನು ಹೊಂದಿರತಕ್ಕಂತಹ ಅಭ್ಯರ್ಥಿಗಳನ್ನು ಆರಿಸಬೇಕಾಗುತ್ತದೆ.  ಯುವ ಜನಾಂಗ ಈ ನಿಟ್ಟಿನಲ್ಲಿ ಯೋಚಿಸುವಂತಾಗಬೇಕು ಎಂದು ತಿಳಿಸಿದರು.
ನೋಂದಣಿ ಮಾಡಿಕೊಳ್ಳಿ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗೋವಿಂದರಾಜು ಅವರು ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಯ್ಕೆಯಾಗಿ ಬಂದಂತಹ ಜನಪ್ರತಿನಿಧಿಗಳು ಜನತೆಯ ಆಶೋತ್ತರಗಳನ್ನು ಈಡೇರಿಸಿದರೆ ಪ್ರಜಾಪ್ರಭುತ್ವದ ವ್ಯವಸ್ಥೆ ಯಶಸ್ವಿಯಾಗುತ್ತದೆ. ಇಲ್ಲವಾದಲ್ಲಿ ವಿಫಲವಾಗುತ್ತದೆ ಎಂದರು.
ಇತ್ತೀಚಿನ ದಿನಗಳಲ್ಲಿ ಮತಗಟ್ಟೆಗೆ ತೆರಳಿ ಮತದಾನ ಮಾಡುವವರ ಸಂಖ್ಯೆ ಕಡಿಮೆಯಾಗುತ್ತಿದೆ.  ಶೇ.60 ರಷ್ಟು ಮತದಾನವಾದಲ್ಲಿ ಹೆಚ್ಚು ಎಂಬಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಬಾರದು. ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆದಂತೆ ಉತ್ತಮ ಆಡಳಿತ ಜನತೆಗೆ ದೊರಕುತ್ತದೆ.  1.1.2014 ಕ್ಕೆ 18 ವರ್ಷ ತುಂಬಿದ ಜಿಲ್ಲೆಯ ಯುವಕ, ಯುವತಿಯರು ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಂಡು, ಎಪಿಕ್ ಕಾರ್ಡ್ ಪಡೆದು ತಮ್ಮ ವಾರ್ಡ್ಗಳಲ್ಲಿನ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರಿರುವ ಬಗ್ಗೆ ಪರಿಶೀಲಿಸಿಕೊಳ್ಳಬೇಕು ಎಂದರು.  
ಅಪರ ಜಿಲ್ಲಾಧಿಕಾರಿ ಪೆದ್ದಪ್ಪಯ, ಶಿಕ್ಷಣ ಇಲಾಖೆಯ ಡಿಡಿಪಿಐಗಳಾದ ಈಶ್ವರಯ್ಯ, ಆಂಜಿನಪ್ಪ, ಉಪವಿಭಾಗಾಧಿಕಾರಿ ಆನಂದ್, ತಹಸೀಲ್ದಾರ್ ಏಕೇಶ್ಬಾಬು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಈ ಸಂದರ್ಭ 18 ವರ್ಷ ತುಂಬಿದ ಮೂವರು ಯುವ ಮತದಾರರಿಗೆ ಗುರುತಿನ ಚೀಟಿಯನ್ನು
ವಿತರಿಸಲಾಯಿತು. ಹಾಗೂ ಮತದಾರ ದಿನಾಚರಣೆ ಮಹತ್ವ ಸಾರುವ ಕುರಿತಂತೆ ಏರ್ಪಡಿಸಲಾಗಿದ್ದ ಭಾಷಣ ಹಾಗೂ ಗಾಯನ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.