ತುಮಕೂರು

ಎತ್ತಿನಹೊಳೆ ಅವೈಜ್ಞಾನಿಕವಲ್ಲ

Published On :

ತುಮಕೂರು: ಎತ್ತಿನಹೊಳೆ ಯೋಜನೆ ಅವೈಜ್ಞಾನಿಕವಲ್ಲ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಸ್ಪಷ್ಟಪಡಿಸಿದರು.
ತುಮಕೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ಸರ್ಕಾರದಲ್ಲಿ ಮಂಜೂರಾದ ಈ ಯೋಜನೆಯನ್ನು ಈ ಕೂಡಲೇ ಸರ್ಕಾರ ಕಾರ್ಯಗತಗೊಳಿಸಬೇಕು ಎಂದು ಆಗ್ರಹಿಸಿದರು.
ಪೈಪ್ಲೈನ್ ಮೂಲಕ ನೀರು ಎತ್ತುವುದರ ಬಗ್ಗೆ ನಡೆಯುತ್ತಿರುವ ಚರ್ಚೆಗಳ ಬಗ್ಗೆ ಪ್ರತಿಕ್ರಿಯಿಸಿದ ಶಿವಣ್ಣ, ಪೈಪ್ ಲೈನ್ ಮೂಲಕ ನೀರು ಎತ್ತುವುದರಲ್ಲಿ ಯಾವುದೇ ತಪ್ಪಿಲ್ಲ. ಕುಡಿಯುವ ನೀರಿನಿಂದ ತತ್ತರಿಸುತ್ತಿರುವ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಎತ್ತಿನಹೊಳೆ ಯೋಜನೆಯೊಂದಿಗೆ ವಾಟರ್ ಗ್ರಿಡ್ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಲು ಎಂದು ಮನವಿ ಮಾಡಿದರು.
ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಹಾಗೂ ತುಮಕೂರು ಜಿಲ್ಲೆಯ ಕಾಂಗ್ರೆಸ್ ಶಾಸಕರು ಹಾಗೂ ಸಚಿವ ಟಿ.ಬಿ. ಜಯಚಂದ್ರ ನಡುವೆ ಸಾಮರಸ್ಯದ ಕೊರತೆ ಇರುವುದರಿಂದಲೇ ಅಜ್ಜಗೊಂಡನಹಳ್ಳಿ ಘನತ್ಯಾಜ್ಯ ವಿಲೇವಾರಿ ಘಟಕ ಸ್ಥಗಿತಗೊಂಡಿದೆ ಎಂದು ತಿಳಿಸಿದರು.
ಕೈಗಾರಿಕಾ ಕಾರಿಡಾರ್, ನಿಮ್ಜ್ ವಲಯ ಆ ಭಾಗದಲ್ಲಿ ತಲೆ ಎತ್ತುತ್ತಿರುವುದರಿಂದ ಕೆಲ ಪಟ್ಟಭದ್ರ ಶಕ್ತಿಗಳನ್ನು ಸುತ್ತಮುತ್ತಲಿನ ಜಾಗಗಳನ್ನು ಆಕ್ರಮಿಸಿಕೊಳ್ಳುವ ಸಲುವಾಗಿ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದರು. ಕೇಂದ್ರ ಬಜೆಟ್ನಲ್ಲಿ ಕೃಷಿಗೆ ಹಾಗೂ ತುಮಕೂರು ಜಿಲ್ಲೆಗೆ ಹೆಚ್ಚಿನ ಕೊಡುಗೆ ನೀಡಲಾಗಿದೆ ಎಂದ ಮಾಜಿ ಸಚಿವ ಸೊಗಡು ಶಿವಣ್ಣ, ಕೃಷಿ ಉತ್ಪನ್ನಗಳಿಗಾಗಿ ಗೋಧಾಮುಗಳ ನಿರ್ಮಾಣ, ತುಮಕೂರಿಗೆ ಕೈಗಾರಿಕಾ ಸ್ಮಾರ್ಟ್ ಸಿಟಿ ಕೊಟ್ಟಿರುವುದು, ಜಿಲ್ಲೆಯ ಅಭಿವೃದ್ಧಿಗೆ ಪೂರಕವೆನಿಸಿದೆಯೆಂದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಬಿ. ನಂದೀಶ್, ಜಿಲ್ಲಾ ಕಾರ್ಯದರ್ಶಿ ಬಿ.ಎಸ್. ನಂದೀಶ್, ಎಪಿಎಂಸಿ ಅಧ್ಯಕ್ಷ ಶಿವಕುಮಾರ್, ವೇಣುಗೋಪಾಲ್, ಮೃತ್ಯುಂಜಯ, ಹರಪ್ರಸಾದ್, ರಾಜೀವ್, ಚಂದ್ರಶೇಖರ್ ಇತರರು ಹಾಜರಿದ್ದರು.


15ರಿಂದ ರೈತ ಮೋರ್ಚಾ ಕಾರ್ಯಕಾರಿಣಿ


ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ಶಿವಪ್ರಸಾದ್ ಮಾತನಾಡಿ, ಪಕ್ಷದ ರೈತ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಭೆ ಜು.15 ಮತ್ತು 16ರಂದು ಸಿದ್ಧಗಂಗಾ ಮಠದ ಉದ್ದಾನೇಶ್ವರ ಸಮುದಾಯಭವನದಲ್ಲಿ ನಡೆಯಲಿದೆ. ರಾಜ್ಯ ಪರಿಷತ್ ಸಭೆ, ಕಾರ್ಯಕಾರಿಣಿ, ರೈತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಎರಡು ದಿನಗಳ ಸಭೆಯಲ್ಲಿ  ಚರ್ಚಿಸಲಾಗುವುದು ಎಂದರು.
ರಾಜ್ಯದ ಎಲ್ಲಾ ಜಿಲ್ಲೆಗಳ ರೈತ ಮೋರ್ಚಾ ಪ್ರತಿನಿಧಿಗಳು ಸುಮಾರು 600 ಸಂಖ್ಯೆಯಲ್ಲಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದು, 15ರಂದು ಬೆಳಿಗ್ಗೆ 10 ಕ್ಕೆ ರಾಜ್ಯಕಾರ್ಯಕಾರಿಣಿ ಪದಾಧಿಕಾರಿಗಳ ಸಭೆಯನ್ನು ರೈತಮೋರ್ಚಾ ರಾಜ್ಯಾಧ್ಯಕ್ಷ ಅರಗ ಜ್ಞಾನೇಂದ್ರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುಗಣಕರರಾವ್, ರಾಷ್ಟ್ರೀಯ ಕಾರ್ಯದರ್ಶಿ ಶಂಕರನಾರಾಯಣ ರೆಡ್ಡಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಸಂಜೆ 4ಕ್ಕೆ ನಡೆಯುವ ರಾಜ್ಯ ಕಾರ್ಯಕಾರಿಣಿ ಸಮಾರೋಪದಲ್ಲಿ ಬಿಜೆಪಿ ಸಂಘಟನಾ ಕಾರ್ಯದರ್ಶಿ ಸಂತೋಷ್ ಪಾಲ್ಗೊಳ್ಳುವರು. ಜು.16ರಂದು ಬೆಳಿಗ್ಗೆ 10 ಕ್ಕೆ ಜರುಗುವ ರಾಜ್ಯ ಪರಿಷತ್ ಸಭೆಯನ್ನು ರಾಷ್ಟ್ರೀಯ ಕಿಸಾನ್ ಮೋರ್ಚಾ ಅಧ್ಯಕ್ಷ ಓಂಪ್ರಕಾಶ್ ಧನಕಡ್ ಉದ್ಘಾಟಿಸಲಿದ್ದು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪಾಲ್ಗೊಳ್ಳುವರು ಎಂದು ನುಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.