ಕಾಮುಕರಿಗೆ ಗಲ್ಲು ಶಿಕ್ಷೆ ವಿಧಿಸಿ
ತುಮಕೂರು: ನಿರಂಂತರವಾಗಿ ಮಹಿಳೆಯರ ಮೇಲೆ ನಡೆದಿರುವ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ, ಕಾಮುಕರಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಜಯ ಕರ್ನಾಟಕ ಜಿಲ್ಲಾ ವಿದ್ಯಾರ್ಥಿ ಘಟಕದ ವತಿಯಿಂದ ತುಮಕೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.
ವಿದ್ಯಾರ್ಥಿ ಘಟಕದ ಜಿಲ್ಲಾಧ್ಯಕ್ಷ ಚಂದನ್ ಹಾಗೂ ಜಯಕರ್ನಾಟಕ ಜಿಲ್ಲಾ ಕಾರ್ಯಾದ್ಯಕ್ಷ ಸೋಮಶೇಖರ್ ನೇತೃತ್ವದಲ್ಲಿ ತುಮಕೂರಿನ ಶಿವಕುಮಾರಸ್ವಾಮಿ ವೃತ್ತದಲ್ಲಿ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಿದ್ದರೆ ಇಂತಹ ಪ್ರಕರಣಗಳು ಮರುಕಳಿಸುತ್ತಿರಲಿಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಬೇಜವಾಬ್ದಾರಿ ನೀತಿ ಹಾಗು ಹೊಣೆಗೇಡಿತನದಿಂದ ಅತ್ಯಾಚಾರ ಪ್ರಕರಣ ಮರುಕಳಿಸುತ್ತಿವೆ. ಇಷ್ಟೆಲ್ಲಾ ಅನಾಹುತಗಳಿಗೂ ಆಡಳಿತಾರೂಢ ಸರ್ಕಾರಗಳೇ ನೇರ ಹೊಣೆ ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಅತ್ಯಾಚಾರ ಪ್ರಕರಣ ಸರಣಿಯೋಪಾದಿಯಲ್ಲಿ ಮರುಕಳಿಸುತ್ತಿದ್ದು, ರಾಜ್ಯದಲ್ಲಿ ಆಡಳಿತಾರೂಡ ಕಾಂಗ್ರೆಸ್ ಸರ್ಕಾರ ಕಣ್ಮುಚ್ಚಿ ಕುಳಿತಿದೆ. ಗೃಹಸಚಿವರು ತಮ್ಮ ಇಲಾಖೆ ಸಿಬ್ಬಂದಿ ಮೇಲೆ ನಿಯಂತ್ರಣ ಸಾಧಿಸಲು ಸಾಧ್ಯವಾಗದಷ್ಟು ಅಸಮರ್ಥರಾಗಿದ್ದಾರೆ. ಇಂತಹ ಅಸಮರ್ಥ ಸಚಿವರನ್ನು ಕೂಡಲೇ ಸಚಿವ ಸಂಪುಟದಿಂದ ವಜಾ ಮಾಡಬೇಕೆಂದು ಪ್ರತಿಭಟನಾನಿರತರು ಆಗ್ರಹಿಸಿದರು. ಅತ್ಯಾಚಾರ ಪ್ರಕರಣ ಇದೇ ರೀತಿ ಮರುಕಳಿಸಿದ್ದೇ ಆದರೆ ಜಯಕರ್ನಾಟಕ ಸಂಘಟನೆಯಿಂದ ರಾಜ್ಯಾದ್ಯಂತ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಸಲಾಯಿತು. ಜಯರ್ನಾಟಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಪ್ಪ, ವಿದ್ಯಾರ್ಥಿ ಘಟಕದ ನಗರ ಪ್ರಧಾನ ಕಾರ್ಯದರ್ಶಿ ರಾಕೇಶ್, ಅಖಿಲೇಶ್, ಅಂಜನ್,ಪುನಿತ್, ಮಲ್ಲೇಶ್, ಮಹಿಳಾ ಘಟಕದ ಅಧ್ಯಕ್ಷೆ ರಾಧ, ಯಶೋಧ, ಕಮಲಮ್ಮ, ಲತಾ ನೇತೃತ್ವ ವಹಿಸಿದ್ದರು.
ಅತ್ಯಾಚಾರಿಗಳಿಗೆ ಉಗ್ರ ಶಿಕ್ಷೆ ನೀಡಿ: ನಟೇಶ್
ತಿಪಟೂರು: ರಾಜ್ಯದ ವಿವಿಧೆಡೆಗಳಲ್ಲಿ ಮಹಿಳೆ ಮತ್ತು ಮಕ್ಕಳ ಮೇಲೆ ಸರಣಿ ಲೈಂಗಿಕ ಹಾಗೂ ಅತ್ಯಾಚಾರ ನಡೆಯುತ್ತಿದ್ದು, ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಟೇಶ್ ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರ ನಿರ್ಲಕ್ಷ್ಯ ಬಿಟ್ಟು ಗೃಹ ಇಲಾಖೆ ರಾಜ್ಯದ ಜನತೆಗೆ ಮುಂದಿನ ದಿನಗಳಲ್ಲಿ ರಕ್ಷಣೆ ನೀಡಬೇಕು. ಇಲ್ಲವಾದಲ್ಲಿ ಬೀದಿಗಿಳಿದು ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ರಾಜ್ಯಾಧ್ಯಕ್ಷ ಹತ್ಯಾಳ್ ಮೂರ್ತಿ, ರಾಜಶೇಖರ್, ಕೀರ್ತಿ ಸೇರಿದಂತೆ ಪ್ರಗತಿಪರ ಹೋರಾಟ ಸಂಘಟನೆಯ ಪದಾಧಿಕಾರಿಗಳು ಹಾಜರಿದ್ದರು.
ಕಾಮುಕರ ಮಟ್ಟ ಹಾಕಲು ಸರ್ಕಾರ ವಿಫಲ
ತುಮಕೂರು: ಮಹಿಳೆಯರು, ಯುವತಿಯರು, ಶಾಲಾ ವಿದ್ಯಾರ್ಥಿನಿಯರ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ಡಿಸಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಯಿತು. ರಾಜ್ಯ ಬಿಜೆಪಿ ಕರೆ ಮೇರೆಗೆ ತುಮಕೂರು ಡಿಸಿ ಕಚೇರಿ ಆವರಣದಲ್ಲಿ ಧರಣಿ ಕುಳಿತ ಜಿಲ್ಲಾ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಮಹಿಳೆಯರಿಗೆ ಸೂಕ್ತ ರಕ್ಷಣೆ ಒದಗಿಸಲಾಗದ ರಾಜ್ಯ ಸರಕಾರವನ್ನು ರಾಜ್ಯಪಾಲರು ವಜಾಗೊಳಿಸಬೇಕು. ಗೃಹ ಸಚಿವರಿಂದ ಕೂಡಲೇ ರಾಜಿನಾಮೆ ಪಡೆಯಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆ ನೇತೃತ್ವ ವಹಿಸಿದ್ದ ಮಾಜಿ ಸಂಸದ ಜಿ.ಎಸ್. ಬಸವರಾಜ್, ಬಿಜೆಪಿ ರಾಜ್ಯ ಕಾರ್ಯದರ್ಶಿ ಎಂ.ಬಿ. ನಂದೀಶ್ ಮಾತನಾಡಿದರು. ಪ್ರತಿಭಟನೆಯಲ್ಲಿ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಸ್. ಶಿವಪ್ರಸಾದ್, ಜಿ.ಬಿ. ಜ್ಯೋತಿಗಣೇಶ್, ನಗರಾಧ್ಯಕ್ಷ ಕೆ.ಪಿ. ಮಹೇಶ್, ಜಿಲ್ಲಾ ಉಪಾಧ್ಯಕ್ಷ ಕೃಷ್ಣಪ್ಪ ಮತ್ತಿತರರು ವಹಿಸಿದ್ದು, ಟೂಡಾ ಮಾಜಿ ಅಧ್ಯಕ್ಷ ಎಸ್.ಆರ್. ಶ್ರೀಧರಮೂರ್ತಿ, ವಾಲೆಚಂದ್ರು, ಪಂಚಾಕ್ಷರಯ್ಯ, ಮಹಿಳಾ ಮೋರ್ಚಾದ ಪ್ರೇಮಾಹೆಗಡೆ, ಶಿವಲಿಂಗಮ್ಮ, ಗೀತಾ, ಗಿರಿಜಮ್ಮ, ಟಿ.ಆರ್. ಅನುಸೂಯ, ಕೋಮಲ, ನಾಗರತ್ನಮ್ಮ, ಲಕ್ಷ್ಮೀಶ್, ಕೊಪ್ಪಲ್ ನಾಗರಾಜ್, ವಿಶ್ವನಾಥ್, ಅಣೆತೋಟ ಶ್ರೀನಿವಾಸ್ ಹಾಗೂ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

