ಸುಳ್ಳು ಪ್ರಕರಣ ಖಂಡಿಸಿ ಮೌನ ಮೆರವಣಿಗೆ
ಕುಣಿಗಲ್: ತಾಪಂ ಇಒ ವಿರುದ್ಧ ಜಾತಿ ನಿಂದನೆ ಸುಳ್ಳು ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ರಾಜ್ಯ ಸರ್ಕಾರಿ ನೌಕರರ ಸಂಘ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಅಧಿಕಾರಿ ಹಾಗೂ ನೌಕರರ ಸಂಘದ ಪದಾಧಿಕಾರಿಗಳು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಸೋಮವಾರ ಮೌನ ಮೆರವಣಿಗೆ ನಡೆಸಿದರು.
ತಾಪಂ ಸಭಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಕುಣಿಗಲ್ ಘಟಕದ ಅಧ್ಯಕ್ಷ ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಅಂಬೇಡ್ಕರ್ ಸೇರಿದಂತೆ ಹಿರಿಯ ಮಹಾನ್ ವ್ಯಕ್ತಿಗಳು ಎಂದೂ ಕೇವಲ ಒಂದು ಜಾತಿ ಅಥವಾ ವರ್ಗದ ಸ್ವತ್ತಲ್ಲ ಅವರು ಇಡೀ ಸಮಾಜವೇ ಗೌರವಿಸುವಂತಿದ್ದರು. ಇಂಥ ಮಹನೀಯರ ಹೆಸರುಗಳನ್ನು ಬಳಸಿಕೊಂಡು ವೈಯುಕ್ತಿಕ ಸ್ವಾರ್ಥಕ್ಕೆ ಕೆಲವು ವ್ಯಕ್ತಿಗಳಿಂದ ನಿರಂತರ ಶೋಷಣೆ ನಡೆಯುತ್ತಿದೆ. ಇದರಿಂದಾಗಿ ರಾಜ್ಯಾದ್ಯಂತ 20ಕ್ಕೂ ಹೆಚ್ಚು ಪಿಡಿಒಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದಾ ಒತ್ತಡದಲ್ಲೆ ಕಾರ್ಯ ನಿರ್ವಹಿಸುತ್ತಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂವಾಯತ್‌ರಾಜ್ ಇಲಾಖೆ ನೌಕರರ ಮೇಲೆ ನಿರಂತರ ಶೋಷಣೆ ನಡೆಯುತ್ತಿದೆ. ಸರ್ಕಾರಿ ನೌಕರರ ಸಂಘಟನೆಗಳು ವೇತನ ಸವಲತ್ತುಗಳಿಗಾಗಿ ಹೋರಾಟ ಮಾಡುವುದರ ಜೊತೆಯಲ್ಲಿ ರಕ್ಷಣೆ, ನೆಮ್ಮದಿಯ ವಾತಾವರಣಕ್ಕಾಗಿ ಹೋರಾಟ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಅಧಿಕಾರಿ ಮತ್ತು ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಸುರೇಶ್ ಮಾತನಾಡಿ, ಜವಾಬ್ದಾರಿಯುತ ಅಧಿಕಾರಿಗಳಿಂದ ಕೇವಲ ಹಣ ಪೀಕುವ ಉದ್ದೇಶಕ್ಕಾಗಿ, ಕೆಲವು ಮುಖಂಡರು ವರ್ಗ ಅಥವಾ ಜಾತಿ ಹೆಸರಿನಲ್ಲಿ ಸರ್ಕಾರಿ ನೌಕರರ ಶೋಷಣೆ ನಡೆಸುವುದು ನಿಜಕ್ಕೂ ನಾಗರಿಕ ಸಮಾಜ ತಲೆತಗ್ಗಿಸುವ ಕೃತ್ಯವಾಗಿದೆ ಎಂದರು.
ಪ್ರವಾಸಿ ಮಂದಿರದಿಂದ ಮೌನ ಮೆರವಣಿಗೆಯಲ್ಲಿ ಆಗಮಿಸಿ ತಹಸೀಲ್ದಾರ್ ಶಂಭುಲಿಂಗಯ್ಯ ಮತ್ತು ಡಿವೈಎಸ್ಪಿ ಕೆ.ಆರ್. ಗಣೇಶ್ ಅವರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಅಧಿಕಾರಿ ಮತ್ತು ನೌಕರರ ಸಂಘದ ತಾಲೂಕು ಗೌರವಾಧ್ಯಕ್ಷ ಕೃಷ್ಣೆಗೌಡ, ಪದಾಧಿಕಾರಿಗಳಾದ ಶ್ರೀನಿವಾಸ್, ಸಂಜೀವಯ್ಯ, ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಕಾರ್ಯದರ್ಶಿ ಬಿ.ಆರ್. ಗಂಗಾಧರ್, 36 ಗ್ರಾಪಂಗಳ ಪಿಡಿಒ, ಕಾರ್ಯದರ್ಶಿಗಳು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

