ತುಮಕೂರು

ರೈತರಿಗೆ ಉತ್ತಮ ಬಿತ್ತನೆ ಬೀಜ ಕೊಡಿ

Published On :

ಕನ್ನಡಪ್ರಭ ವಾರ್ತೆ, ತುಮಕೂರು, ಜೂ.5
ಜಿಲ್ಲೆಯ ರೈತರಿಗೆ ಉತ್ತಮ ಗುಣಮಟ್ಟದ, ಪ್ರಮಾಣಿತ ಬಿತ್ತನೆ ಬೀಜಗಳು ಸರಬರಾಜಾಗುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮತ್ತು ಕಳಪೆ ಗುಣಮಟ್ಟ ಕಂಡು ಬಂದಲ್ಲಿ ಶಿಸ್ತು ಕ್ರಮ ಕೈಗೊಳ್ಳುವಂತೆ ಜಂಟಿ ಕೃಷಿ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಕೆ.ಎಸ್. ಸತ್ಯಮೂರ್ತಿ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ  2014 ರ ಮುಂಗಾರು ಹಂಗಾಮಿನ ಪರಿಕರಗಳ (ರಸಗೊಬ್ಬರ ಮತ್ತು ಬಿತ್ತನೆ ಬೀಜ) ಪೂರ್ವ ಸಿದ್ಧತೆ ಕುರಿತಂತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ಕೆ.ಓ.ಎಫ್ ಹಾಗೂ ಕೆ.ಎಸ್.ಎಸ್.ಸಿ. ಸಂಸ್ಥೆಯವರು ರೈತರಿಗೆ ಮುಖ್ಯವಾಗಿ ಗುಣಮಟ್ಟದ ಬಿತ್ತನೆ ಬೀಜಗಳನ್ನು ಸರಬರಾಜು ಮಾಡುವಂತೆ ಸೂಚಿಸಿದರು.
ಜಿಲ್ಲೆಯಲ್ಲಿ ಬೇಡಿಕೆಗನುಗುಣವಾಗಿ ರೈತ ಸಂಪರ್ಕ ಕೇಂದ್ರಗಳಲ್ಲಿ ಹಾಗೂ ರಸಗೊಬ್ಬರ ಮಳಿಗೆಗಳಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ದಾಸ್ತಾನಿದ್ದು, ಎಲ್ಲಾ ರಸಗೊಬ್ಬರ ಮಾರಾಟಗಾರರು ಎಂ.ಆರ್.ಪಿ. ದರದಲ್ಲಿಯೇ ಮಾರಾಟ ಮಾಡುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.
ಎಚ್ಚರ ಅಗತ್ಯ: ಕೃಷಿ ಇಲಾಖೆಯ ಅಧಿಕಾರಿಗಳು ಗುಣಮಟ್ಟದ ಬಗ್ಗೆ ಹೆಚ್ಚು ಖಾತ್ರಿ ಪಡಿಸಿಕೊಳ್ಳಲು ಹಾಗೂ ಮಾರಾಟದ ವ್ಯವಸ್ಥೆಯ ಬಗ್ಗೆ ಗಮನ ನೀಡುವಂತೆ ಸೂಚಿಸಿದ ಅವರು, ಜಿಲ್ಲೆಗೆ ಬರುವ ರಸಗೊಬ್ಬರಗಳನ್ನು ಬೇರೆ ಜಿಲ್ಲೆಗೆ ವರ್ಗಾಯಿಸದಂತೆ ಕಟ್ಟುನಿಟ್ಟಿನ ಎಚ್ಚರ ವಹಿಸುವಂತೆ ತಿಳಿಸಿದರು.
ಮುಂದೂಡಬೇಡಿ: ಪ್ರಾಯೋಗಿಕ ಮಾರ್ಪಡಿಸಿದ ರಾಷ್ಟ್ರೀಯ ಕೃಷಿ ವಿಮಾ ಯೋಜನೆ ಕುರಿತಂತೆ ಮಾತನಾಡಿದ ಜಿಲ್ಲಾಧಿಕಾರಿಗಳು, ಪ್ರಾಯೋಗಿಕ ಮಾರ್ಪಡಿಸಿದ ರಾಷ್ಟ್ರೀಯ ಕೃಷಿ ವಿಮಾ ಯೋಜನೆ ಹಾಗೂ ಹವಾಮಾನ ಆಧಾರಿತ ಬೆಳೆವಿಮಾ ಯೋಜನೆಗಳಲ್ಲಿ ಅಧಿಸೂಚಿತ ಬೆಳೆಗಳಿಗೆ ಬೆಳೆ ಸಾಲ ಪಡೆದ ರೈತರು ಹಾಗೂ ಬೆಳೆ ಸಾಲ ಪಡೆಯದ ರೈತರು ಭಾಗವಹಿಸಲು ಜೂ. 30 ಕೊನೆಯ ದಿನಾಂಕವಾಗಿದ್ದು, ಯಾವುದೇ ಕಾರಣಕ್ಕೂ ದಿನಾಂಕವನ್ನು ಮುಂದೂಡದಂತೆ ತಿಳಿಸಿದರು.
ಹೆಚ್ಚಿನ ಸಂಖ್ಯೆಯಲ್ಲಿ ರೈತರು ಕೊನೆಯ ದಿನಾಂಕದೊಳಗೆ ತಮ್ಮ ವ್ಯಾಪ್ತಿಯ ಬ್ಯಾಂಕ್‌ಗಳು ಹಾಗೂ ವ್ಯವಸಾಯ ಸಹಕಾರ ಸಂಘಗಳಿಗೆ ಭೇಟಿ ನೀಡಿ, ಬೆಳೆವಿಮಾ ಯೋಜನೆಯಲ್ಲಿ ಭಾಗವಹಿಸಲು ಹಾಗೂ ಯೋಜನೆಯ ಸದುಪಯೋಗ ಪಡೆಯುವ ನಿಟ್ಟಿನಲ್ಲಿ ವ್ಯಾಪಕ ಪ್ರಚಾರ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ  ಅಪರ ಜಿಲ್ಲಾಧಿಕಾರಿಗಳು, ಜಂಟಿ ಕೃಷಿ ನಿರ್ದೇಶಕರು, ಉಪವಿಭಾಗಾಧಿಕಾರಿಗಳು, ಮಾರ್ಗದರ್ಶಿ ಬ್ಯಾಂಕ್ ವ್ಯವಸ್ಥಾಪಕರು, ತಹಸೀಲ್ದಾರರು, ಸಹಾಯಕ ಕೃಷಿ ನಿರ್ದೇಶಕರು, ಕೇಂದ್ರ ರಾಜ್ಯ ಉಗ್ರಾಣ ನಿಗಮದ ವ್ಯವಸ್ಥಾಪಕರು, ಉಪನಿಬಂಧಕರು, ಎಚ್.ಡಿ.ಎಫ್.ಸಿ. ಎರ್ಗೋ ಇನ್ಸೂರೆನ್ಸ್ ಸಂಸ್ಥೆಯ ಪ್ರತಿನಿಧಿಗಳು ಹಾಗೂ ವಿವಿಧ ರಸಗೊಬ್ಬರ ಮತ್ತು ಬಿತ್ತನೆ ಬೀಜ ಸಂಸ್ಥೆಗಳ ಪ್ರತಿನಿಧಿಗಳು ರೈತ ಮುಖಂಡರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.