ತುಮಕೂರು

ಜೆಡಿಎಸ್ ರಾಜ್ಯಾಧ್ಯಕ್ಷರ ನಾಮಪತ್ರ ಸಲ್ಲಿಕೆ

Published On :

ತುಮಕೂರು: ಜೆಡಿಎಸ್ ರಾಜ್ಯಾಧ್ಯಕ್ಷ ಎ. ಕೃಷ್ಣಪ್ಪನವರ ಸ್ಪರ್ಧೆ ಹಿನ್ನೆಲೆಯಲ್ಲಿ ರಾಜ್ಯದ ಗಮನ ಸೆಳೆದಿರುವ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ರಾಜಕೀಯದ ರಂಗೇರಿದೆ. ಪಕ್ಷದ ರಾಷ್ಟ್ರಾಧ್ಯಕ್ಷರ ಸಮ್ಮುಖದಲ್ಲಿ, ರಾಜ್ಯಾಧ್ಯಕ್ಷರು ಬುಧವಾರ ನಾಮಪತ್ರ ಸಲ್ಲಿಸಿದ್ದು ವಿಶೇಷವಾಗಿತ್ತು.
 ಜೆಡಿಎಸ್ ರಾಷ್ಟ್ರಾಧ್ಯಕ್ಷ, ಮಾಜಿ ಪ್ರಧಾನಿ ಎಚ್‌ಡಿ. ದೇವೇಗೌಡರ ಸಮ್ಮುಖದಲ್ಲಿ ಮಧ್ಯಾಹ್ನ 12 ಗಂಟೆ 4 ನಿಮಿಷಕ್ಕೆ ತುಮಕೂರು ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಎ. ಕೃಷ್ಣಪ್ಪ ನಾಮಪತ್ರ ಸಲ್ಲಿಸಿದರು. ಈ ವೇಳೆ ತುಮಕೂರು ಜಿಲ್ಲೆಯ ಜೆಡಿಎಸ್ ಶಾಸಕರಾದ ಗುಬ್ಬಿಯ ಎಸ್. ಆರ್. ಶ್ರೀನಿವಾಸ್, ಕೊರಟಗೆರೆಯ ಸುಧಾಕರ್‌ಲಾಲ್, ಚಿಕ್ಕನಾಯಕನಹಳ್ಳಿಯ ಸಿ.ಬಿ. ಸುರೇಶ್‌ಬಾಬು, ತುರುವೇಕೆರೆಯ ಎಂ.ಟಿ. ಕೃಷ್ಣಪ್ಪ ಉಪಸ್ಥಿತರಿದ್ದರು.
ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ. ದೇವೇಗೌಡ ಬೆಂಗಳೂರಿನಿಂದ ನೇರವಾಗಿ ಜಿಲ್ಲಾಧಿಕಾರಿ ಕಚೇರಿಗೆ ಮಧ್ಯಾಹ್ನ 12 ಗಂಟೆಗೆ ಆಗಮಿಸಿ, ರಾಜ್ಯಾಧ್ಯಕ್ಷ ಎ. ಕೃಷ್ಣಪ್ಪ ಅವರೊಂದಿಗೆ ನಾಮಪತ್ರ ಸಲ್ಲಿಸಲು ತೆರಳಿದರು. ಸುಮಾರು 20 ನಿಮಿಷಗಳ ನಂತರ ಹೊರಬಂದರು.
ಇದಕ್ಕೂ ಮುನ್ನ ಬೆಳಗ್ಗೆ 10 ಗಂಟೆಯ ವೇಳೆ ತುಮಕೂರು ಸಮೀಪದ ಇತಿಹಾಸ ಪ್ರಸಿದ್ಧ ಗೂಳೂರು ಗಣೇಶನಿಗೆ ಎ. ಕೃಷ್ಣಪ್ಪ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೃಷ್ಣಪ್ಪನವರ ಮಗಳು ಹಾಗೂ ಬೆಂಗಳೂರು ಮಹಾನಗರಪಾಲಿಕೆಯ ಸದಸ್ಯೆ ಪೂರ್ಣಿಮಾ, ಜೆಡಿಎಸ್ ಮುಖಂಡರಾದ ವೀರಭದ್ರಯ್ಯ, ಡಿ.ಸಿ. ಗೌರಿಶಂಕರ್ ಸೇರಿದಂತೆ ಇತರರು ಪಾಲ್ಗೊಂಡಿದ್ದರು. ಮೆರವಣಿಗೆಯಲ್ಲಿ ಸಾವಿರಾರು ಕಾರ್ಯಕರ್ತರೊಂದಿಗೆ ಆಗಮಿಸಿದ ಕೃಷ್ಣಪ್ಪ ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಪಕ್ಷದ ಜಿಲ್ಲಾ ಶಾಸಕರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದರು.
ಚುನಾವಣಾಧಿಕಾರಿಗಳ ಕಚೇರಿಯೂ ಆಗಿರುವ ಜಿಲ್ಲಾಧಿಕಾರಿ ಕಚೇರಿಯ ಹೊರಗೆ ಪಕ್ಷದ ಮುಖಂಡರಾದ ಅಬ್ದುಲ್ ಅಜೀಜ್, ಪಕ್ಷದ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಶೀಲಾ ನಾಯಕ್, ಮಾಜಿ ಸಚಿವ ಸತ್ಯನಾರಾಯಣ, ಕೆ.ಬಿ. ಬೋರೇಗೌಡ, ಡಿ.ಸಿ. ಗೌರಿಶಂಕರ್, ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಗೂಳಿಹಟ್ಟಿ ಶೇಖರ್, ಜಿಲ್ಲಾ ಯುವಜನತಾದಳ ಅಧ್ಯಕ್ಷ ಬೆಳ್ಳಿ ಲೋಕೇಶ್, ಜೆಡಿಎಸ್ ನಗರಪಾಲಿಕೆ ಸದಸ್ಯರು, ಯುವ ಮುಖಂಡರು ಸಾವಿರಾರು ಕಾರ್ಯಕರ್ತರು ಉಪಸ್ಥಿತರಿದ್ದರು. ಜೆಡಿಎಸ್ ಜಿಲ್ಲಾಧ್ಯಕ್ಷ ಡಾ. ಹುಲಿನಾಯ್ಕರ್ ಈ ವೇಳೆ ಉಪಸ್ಥಿತರಿರಲಿಲ್ಲ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.