ಮತ್ತೊಮ್ಮೆ ಕಾಂಗ್ರೆಸ್ ಬೆಂಬಲಿಸಲು ಕೆಂಚಮಾರಯ್ಯ ಮನವಿ
ತುಮಕೂರು: ಕೇಂದ್ರದಲ್ಲಿ ಹತ್ತು ವರ್ಷಗಳ ಕಾಲ ಅಧಿಕಾರ ನಡೆಸಿದ ಕಾಂಗ್ರೆಸ್ ಹಲವಾರು ಕ್ರಾಂತಿಕಾರಿ ಕಾಯ್ದೆಗಳನ್ನು ಜಾರಿಗೆ ತರುವ ಮೂಲಕ ಶೋಷಿತ ವರ್ಗಗಳಿಗೆ ವಿದ್ಯೆ, ಉದ್ಯೋಗ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಸಮಾನ ಅವಕಾಶ ದೊರೆಯುವಂತೆ ಮಾಡಿದೆ. ಅದಕ್ಕಾಗಿ ನಾವು ಈ ಬಾರಿಯೂ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕಾಗಿದೆ ಎಂದು ಜಿಪಂ ಸದಸ್ಯ ಕೆಂಚಮಾರಯ್ಯ ತಿಳಿಸಿದರು.
ನಗರದ ಶೆಟ್ಟಿಹಳ್ಳಿ ಮುಖ್ಯರಸ್ತೆಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದ ಪರಿಶಿಷ್ಟ ಜಾತಿ ವಿಭಾಗದ ಕಾರ್ಯಕರ್ತರ ಸಭೆ ಘಟಕದ ಅಧ್ಯಕ್ಷ ಹಾಗೂ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆರ್. ರಾಮಕೃಷ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು.
ಏ.17 ರಂದು ನಡೆಯುವ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಎಸ್.ಪಿ. ಮುದ್ದಹನುಮೇಗೌಡ ಗೆಲುವಿಗೆ ಶ್ರಮಿಸುವಂತೆ ಕರೆ ನೀಡಿದರು. ಜಿಪಂ ಮಾಜಿ ಸದಸ್ಯ ಅಂತೂರಯ್ಯ ಮಾತನಾಡಿ, ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಿ ಕೆಲಸ ಮಾಡುತ್ತಿದ್ದು, ಅಂತರಿಕ ಪ್ರಜಾಪ್ರಭುತ್ವದ ಹಾದಿಯಲ್ಲಿ ಎಲ್ಲ ವರ್ಗಗಳು ಪಕ್ಷದ ಹುದ್ದೆಗಳಲ್ಲಿ ಸಮಾನ ಅವಕಾಶ ಪಡೆಯಲು ಸಾಧ್ಯವಾಗಿದೆ. ಬೇರೆ ಪಕ್ಷಗಳಲ್ಲಿ ಈ ರೀತಿಯ ಅವಕಾಶಗಳಿಲ್ಲ. ಆದ್ದರಿಂದ ನಾವೆಲ್ಲರೂ ಪ್ರಾಮಾಣಿಕವಾಗಿ ಪಕ್ಷದ ಅಭ್ಯರ್ಥಿ ಎಸ್.ಪಿ. ಮುದ್ದಹನುಮೇಗೌಡರಿಗೆ ಹೆಚ್ಚು ಮತ ಕೊಡಿಸುವ ಮೂಲಕ ಮತ್ತೊಮ್ಮೆ ಕೇಂದ್ರದಲ್ಲಿ ಯುಪಿಎ ಸರಕಾರ ಅಧಿಕಾರಕ್ಕೆ ಬರುವಂತೆ ಮಾಡಬೇಕಾಗಿದೆ ಎಂದರು.
ತುಮಕೂರು ನಗರ ಶಾಸಕ ಡಾ. ರಫೀಕ್ ಅಹಮದ್ ಮಾತನಾಡಿ, ಕಾಂಗ್ರೆಸ್ ಮೊದಲಿನಿಂದಲೂ ದಲಿತರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರ ಪರವಾಗಿ ಕೆಲಸ ಮಾಡುತ್ತಾ ಬಂದಿದೆ. ಈ ಚುನಾವಣೆಯಲ್ಲಿಯೂ ನಾವುಗಳು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕಾಗಿದೆ ಎಂದರು.
ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಜಿಲ್ಲಾಧ್ಯಕ್ಷ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಆರ್. ರಾಮಕೃಷ್ಣ ಮಾತನಾಡಿ, ಎಂಜಿನಿಯರಿಂಗ್ ಮತ್ತು ಮೆಡಿಕಲ್ ಸೀಟುಗಳು ಬಡವರು, ದಲಿತರಿಗೆ ಮರಿಚೀಕೆಯಾಗಿದ್ದ ದಿನಗಳಲ್ಲಿ ಸಿಇಟಿ ಎಂಬ ಹೊಸ ಪದ್ಧತಿ ಮೂಲಕ ಬಡವರ ಮಕ್ಕಳು ವೃತ್ತಿಪರ ಕೋರ್ಸುಗಳನ್ನು ಕಲಿತು ಡಾಕ್ಟರ್, ಎಂಜಿನಿಯರ್ ಆಗುವಂತೆ ಮಾಡಿದ್ದು ಕಾಂಗ್ರೆಸ್ ಪಕ್ಷ ಎಂದರು.
ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಒಂದು ರು. ಒಂದು ಕಿಲೋ ಅಕ್ಕಿ ವಿತರಿಸುವ ಮೂಲಕ ಬಡವರು ಊಟ ಮಾಡುವಂತಹ ಅವಕಾಶ ಕಲ್ಪಿಸಿದ್ದು, ಇಂತಹ ಜನರ ಧೋರಣೆಗಳಿರುವ ಕಾಂಗ್ರೆಸ್ ಪಕ್ಷವನ್ನು ದಲಿತರು ಎಂದಿಗೂ ಮರೆಯಬಾರದು ಎಂದರು.
ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ. ಮುದ್ದಹನುಮೇಗೌಡ ಮಾತನಾಡಿ, ಕಾಂಗ್ರೆಸ್ ಆದಿ ಕಾಲದಿಂದಲೂ ದಲಿತರು, ಹಿಂದುಳಿದ ವರ್ಗಗಳ ಪರ ನಿಲುವುಗಳನ್ನು ಹೊಂದಿದ್ದು ಹಲವಾರು ಯೋಜನೆ, ಕಾನೂನುಗಳನ್ನು ಜಾರಿಗೆ ತಂದು ನೆಮ್ಮದಿಯ ಜೀವನ ನಡೆಸುವಂತೆ ಮಾಡಿದೆ. ಈ ಬಾರಿಯ ಚುನಾವಣೆಯಲ್ಲಿ ನೀವು ನನ್ನನ್ನು ಬೆಂಬಲಿಸಿ ನಿಮ್ಮಗಳ ಪರವಾಗಿ ನಿರಂತರವಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿದರು.
ನನ್ನನ್ನು ಗೆಲ್ಲಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಅವರ ಕೈ ಬಲಪಡಿಸುವಂತೆ ಮನವಿ ಮಾಡಿದರು. ಜಿಲ್ಲೆಯ ಎಲ್ಲಾ ಬ್ಲಾಕ್ ಅಧ್ಯಕ್ಷರು ಮಾತನಾಡಿ, ಪಕ್ಷದ ಅಭ್ಯರ್ಥಿ ಮುದ್ದಹನುಮೇಗೌಡ ಗೆಲುವಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು.
ವೇದಿಕೆಯಲ್ಲಿ ನಗರಸಭೆಯ ಮಾಜಿ ಸದಸ್ಯ ನರಸೀಯಪ್ಪ, ಜಿಪಂ ಮಾಜಿ ಅಧ್ಯಕ್ಷ ಕೆ.ಬಿ. ಹನುಮಂತಯ್ಯ, ಎಸ್.ಆರ್. ಕೃಷ್ಣಮೂರ್ತಿ, ಕಲ್ಲೂರು ಭಾಗ್ಯಮ್ಮ, ಬಿ.ಜಿ. ಮುನಿರಾಜು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

