ಉಡುಪಿ

ರಾಷ್ಟ್ರ ರಾಜಕಾರಣ ಮೇಲೆ ಚುನಾವಣಾ ಫಲಿತಾಂಶ ಪರಿಣಾಮ: ಥಾಮಸ್

Published On :

ಉಡುಪಿ: ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣೆಯ ಫಲಿತಾಂಶ ದೇಶದ ರಾಜಕೀಯದ ಮೇಲೆ ಪರಿಣಾಮ ಬೀರಲಿದೆ. ಈ ಹಿನ್ನೆಲೆಯಲ್ಲಿ ಈ ಚುನಾವಣೆಗೆ ವಿಶೇಷ ಮಹತ್ವ ಇದೆ ಎಂದು ಕೇಂದ್ರ ಆಹಾರ ಸಂಸ್ಕರಣಾ ರಾಜ್ಯ ಸಚಿವ ಕೆ. ವಿ. ಥಾಮಸ್ ಅಭಿಪ್ರಾಯಪಟ್ಟಿದ್ದಾರೆ.
 ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಎಐಸಿಸಿ ವೀಕ್ಷಕರಾಗಿ ಆಗಮಿಸಿರುವ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
 ಕರ್ನಾಟಕ ದೊಡ್ಡ ರಾಜ್ಯವಾಗಿರುವುದರಿಂದ ಅಭ್ಯರ್ಥಿಗಳ ಆಯ್ಕೆ ನಡೆಯುವಾಗ ಕಾಂಗ್ರೆಸ್ ಪಕ್ಷದಲ್ಲಿ ಒಂದಷ್ಟು ಗೊಂದಲ ಇರುವುದು ದೊಡ್ಡ ವಿಷಯವೇನಲ್ಲ. ಕಾಂಗ್ರೆಸ್ ದೊಡ್ಡ ರಾಷ್ಟ್ರೀಯ ಪಕ್ಷವಾಗಿರುವುದರಿಂದ ಪಕ್ಷದ ನಾಯಕರ ನಡುವೆ ಭಿನ್ನಾಭಿಪ್ರಾಯ ಇರುವುದು ಕೂಡ ಅಸಹಜವೇನಲ್ಲ. ಕಾಂಗ್ರೆಸ್ ಪಕ್ಷಕ್ಕೆ ಬಂಡಾಯ ಅಭ್ಯರ್ಥಿಗಳಿಂದ ತೊಂದರೆಯಾಗುವುದಿಲ್ಲ, ಈ ಹಿಂದಿನ ಎಲ್ಲ ಚುನಾವಣೆಗಳಲ್ಲಿಯೂ ಬಂಡಾಯ ಇತ್ತು. ಅದನ್ನೆಲ್ಲಾ ಸರಿಪಡಿಸಲಾಗಿದೆ ಎಂದವರು ಹೇಳಿದರು.
 ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ. ಆದರೆ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವುದು ಈಗಲೇ ಹೇಳುವುದಿಲ್ಲ. ಕಾಂಗ್ರೆಸ್‌ನಲ್ಲಿ ಅಂತಹ ಪದ್ಧತಿ ಇಲ್ಲ ಎಂದವರು ಹೇಳಿದರು.
 ಕೇಂದ್ರ ಸರ್ಕಾರದ ಮಂತ್ರಿಗಳ ಹಗರಣ ಈ ಚುನಾವಣೆಯ ಮೇಲೆ ದುಷ್ಪರಿಣಾಮ ಬೀರುವುದಿಲ್ಲ. ಅಂತಹ ಆರೋಪಗಳು ಬಂದಾಗಲೆಲ್ಲಾ ಅಂತಹ ಮಂತ್ರಿಗಳನ್ನು ನಿರ್ದಾಕ್ಷಿಣ್ಯವಾಗಿ ಕೈಬಿಟ್ಟ ಏಕೈಕ ಪಕ್ಷ ಕಾಂಗ್ರೆಸ್. ಇದು ಕಾಂಗ್ರೆಸ್ ಪರ ಮತಗಳಿಕೆಗೆ ಸಹಾಯ ಮಾಡಲಿದೆ ಎಂದವರು ಆಶಿಸಿದರು.
 ಈ ಸುದ್ದಿಗೋಷ್ಠಿಯಲ್ಲಿ ಉಡುಪಿ- ಚಿಕ್ಕಮಗಳೂರು ಸಂಸದ ಜಯಪ್ರಕಾಶ ಹೆಗ್ಡೆ, ಡಿಸಿಸಿ ಕಾರ್ಯದರ್ಶಿಗಳಾದ ನರಸಿಂಹಮೂರ್ತಿ ಮತ್ತು ಜನಾರ್ದನ ತೊನ್ಸೆ, ಕಾಂಗ್ರೆಸ್ ಸೇವಾದಳದ ಸಂಯೋಜಕ ಅಶೋಕ್ ಕುಮಾರ್ ಕೊಡವೂರು ಮುಂತಾದವರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.