ಪ್ರತಿಯೊಂದು ಜಿಲ್ಲೆಯಲ್ಲಿ ಕನ್ನಡ ಮಾಧ್ಯಮ ಸ್ನಾತಕೋತ್ತರ ಕೇಂದ್ರ: ನೀಲಾವರ ಒತ್ತಾಯ
ಪರ್ಕಳ: ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿ ಒಂದಾದರೂ ಕನ್ನಡ ಮಾಧ್ಯಮದಲ್ಲಿ ಸ್ನಾತಕೋತ್ತರ ಅಧ್ಯಯನ ಕೇಂದ್ರ ಆರಂಭಿಸಬೇಕು. ಅದಕ್ಕೆ ಮೊದಲು ರಾಜ್ಯ ಮಟ್ಟದಲ್ಲಿ ಪ್ರಾಯೋಗಿಕ ಕೇಂದ್ರವನ್ನು ತೆರೆಯಬೇಕು ಎಂದು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಇಲ್ಲಿನ ವಿಘ್ನೇಶ್ವರ ಸಭಾಭವನದಲ್ಲಿ ಶನಿವಾರ ಮಂಗಳ ಕಲಾ ಸಾಹಿತ್ಯ ವೇದಿಕೆಯ ದಶಮಾನೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಕನ್ನಡಕ್ಕೆ ಗಂಡಾಂತರದ ಸ್ಥಿತಿ ಬಂದಿದೆ ಎಂದು ತೀವ್ರ ವಿಷಾದ ವ್ಯಕ್ತಪಡಿಸಿದ ಸುರೇಂದ್ರ ಅಡಿಗ, ಇದಕ್ಕೆ ಹೆತ್ತವರ ಆಂಗ್ಲ ಭಾಷಾ ವ್ಯಾಮೋಹವೇ ಕಾರಣ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಆಂಗ್ಲ ಭಾಷೆಯ ಕಲಿಕೆ, ಅರಿವು ಅನಿವಾರ್ಯ ಹೌದು, ಆದರೆ ಅದೇ ಕಾರಣಕ್ಕೆ ಕನ್ನಡಿಗರೇ ಕನ್ನಡವನ್ನು ಕಡೆಗಣಿಸುವುದು ಅಕ್ಷಮ್ಯ ಎಂದು ಅಭಿಪ್ರಾಯಪಟ್ಟರು.
ಮಕ್ಕಳನ್ನು ಕನ್ನಡ ಶಾಲೆಗೆ ಕಳುಹಿಸಿ: ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಕನ್ನಡ ಮಾಧ್ಯಮದ ಶಾಲೆಗಳು ಮುಚ್ಚಿ ಹೋಗಬಹುದು. ಹೀಗಾಗದಂತೆ ಮಾಡಬೇಕಾದರೆ ಹೆತ್ತವರು ತಮ್ಮ ಮಕ್ಕಳನ್ನು ಕನ್ನಡ ಮಾಧ್ಯಮ ಶಾಲೆಗಳಿಗೆ ಕಳುಹಿಸಬೇಕು ಮತ್ತು ಮಕ್ಕಳಿಗೆ ಕನ್ನಡ ಭಾಷೆಯ ಪ್ರಾಮುಖ್ಯತೆಯನ್ನು ತಿಳಿ ಹೇಳಬೇಕು ಎಂದು ನೀಲಾವರ ಸುರೇಂದ್ರ ಅಡಿಗ ಆಶಿಸಿದರು.
ಎರಡು ದಿನಗಳ ಕಾಲ ನಡೆಯುವ ಈ ದಶಮಾನೋತ್ಸವ ಆಚರಣೆಯ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ರಾಜ್ಯ ಯಕ್ಷಗಾನ ಬಯಲಾಟ ಅಕಾಡೆಮಿ ಅಧ್ಯಕ್ಷ ಪ್ರೊ.ಎಂ.ಎಲ್. ಸಾಮಗ ವಹಿಸಿದ್ದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಲಾವಿದರನ್ನು ಅವರು ಗೌರವಿಸಿದರು. ಮುಖ್ಯ ಅತಿಥಿಗಳಾಗಿ ಉಡುಪಿ ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಲಿ ಕಡೆಕಾರ್, ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ಕುದಿ ವಸಂತ ಶೆಟ್ಟಿ ಭಾಗವಹಿಸಿದ್ದರು. ವೇದಿಕೆಯ ಸಂಚಾಲಕ ಮಂಜುನಾಥ ಉಪಾಧ್ಯ ಇದ್ದರು.
ವೇದಿಕೆ ಅಧ್ಯಕ್ಷ ಆತ್ರಾಡಿ ಪೃಥ್ವಿರಾಜ್ ಹೆಗ್ಡೆ ಸ್ವಾಗತಿಸಿದರು, ಗೌರವ ಸಲಹೆಗಾರ ಆನಂತರಾಮ ಭಟ್ ಕಾರ್ಯಕ್ರಮ ಸಂಯೋಜಿಸಿದರು. ಕಾರ್ಯಕ್ರಮಕ್ಕೆ ಮೊದಲು ಪರ್ಕಳ ಯು.ಬಿ.ಎಂ. ಶಾಲೆಯ ವಠಾರದಿಂದ ಸಭಾಭವನದವರೆಗೆ ದಶಮಾನೋತ್ಸವ ಶೋಭಾಯಾತ್ರೆ ಆಯೋಜಿಸಲಾಗಿತ್ತು. ಸಭಾ ಕಾರ್ಯಕ್ರಮದ ನಂತರ ಜಾನಪದ ನೃತ್ಯ, 'ಹುತಾತ್ಮ ಭಗತ್ ಸಿಂಗ್' ನಾಟಕ ಪ್ರದರ್ಶನ ನಡೆಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

