ಪಕ್ಷ ವಿರೋಧಿಗಳಿಗೆ ಕಾಂಗ್ರೆಸ್ನಿಂದ ಸನ್ಮಾನ!
ಕಾರವಾರ: ಕಾಂಗ್ರೆಸ್ನ ಹಿಂದುಳಿದ ವರ್ಗಗಳ ವಿಭಾಗದಿಂದ ಮಂಗಳವಾರ ಅಂಕೋಲಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಸ್ಪರ್ಧಿಸಿ ಗೆಲವು ಸಾಧಿಸಿದ ಸತೀಶ ಸೈಲ್ ಹಾಗೂ ಮಂಕಾಳ ವೈದ್ಯ ಅವರನ್ನು ಸನ್ಮಾನಿಸಿದ್ದು ಅಚ್ಚರಿಯ ಜತೆಗೆ ಪಕ್ಷದಲ್ಲಿ ತೀವ್ರ ಅಸಮಾಧಾನಕ್ಕೂ ಕಾರಣವಾಗಿದೆ.
ಅದರಲ್ಲೂ ಜಿಲ್ಲಾ ಉಸ್ತುವಾರಿ ಸಚಿವ, ಉನ್ನತ ಶಿಕ್ಷಣ ಹಾಗೂ ಪ್ರವಾಸೋದ್ಯಮ ಸಚಿವ ಆರ್.ವಿ. ದೇಶಪಾಂಡೆ ಅವರ ಉಪಸ್ಥಿತಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪಕ್ಷದ ನಿಷ್ಠಾವಂತ ಸ್ಥಳೀಯ ನಾಯಕರನ್ನು ಕಡೆಗಣಿಸಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರಿಗೆ ಮಣೆ ಹಾಕಿದ್ದರಿಂದ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಬೇಗುದಿಗೊಂಡಿದ್ದಾರೆ.
ಕಾರವಾರ ವಿಧಾನಸಭೆ ಕ್ಷೇತ್ರದಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿದ್ದ ರಮಾನಂದ ನಾಯಕ ಅವರ ವಿರುದ್ಧ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆದ್ದು ಬಂದ ಸತೀಶ ಸೈಲ್ ಹಾಗೂ ಭಟ್ಕಳ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಮಾಜಿ ಶಾಸಕ ಜೆ.ಡಿ. ನಾಯ್ಕ ಅವರಿಗೆ ದೊರೆಯುತ್ತಿದ್ದಂತೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದ ಮಂಕಾಳ ವೈದ್ಯ ಅವರಿಗೆ ಸನ್ಮಾನ ಏರ್ಪಡಿಸಿದ್ದು ಪಕ್ಷದ ವಲಯದಲ್ಲಿ ಗೊಂದಲಕ್ಕೆ ಕಾರಣವಾಗಿದೆ.
ಯಾರದ್ದೋ ಖಾಸಗಿ ಕಾರ್ಯಕ್ರಮವಾಗಿದ್ದರೆ ಯಾರು ಬೇಕಾದರೂ ಕರೆದು ಸತ್ಕರಿಸಲಿ ಬೇಸರವಿಲ್ಲ. ಆದರೆ, ಉ.ಕ. ಜಿಲ್ಲಾ ಕಾಂಗ್ರೆಸ್ನ ಹಿಂದುಳಿದ ವರ್ಗಗಳ ವಿಭಾಗದಿಂದ ಅಂಕೋಲಾದ ಸತ್ಯಾಗ್ರಹ ಸ್ಮಾರಕ ಭವನದಲ್ಲಿ ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ದೇವರಾಜ ಅರಸ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಸೆಣಸಿ, ಪಕ್ಷಕ್ಕೆ ಮುಜುಗರ ಹಾಗೂ ಹಾನಿಯುಂಟುಮಾಡಿದ ಇವರಿಬ್ಬರನ್ನೂ ಆಹ್ವಾನಿಸಿ, ಸನ್ಮಾನಿಸುವ ಅಗತ್ಯತೆ ಇತ್ತೆ ಎಂದು ಕಾರ್ಯಕರ್ತರು ಪ್ರಶ್ನಿಸುತ್ತಿದ್ದಾರೆ.
ಸನ್ಮಾನದ ನಂತರ ಪತ್ರಕರ್ತರು ದೇಶಪಾಂಡೆ ಅವರಲ್ಲಿ ಸತೀಶ ಸೈಲ್ ಹಾಗೂ ಮಂಕಾಳ ವೈದ್ಯ ಅಧಿಕೃತವಾಗಿ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದಾರೆಯೇ ಎಂದು ಪ್ರಶ್ನಿಸಿದಾಗ, ಇವರಿಬ್ಬರೂ ಕಾಂಗ್ರೆಸ್ನವರೇ ಆಗಿದ್ದಾರೆ. ಪಕ್ಷ ಬಿಟ್ಟು ಎಲ್ಲಿಯೂ ಓಡಿ ಹೋಗಿಲ್ಲ ಎಂದು ಹಾರಿಕೆ ಉತ್ತರ ನೀಡಿದರು. ನಂತರ ಜೆ.ಡಿ. ನಾಯ್ಕ ಹಾಗೂ ರಮಾನಂದ ನಾಯಕ ಅಗತ್ಯ ಕೆಲಸದ ನಿಮಿತ್ತ ಬೇರೆಡೆ ಹೋಗಿರುವುದರಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿಲ್ಲ ಎಂದು ಸಮಜಾಯಿಷಿ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

