ಉಡುಪಿ

ರಾಮರಾಜ್ಯ ನಿರ್ಮಾಣಕ್ಕೆ ಪಿಡಿಒ ಸಹಕಾರ ಬೇಕು: ಸಚಿವ ಸೊರಕೆ

Published On :

ಉಡುಪಿ: ಮಹಾತ್ಮಾ ಗಾಂಧೀಜಿ ಅವರ ಆಶಯದ ಗ್ರಾಮ ಸ್ವರಾಜ್ಯ ಮತ್ತು ರಾಮ ರಾಜ್ಯ ನಿರ್ಮಾಣ ಮಾಡಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಹಕಾರ ಅತ್ಯಗತ್ಯ ಎಂದು ರಾಜ್ಯ ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಮಾರ್ ಸೊರಕೆ ತಿಳಿಸಿದ್ದಾರೆ.
ಅವರು ಇಲ್ಲಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಭಾಂಗಣದಲ್ಲಿ ಜಿಲ್ಲೆಗೆ ಹೊಸದಾಗಿ ನೇಮಕಗೊಂಡಿರುವ 26 ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ನಡೆದ ವೃತ್ತಿ ಬುನಾದಿ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ರಾಜ್ಯದಲ್ಲಿ ಶೇ. 38ರಿಂದ ಶೇ. 40ರಷ್ಟು ಜನತೆ ಗ್ರಾಮಗಳಲ್ಲಿನ ಸೌಲಭ್ಯಗಳ ಕೊರತೆಯಿಂದ ನಗರ ಪ್ರದೇಶಗಳಲ್ಲಿ ವಾಸ ಮಾಡುತ್ತಿದ್ದು, ಇದರಿಂದ ನಗರದಟ್ಟನೆ ಅಧಿಕವಾಗುತ್ತಿದೆ. ಗ್ರಾಮಗಳಲ್ಲಿ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಲು ಹಾಗೂ ಸರ್ವತೋಮುಖ ಬೆಳವಣಿಗೆಗೆ ಪಿಡಿಒಗಳು ಸಹಕರಿಸಬೇಕು. ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಿ, ಗ್ರಾಮೀಣ ಜನತೆ ಮತ್ತು ಸರ್ಕಾರದ ನಡುವೆ ಪಿಡಿಒಗಳು ಕೊಂಡಿಯಂತೆ ಕೆಲಸ ಮಾಡಬೇಕು ಎಂದು ತಿಳಿಸಿದರು.
ಮುಖ್ಯ ಅತಿಥಿಯಾಗಿದ್ದ ಶಾಸಕ ಪ್ರಮೋದ್ ಮಧ್ವರಾಜ್ ಮಾತನಾಡಿ, ಪಿಡಿಒಗಳು ಅತ್ಯಂತ ಒತ್ತಡದಿಂದ  ಕಾರ್ಯನಿರ್ವಹಿಸುತ್ತಿದ್ದು, ಕಾರ್ಯ ನಿರ್ವಹಣೆಯಲ್ಲಿ ಕಾನೂನು ಉಲ್ಲಂಘನೆಯಾಗದಂತೆ ತಾಳ್ಮೆಯಿಂದ, ಗ್ರಾಮಸ್ಥರಿಗೆ ಅನುಕೂಲವಾಗುವಂತೆ ತೀರ್ಮಾನಗಳನ್ನು ತೆಗೆದುಕೊಳ್ಳುವಂತೆ ಹಾಗೂ ಕಾನೂನಿನ ಅನುಷ್ಠಾನದಲ್ಲಿ ಲೋಪಗಳಿದ್ದರೆ, ಅದನ್ನು ತಿದ್ದುಪಡಿ ಮಾಡಲು ಸಲಹೆ ನೀಡುವಂತೆ ತಿಳಿಸಿದರು.
ಜಿ.ಪಂ. ಅಧ್ಯಕ್ಷ ಉಪೇಂದ್ರ ನಾಯಕ್, ಪ್ರಾಮಾಣಿಕತೆಯಿಂದ, ಸಮಾಜ ಮುಖಿ ಮನೋಭಾವದಿಂದ ಕರ್ತವ್ಯ
ನಿರ್ವಹಿಸುವಂತೆ ಪಿಡಿಒಗಳಿಗೆ ತಿಳಿಸಿದರು.
ತಾ.ಪಂ. ಅಧ್ಯಕ್ಷೆ ಗೌರಿ ಪೂಜಾರಿ, ಜಿ.ಪಂ. ಉಪಕಾರ್ಯದರ್ಶಿ ಪ್ರಾಣೇಶ್ ರಾವ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಮಂಜುನಾಥಯ್ಯ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತರಬೇತಿ ಕೇಂದ್ರದ ಪ್ರಾಂಶುಪಾಲ ನಾಗರಾಜ್ ಇದ್ದರು.
ತರಬೇತಿ ಕೇಂದ್ರದ ರಾಘವೇಂದ್ರ ಪ್ರಭು ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.