ಮೈಸೂರು ನಗರಾಡಳಿತ ತರಬೇತಿ ಸಂಸ್ಥೆಗೆ ಡಾ. ಆಚಾರ್ಯ ಹೆಸರು
ಮಣಿಪಾಲ: ದಿ. ಡಾ.ವಿ.ಎಸ್. ಆಚಾರ್ಯ ಅವರ ಪ್ರಥಮ ಪುಣ್ಯತಿಥಿ ಅಂಗವಾಗಿ ಗುರುವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ಮುಂಭಾಗದಲ್ಲಿ ಕಂಚಿನ ಪ್ರತಿಮೆ ಸ್ಥಾಪಿಸಲಾಯಿತು.
ಇದೇ ಸಂದರ್ಭ ಜಿಲ್ಲಾ ಪಂಚಾಯತಿ ಸಭಾಂಗಣಕ್ಕೆ ಡಾ.ವಿ.ಎಸ್. ಆಚಾರ್ಯರ ಹೆಸರನ್ನು ಇಡಲಾಯಿತು. ಉಡುಪಿ ನಗರಸಭೆಯಲ್ಲಿಯೂ ಕೂಡ ಡಾ. ಆಚಾರ್ಯರ ಪುತ್ಥಳಿ ಸ್ಥಾಪಿಸಲಾಯಿತು.
ಈ ಪುತ್ಥಳಿಗಳನ್ನು ಅನಾವರಣಗೊಳಿಸಿದ ಉಡುಪಿ ಉಸ್ತುವಾರಿ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಮೈಸೂರಿನಲ್ಲಿರುವ ನಗರಾಡಳಿತ ತರಬೇತಿ ಕೇಂದ್ರಕ್ಕೆ ಡಾ. ಆಚಾರ್ಯರ ಹೆಸರನ್ನು ಇಡಲು ಸರ್ಕಾರ ನಿರ್ಧರಿಸಿದೆ ಎಂದು ಪ್ರಕಟಿಸಿದರು.
ಈ ಸಂದರ್ಭ ಮಾತನಾಡಿದ ಉಡುಪಿ ಶಾಸಕ ಕೆ. ರಘುಪತಿ ಭಟ್, ಡಾ. ಆಚಾರ್ಯರ ಕನಸಿನಂತೆ ನಗರಸಭೆ ವತಿಯಿಂದ ಮಣಿಪಾಲದ ಸಿಂಡಿಕೇಟ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ರು. 4.50 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ನಿರ್ಮಿಸಲು ಯೋಜಿಸಲಾಗಿದ್ದು, ಅದಕ್ಕೂ ಡಾ.ವಿ.ಎಸ್. ಆಚಾರ್ಯರ ಹೆಸರಿಡಲಾಗುವುದು ಎಂದರು.
ಬಿಜೆಪಿಯ ಹಿರಿಯರಾದ ಗುಜ್ಜಾಡಿ ಪ್ರಭಾಕರ ನಾಯಕ್ ಅವರು ಡಾ. ಆಚಾರ್ಯ ಸಂಸ್ಮರಣಾ ಭಾಷಣ ಮಾಡಿ, ಡಾ. ಆಚಾರ್ಯರು ಕಂಡಿದ್ದ ಅಭಿವೃದ್ಧಿಯನ್ನು ಸಾಧಿಸುವ ಮೂಲಕವಷ್ಟೆ ಅವರಿಗೆ ನಿಜವಾದ ಶ್ರದ್ಧಾಂಜಲಿ ಸಲ್ಲಿಸುವುದು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಸಮಾರಂಭದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಉಪೇಂದ್ರ ನಾಯಕ್, ಉಪಾಧ್ಯಕ್ಷೆ ಮಮತಾ ಶೆಟ್ಟಿ, ತಾಲೂಕು ಪಂಚಾಯಿತಿ ಅಧ್ಯಕ್ಷೆ ಗೌರಿ ಪೂಜಾರಿ, ನಗರಸಭಾಧ್ಯಕ್ಷ ಕಿರಣ್ ಕುಮಾರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಜಿಲ್ಲಾಧಿಕಾರಿ ಡಾ.ಎಂ.ಟಿ. ರೇಜು ವೇದಿಕೆಯಲ್ಲಿದ್ದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್.ಎ. ಪ್ರಭಾಕರ ಶರ್ಮ ಸ್ವಾಗತಿಸಿದರು.
ಶಿಕ್ಷಣಾಧಿಕಾರಿ ಅಶೋಕ್ ಕಾಮತ್ ಕಾರ್ಯಕ್ರಮ ಸಂಯೋಜಿಸಿದರು. ಜಿಪಂ ಮು.ಯೋ. ಅಧಿಕಾರಿ ವಿಜಯಕುಮಾರ್ ಶೆಟ್ಟಿ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

