ಆಂಗ್ಲ ಭಾಷೆ ಭ್ರಮೆಯಿಂದ ಕನ್ನಡಕ್ಕೆ ಹೆಚ್ಚು ಅಪಾಯ
ಉಡುಪಿ: ಪ್ರಸ್ತುತ ಆಂಗ್ಲ ಭಾಷೆಯಿಂದ ಕನ್ನಡಕ್ಕಿರುವ ಅಪಾಯಕ್ಕಿಂತಲೂ ಇಂಗ್ಲಿಷ್ ಭಾಷೆ ಬಗ್ಗೆ ಇರುವ ಭ್ರಮೆಯೇ ಕನ್ನಡಕ್ಕೆ ಹೆಚ್ಚು ಅಪಾಯಕಾರಿಯಾಗಿದೆ. ಆದ್ದರಿಂದ ಕನ್ನಡ ಭಾಷೆಗೆ ಕುತ್ತುಬಾರದಂತೆ ನೋಡಿಕೊಳ್ಳಲು ಸರ್ಕಾರ 1ನೇ ತರಗತಿಯಿಂದಲೇ ಇಂಗ್ಲಿಷ್ ಭಾಷೆ ಕಲಿಸಲು ಮುಂದಾಗಿದೆ ಎಂದು ರಾಜ್ಯ ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ವಿನಯಕುಮಾರ್ ಸೊರಕೆ ಹೇಳಿದರು.
ಇಲ್ಲಿನ ಕುಂಜಿಬೆಟ್ಟು ಮಹಾತ್ಮಗಾಂಧಿ ಮೆಮೋರಿಯಲ್ ಕಾಲೇಜಿನ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಯಂಗವಾಗಿ ಧ್ವಜಾರೋಹಣಗೈದು ಮಾತನಾಡಿದರು.
ಜಿಲ್ಲೆಯಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲು ನಿರ್ಧರಿಸಲಾಗಿದ್ದು, ನಕ್ಸಲ್ ಪೀಡಿತ ಪ್ರದೇಶಗಳ ಶಾಲೆಗಳಲ್ಲಿರುವ ಶಿಕ್ಷಕರ ಕೊರತೆ ನೀಗಿಸಲು ವಿಶೇಷ ಯೋಜನೆಯಡಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿ ಈಗಾಗಲೇ ಒಟ್ಟು 1200 ಶಿಕ್ಷಕರ ನೇಮಕಾತಿಯ ಪ್ರಕ್ರಿಯೆ ನಡೆಯುತ್ತಿದೆ ಎಂದವರು ಹೇಳಿದರು.
ನಗರೋತ್ಥಾನ 2ನೇ ಹಂತದ ಯೋಜನೆಯಡಿ ಜಿಲ್ಲೆಯಲ್ಲಿ 45 ಕೋಟಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಜಿಲ್ಲೆಯ 7 ಪ್ರವಾಸಿ ತಾಣ ರಸ್ತೆಗಳ, 4 ಬೀಚುಗಳ, 8 ಪ್ರವಾಸಿ ಸ್ಥಳಗಳ ಅಭಿವೃದ್ಧಿಗಾಗಿ 23.90 ಕೋಟಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಮಣಿಪಾಲದ ಹಸ್ತಶಿಲ್ಪ ಕಲಾಗ್ರಾಮಕ್ಕೆ 1 ಕೋಟಿ ರು. ಅನುದಾನ ಬಿಡುಗಡೆಯಾಗಿದೆ ಎಂದವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಶಾಸಕ ಪ್ರಮೋದ್ ಮಧ್ವರಾಜ್, ಜಿಪಂ ಅಧ್ಯಕ್ಷ ಉಪೇಂದ್ರ ನಾಯಕ್, ತಾಪಂ ಅಧ್ಯಕ್ಷೆ ಗೌರಿ ಪೂಜಾರಿ, ಉಪಾಧ್ಯಕ್ಷ ರಾಮ ಕುಲಾಲ್, ಜಿಪಂ ಮುಖ್ಯ ಕಾರ್ಯನಿವರ್ಹಣಾಧಿಕಾರಿ ಎಸ್.ಎ. ಪ್ರಭಾಕರ ಶರ್ಮ, ಜಿಲ್ಲಾಧಿಕಾರಿ ಡಾ.ಎಂ.ಟಿ. ರೇಜು, ಅಪರ ಜಿಲ್ಲಾಧಿಕಾರಿ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬೋರಲಿಂಗಯ್ಯ, ಅಧಿಕಾರಿಗಳು ಇದ್ದರು.
ಸಚಿವರು ಪೊಲೀಸ್, ಎನ್.ಸಿ.ಸಿ. ಸ್ಕೌಟ್ಸ್ ಗೈಡ್ಸ್ ಮುಂತಾದ 12 ತಂಡಗಳಿಂದ ಗೌರವರಕ್ಷೆ ಸ್ವೀಕರಿಸಿ, ಆಕರ್ಷಕ ಕವಾಯತು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಕಲೆ, ಸಂಗೀತ, ಯಕ್ಷಗಾನ, ಶಿಕ್ಷಣ, ಕ್ರೀಡೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಅಭಿನಂದಿಸಲಾಯಿತು. ಕೊನೆಯಲ್ಲಿ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

