ಕೊಳಚೆ ನಿವಾಸಿಗಳ ಶೀಘ್ರ ಸ್ಥಳಾಂತರ: ಡಿಸಿ
ಉಡುಪಿ: ನಗರಸಭಾ ವ್ಯಾಪ್ತಿಯ ನಿಟ್ಟೂರು ಎಂಬಲ್ಲಿ ಅನಧಿಕೃತವಾಗಿ ಗುಡಿಸಲು ಕಟ್ಟಿಕೊಂಡು ಸಾರ್ವಜನಿಕರಿಗೆ ತೊಂದರೆಯನ್ನುಂಟು ಮಾಡುತ್ತಿದ್ದ ಕೊಳಚೆ ನಿವಾಸಿಗಳಿಗೆ ಸೂಕ್ತ ಜಾಗ ಗುರುತಿಸಿ ಅಲ್ಲಿಗೆ ಅವರನ್ನು ತಕ್ಷಣ ಸ್ಥಳಾಂತರಿಸುವುದಾಗಿ ಜಿಲ್ಲಾಧಿಕಾರಿ ಡಾ. ಮುದ್ದುಮೋಹನ್ ತಿಳಿಸಿದ್ದಾರೆ.
ಬುಧವಾರ ನಿಟ್ಟೂರಿನ ಕೊಳಚೆ ನಿವಾಸಿಗಳ ಪ್ರದೇಶಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಪ್ರಸ್ತುತ ಮುಂಗಾರು ಪ್ರಾರಂಭಗೊಂಡಿದ್ದು, ಇಲ್ಲಿ ಕೊಳಚೆ ಪ್ರದೇಶದಿಂದ ಇಡೀ ನಗರಕ್ಕೆ ಮಲೇರಿಯಾ ಹರಡುವ ಸಾಧ್ಯತೆಯಿದ್ದು, ಈ ಕುರಿತು ಪ್ರತಿವಾರ ಇಲ್ಲಿಗೆ ಭೇಟಿ ನೀಡಿ, ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚಿಸಿದರು. ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿಯೇ ಇರುವ ಪ್ರದೇಶದಲ್ಲಿ ಸುಮಾರು 200 ನಿವಾಸಿಗಳು ಸುಮಾರು 20 ವರ್ಷಗಳಿಂದ ಇಲ್ಲಿಯೇ ಅನಧಿಕೃತವಾಗಿ ಗುಡಿಸಲುಗಳಲ್ಲಿ ನೆಲೆಸಿದ್ದು, ಅವರು ಅಪಘಾತಗಳಿಗೆ ಸಿಲುಕುವ ಸಂಭವವೂ ಇದೆ. ಆದ್ದರಿಂದ ಆದಷ್ಟು ಶೀಘ್ರದಲ್ಲಿ ಅವರನ್ನು ಬೇರೆಡೆ ಸ್ಥಳಾಂತರಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹೇಳಿದರು. ಅಲ್ಲದೇ ಸ್ಥಳೀಯ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಇಲ್ಲಿನವರು ತೆರೆದ ಪ್ರದೇಶದಲ್ಲಿ, ರಸ್ತೆ ಪಕ್ಕದಲ್ಲಿ ಮಲಮೂತ್ರ ವಿಸರ್ಜನೆ ಮಾಡುತ್ತಿದ್ದಾರೆ. ಇದರಿಂದ ಪರಿಸರ ಹಾಳಾಗುತ್ತಿದ್ದು, ಅವರಿಗೆ ಬೇರೆ ವ್ಯವಸ್ಥೆಯಾಗುವವರೆಗೆ ಅಗತ್ಯ ಶೌಚಾಲಯ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ನಗರಸಭೆಯ ಪೌರಾಯುಕ್ತರಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಇಲ್ಲಿನ ಕೆಲವು ಮಕ್ಕಳು ಶಾಲೆ ಮತ್ತು ಅಂಗನವಾಡಿಗಳಿಗೆ ಹೋಗುತ್ತಿದ್ದು, ಅವರಿಗೆ ಸ್ವಚ್ಛತೆ ಕುರಿತು ಸೂಕ್ತ ಮಾರ್ಗದರ್ಶನ ನೀಡುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ನಗರಸಭೆ ಪೌರಾಯುಕ್ತ ಶ್ರೀಕಾಂತ ರಾವ್, ಶಿಕ್ಷಣ ಇಲಾಖೆ ಉಪನಿರ್ದೇಶಕ ನಾಗೇಂದ್ರ ಮಧ್ಯಸ್ಥ, ಬಿ.ಇ.ಓ. ನಾಗೇಶ್ ಶ್ಯಾನುಭೋಗ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಚಂದ್ರ ಬಾಯರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜೇಂದ್ರ ಬೇಕಲ್, ಸಿಡಿಪಿಓ ಸದಾನಂದ, ಕಾರ್ಮಿಕ ಇಲಾಖೆ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

