ಉಡುಪಿ

ಆರ್‌ಟಿಇ ಕಾಯ್ದೆಯಿಂದ ಗಾಂಧಿ ತತ್ವ ಮೂಲೆಗುಂಪು: ಸ್ವಾಮಿ

Published On :

ಕಾರ್ಕಳ: ಶಾಲೆ ಮಕ್ಕಳು ವಠಾರ ಸ್ವಚ್ಛಗೊಳಿಸುವುದು, ಕಸ ಗುಡಿಸುವುದು, ನೀರು ತರುವುದು, ಶೌಚಾಲಯ ಸ್ವಚ್ಛಗೊಳಿಸುವುದು, ತರಕಾರಿ ಬೆಳೆಸುವುದು ಇತ್ಯಾದಿ ಸ್ವಾವಲಂಬಿ ಜೀವನಕ್ಕೆ ಪೂರಕವಾದ ಎಲ್ಲಾ ಕೌಶಲಗಳನ್ನು ಪ್ರಾಥಮಿಕ ಶಿಕ್ಷಣದೊಂದಿಗೆ ಕಡ್ಡಾಯವಾಗಿ ಕಲಿಯಬೇಕು ಎಂದು ಮಹಾತ್ಮ ಗಾಂಧೀಜಿ ಪ್ರತಿಪಾದಿಸಿದ್ದರು. ಆದರೆ ಇಂದು ಜಾರಿಗೊಂಡಿರುವ ಕಡ್ಡಾಯ ಪ್ರಾಥಮಿಕ ಶಿಕ್ಷಣ ಹಕ್ಕು ಕಾಯ್ದೆಯಲ್ಲಿ ಮಕ್ಕಳಿಗೆ ಇಂಥ ಯಾವುದೇ ಕೆಲಸಗಳನ್ನು ಕಲಿಸುವ, ಕಲಿಯುವ ಅವಕಾಶ ಇಲ್ಲ. ಇಂತಹ ಕೆಲಸಗಳನ್ನು ಕಲಿಸುವ ಶಿಕ್ಷರನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲಾಗುತ್ತಿದೆ. ಇದರಿಂದಾಗಿ ಗಾಂಧಿ ತತ್ವ ಮೂಲೆಗುಂಪಾಗುತ್ತಿದೆ ಎಂದು ರಾಜ್ಯ ಪ್ರಾಥಮಿಕ ಶಾಲೆ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ವಿ. ನಾರಾಯಣ ಸ್ವಾಮಿ ಹೇಳಿದ್ದಾರೆ.
ಅವರು ಇಲ್ಲಿನ ಶ್ರೀ ಮಂಜುನಾಥ ಪೈ ಸಭಾಂಗಣದಲ್ಲಿ ತಾಲೂಕು ಪ್ರಾಥಮಿಕ ಶಾಲೆ ಶಿಕ್ಷಕರ ಸಮ್ಮೇಳನದಲ್ಲಿ ಮಾತನಾಡಿದರು.
ಹೆಚ್ಚುತ್ತಿರುವ ಆಂಗ್ಲ ಮಾಧ್ಯಮ ಶಾಲೆಗಳಿಂದಾಗಿ ಕನ್ನಡ ಮಾಧ್ಯಮ ಶಾಲೆಗಳು ಮಕ್ಕಳಿಲ್ಲದೇ ಮುಚ್ಚುತ್ತಿವೆ. ಇದಕ್ಕೆ ಪೂರಕವಾಗಿ ಸರ್ಕಾರವೇ ಶಿಕ್ಷಣ ಹಕ್ಕು ಕಾಯ್ದೆ ಜಾರಿಗೊಳಿಸಿ, ಕನ್ನಡ ಮಾಧ್ಯಮ ಶಾಲೆಗಳಿಂದ ಮಕ್ಕಳನ್ನು ಎಲ್ಲಾ ಸೌಲಭ್ಯಗಳನ್ನು ನೀಡಿ ಆಂಗ್ಲ ಮಾಧ್ಯಮ ಶಾಲೆಗಳಿಗೆ ಭರ್ತಿ ಮಾಡುತ್ತಿದೆ. ಪ್ರಸ್ತುತ ಕೇವಲ ವಲಸೆ ಕಾರ್ಮಿಕ ವರ್ಗದ ಮಕ್ಕಳು ಮಾತ್ರ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಉಳಿದಿದ್ದಾರೆ. ಮುಂದಿನ 5- 10 ವರ್ಷಳಲ್ಲಿ ರಾಜ್ಯದ ಎಲ್ಲ ಕನ್ನಡ ಮಾಧ್ಯಮ ಶಾಲೆಗಳು ಮುಚ್ಚುತ್ತವೆ ಎಂದು ಕಳವಳ ವ್ಯಕ್ತಪಡಿಸಿದರು.
ಈ ಎಲ್ಲಾ ಸಮಸ್ಯೆಗಳ ಪರಿಹಾರಕ್ಕೆ ಸಮಾನ ಶಾಲೆ, ಸಮಾನ ಶಿಕ್ಷಣ, ಸಮಾನ ವೇತನ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.  ಶಾಸಕ ವಿ. ಸುನಿಲ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣ ಇಲಾಖೆಯ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ಶಿಕ್ಷಕರ ಸಂಘಟನೆಗಳ ಪದಾಧಿಕಾರಿಗಳು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.