ಬೇಲಿಯೇ ಎದ್ದು ಹೊಲ ಮೇಯುತ್ತಿದೆ ಎಂದು ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್ ಆರೋಪ

ಈ ಬಾರಿಯ ಚುನಾವಣೆಯಲ್ಲಿ ಕೇವಲ ಒಂದು ಪಕ್ಷ ಮತ್ತೊಂದು ಪಕ್ಷದ ಮೇಲೆ ಆರೋಪ ಹೊರಿಸದೆ ಚುನಾವಣಾ...
ಚುನಾವಣಾ ಆಯೋಗ
ಚುನಾವಣಾ ಆಯೋಗ
ನವದೆಹಲಿ/ಕೋಲ್ಕತ್ತಾ: ಈ ಬಾರಿಯ ಚುನಾವಣೆಯಲ್ಲಿ ಕೇವಲ ಒಂದು ಪಕ್ಷ ಮತ್ತೊಂದು ಪಕ್ಷದ ಮೇಲೆ ಆರೋಪ ಹೊರಿಸದೆ ಚುನಾವಣಾ ಆಯೋಗದ ಬಗ್ಗೆಯೂ ಆರೋಪ ಕೇಳಿಬರುತ್ತಿದೆ. ಕಾಂಗ್ರೆಸ್ ಮತ್ತು ತೃಣಮೂಲ ಕಾಂಗ್ರೆಸ್ ಚುನಾವಣಾ ಆಯೋಗ ಪೂರ್ವಾಗ್ರಹ ಪೀಡಿತವಾಗಿದೆ ಎಂದು ಆರೋಪಿಸಿದೆ.
ಪಶ್ಚಿಮ ಬಂಗಾಳದಲ್ಲಿ ಹಿರಿಯ ಪೊಲೀಸ್ ಅಧಿಕಾರಿಯನ್ನು ವರ್ಗಾವಣೆ ಮಾಡುವಂತೆ ಚುನಾವಣಾ ಆಯೋಗ ಇತ್ತೀಚೆಗೆ ಆದೇಶ ಹೊರಡಿಸಿದ್ದು ಇದಕ್ಕೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೆಂಡಮಂಡಲರಾಗಿದ್ದಾರೆ. ಚುನಾವಣಾ ಆಯೋಗ ಪಕ್ಷಪಾತ ಧೋರಣೆ ತಳೆಯುತ್ತಿದೆ ಎಂದು ಮಮತಾ ಬ್ಯಾನರ್ಜಿಯವರು ಪತ್ರ ಬರೆದಿದ್ದು ಬಿಜೆಪಿಯ ಪರವಾಗಿ ಆಯೋಗ ಕೆಲಸ ಮಾಡುತ್ತಿದೆ ಎಂದಿದ್ದಾರೆ.
ದೇಶದಲ್ಲಿ ಪ್ರಜಾಪ್ರಭುತ್ವವನ್ನು ಕಾಪಾಡಲು ಚುನಾವಣಾ ಆಯೋಗ ತಟಸ್ಥ ನಿಲುವು ಹೊಂದಬೇಕು. ಆದರೆ ನನಗಿಂದು ಚುನಾವಣಾ ಆಯೋಗದ ವಿರುದ್ಧ ಪತ್ರ ಬರೆಯುವ ದುರದೃಷ್ಟಕರ ಪರಿಸ್ಥಿತಿ ಬಂದಿದೆ. ನಾಲ್ವರು ಹಿರಿಯ ಐಪಿಎಸ್ ಅಧಿಕಾರಿಯನ್ನು ವರ್ಗಾಯಿಸಿ ಚುನಾವಣಾ ಆಯೋಗ ನಿನ್ನೆ ಆದೇಶ ಹೊರಡಿಸಿದೆ ಎಂದು ಪತ್ರದಲ್ಲಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.
ಚುನಾವಣಾ ಆಯೋಗದ ನಿರ್ಧಾರ ಅನಿಯಂತ್ರಿತವಾಗಿದ್ದು ಬಿಜೆಪಿ ಪ್ರೇರಣೆಯಿಂದ ಪಕ್ಷಪಾತೀಯವಾಗಿ ವರ್ತಿಸುತ್ತಿದ್ದಾರೆ. ಬಿಜೆಪಿ ಪರವಾಗಿ ಚುನಾವಣಾ ಆಯೋಗ ವರ್ತಿಸುತ್ತಿದೆ ಎಂಬುದಕ್ಕೆ ಬಲವಾದ ಕಾರಣಗಳಿವೆ ಎಂದು ಪತ್ರದಲ್ಲಿ ಹೇಳಿದ್ದಾರೆ.
ಲೋಕಸಭೆ ಚುನಾವಣೆಯ ಮತದಾನ ದಿನಾಂಕ ಸನ್ನಿಹಿತವಾಗಿರುವ ಸಂದರ್ಭದಲ್ಲಿ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ನಾಲ್ವರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ವರ್ಗಾಯಿಸಿದೆ. ಪಶ್ಚಿಮ ಬಂಗಾಳಕ್ಕೆ ವಿಶೇಷ ಪೊಲೀಸ್ ವೀಕ್ಷಕರು ನೀಡಿರುವ ವರದಿ ಆಧರಿಸಿ ಚುನಾವಣಾ ಆಯೋಗ ಈ ನಿರ್ಧಾರ ಕೈಗೊಂಡಿದೆ ಎಂದು ಮೂಲಗಳು ತಿಳಿಸಿವೆ.
ಇನ್ನೊಂದೆಡೆ ಕಾಂಗ್ರೆಸ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೋದಿಯವರ ಸೇನೆ ಎಂದು ಹೇಳಿಕೆ ನೀಡಿದ್ದರೂ ಚುನಾವಣಾ ಆಯೋಗ ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ಪ್ರಶ್ನಿಸಿದೆ.
ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ಕಾಂಗ್ರೆಸ್ ಪಕ್ಷದ ನ್ಯಾಯ್ ಯೋಜನೆ ಪ್ರಕಟಣೆಯನ್ನು ಟೀಕಿಸಿದ್ದಕ್ಕೆ ಶಿಸ್ತು ಕ್ರಮ ಕೈಗೊಳ್ಳದೆ ಹಗುರವಾಗಿ ಭವಿಷ್ಯದಲ್ಲಿ ಈ ರೀತಿ ಮಾಡದಂತೆ ಎಚ್ಚರಿಕೆ ಮಾತ್ರ ನೀಡಿದ್ದು ಕೂಡ ಚುನಾವಣಾ ಆಯೋಗದ ನಡೆಯ ಬಗ್ಗೆ ಸಂಶಯ ಹುಟ್ಟಿಸುತ್ತದೆ ಎಂದು ಕಾಂಗ್ರೆಸ್ ವಕ್ತಾರ ರಂದೀಪ್ ಸುರ್ಜೆವಾಲಾ ಟೀಕಿಸಿದ್ದಾರೆ.
ರಾಜಸ್ತಾನ ಗವರ್ನರ್ ಕಲ್ಯಾಣ್ ಸಿಂಗ್ ಮತ್ತು ನೀತಿ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್ ಹುದ್ದೆಯಲ್ಲಿ ಮುಂದುವರಿಯುವ ನೈತಿಕ ಹಕ್ಕು ಹೊಂದಿಲ್ಲ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com