ಗೋಡ್ಸೆ 'ದೇಶಭಕ್ತ' ಹೇಳಿಕೆಗೆ ಪ್ರಗ್ಯಾ ಠಾಕೂರ್ ಕ್ಷಮೆಯಾಚಿಸಿದ್ದಾರೆ: ಬಿಜೆಪಿ

ರಾಷ್ಟ್ರಪಿತ ಮಹಾತ್ಮಾ ಗಾಂಧಿಯ ಹಂತಕ ನಾಥೂರಾಮ್ ಗೋಡ್ಸೆಯನ್ನು ದೇಶಭಕ್ತ ಎಂದು ಕರೆದಿದ್ದ ಮಾಲೇಗಾಂವ್ ಸ್ಫೋಟ ಪ್ರಕರಣದ ಆರೋಪಿ....
ಪ್ರಗ್ಯಾ ಸಿಂಗ್ ಠಾಕೂರ್
ಪ್ರಗ್ಯಾ ಸಿಂಗ್ ಠಾಕೂರ್
ಭೋಪಾಲ್: ರಾಷ್ಟ್ರಪಿತ ಮಹಾತ್ಮಾ ಗಾಂಧಿಯ ಹಂತಕ ನಾಥೂರಾಮ್ ಗೋಡ್ಸೆಯನ್ನು ದೇಶಭಕ್ತ ಎಂದು ಕರೆದಿದ್ದ ಮಾಲೇಗಾಂವ್ ಸ್ಫೋಟ ಪ್ರಕರಣದ ಆರೋಪಿ ಹಾಗೂ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಅವರು ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ ಎಂದು ಬಿಜೆಪಿ ತಿಳಿಸಿದೆ.
ಪ್ರಗ್ಯಾ ಸಿಂಗ್ ಠಾಕೂರ್ ಅವರು ಗೋಡ್ಸೆ ಕುರಿತ ತಮ್ಮ ಹೇಳಿಕೆಗೆ ಸಂಬಂಧಿಸಿದಂತೆ ಮಧ್ಯ ಪ್ರದೇಶ ಬಿಜೆಪಿ ಘಟಕಕ್ಕೆ ಕ್ಷಮೆಯಾಚಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಇಂದು ಭೋಪಾಲ್ ನಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಪ್ರಗ್ಯಾ ಸಿಂಗ್ ಠಾಕೂರ್, ನಾಥೂರಾಮ್ ಗೋಡ್ಸೆ ಒಬ್ಬ ದೇಶಭಕ್ತ. ಅವರು ದೇಶಭಕ್ತರಾಗಿಯೇ ಜನರ ಮನದಲ್ಲಿ ಉಳಿಯುತ್ತಾರೆ ಎಂದು ಹೇಳಿದ್ದರು.
ನಾಥೂರಾಮ್ ಗೋಡ್ಸೆ ಬಗ್ಗೆ ಕೆಲವರು ಹಗುರವಾಗಿ ಮಾತನಾಡುತ್ತಿದ್ದಾರೆ. ಅವರನ್ನು ಭಯೋತ್ಪಾದಕ ಎಂದು ಕರೆಯುತ್ತಿದ್ದಾರೆ. ಅಂತವರಿಗೆ ಈ ಚುನಾವಣೆ ಮೂಲಕ ಉತ್ತರ ನೀಡಲಾಗುತ್ತದೆ ಎಂದು ಪ್ರಗ್ಯಾ ಸಿಂಗ್ ಪರೋಕ್ಷವಾಗಿ ನಟ ಹಾಗೂ ರಾಜಕಾರಣಿ ಕಮಲ್ ಹಾಸನ್ ವಿರುದ್ಧ ಕಿಡಿಕಾರಿದ್ದಾರೆ.
ಪ್ರಗ್ಯಾ ಸಿಂಗ್ ಹೇಳಿಕೆಯನ್ನು ಖಂಡಿಸಿರುವ ಬಿಜೆಪಿ ವಕ್ತಾರ ಜಿವಿಎಲ್ ನರಸಿಂಹರಾವ್ ಅವರು, ಪ್ರಗ್ಯಾ ಸಿಂಗ್ ಠಾಕೂರ್ ಹೇಳಿಕೆಯನ್ನು ಬಿಜೆಪಿ ಒಪ್ಪಿಕೊಳ್ಳುವುದಿಲ್ಲ ಮತ್ತು ಅದನ್ನು ಖಂಡಿಸುತ್ತದೆ. ಈ ಕುರಿತು ಪಕ್ಷ ಅವರ ಬಳಿ ಸ್ಪಷ್ಟನೆ  ಕೇಳಿದ್ದು, ಹೇಳಿಕೆಗೆ ಕ್ಷಮೆಯಾಚಿಸುವಂತೆಯೂ ಸೂಚಿಸಲಾಗಿದೆ ಎಂದು ತಿಳಿಸಿದ್ದರು.
ಮಕ್ಕಳ್ ನೀಧಿ ಮಯ್ಯಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಅವರು, ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಹಿಂದೂ. ಆತನ ಹೆಸರು ನಾಥೂರಾಮ್ ಗೋಡ್ಸೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಕಳೆದ ಏಪ್ರಿಲ್ ನಲ್ಲಿ ನಾಥೂರಾಮ್ ಗೋಡ್ಸೆ ವಿಚಾರವಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಪ್ರಗ್ಯಾ ಸಿಂಗ್, ಮಹಾತ್ಮ ಗಾಂಧಿ ಅವರನ್ನು ಹತ್ಯೆ ಮಾಡಿದ್ದ ಗೋಡ್ಸೆ ಬದುಕಿದ್ದರೆ ಅವರಿಗೂ ಬಿಜೆಪಿ ಟಿಕೆಟ್ ನೀಡುತಿತ್ತು ಎಂದು ಹೇಳಿದ್ದರು. ಈ ವಿಚಾರವಾಗಿ ಅನೇಕರು ಅಸಮಾಧಾನ ಹೊರ ಹಾಕಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com