ಕಾಂಗ್ರೆಸ್ ಗೆ ಎಚ್.ಟಿ ಸಾಂಗ್ಲಿಯಾನ ಗುಡ್ ಬೈ!

ಲೋಕಸಭಾ ಚುನಾವಣೆಯಲ್ಲಿ ಕ್ರೈಸ್ತ ಸಮುದಾಯಕ್ಕೆ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬೇಸರಗೊಂಡು ಮಾಜಿ ಸಂಸದ ಎಚ್.ಟಿ.ಸಾಂಗ್ಲಿಯಾನ ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ
HT Sangliana
HT Sangliana
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಕ್ರೈಸ್ತ ಸಮುದಾಯಕ್ಕೆ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬೇಸರಗೊಂಡು ಮಾಜಿ ಸಂಸದ ಎಚ್.ಟಿ.ಸಾಂಗ್ಲಿಯಾನ ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಎಐಸಿಸಿ ಅಧ್ಯಕ್ಷ  ರಾಹುಲ್ ಗಾಂಧಿಗೆ ರಾಜೀನಾಮೆ ಪತ್ರ ಬರೆದಿರುವ ಎಚ್.ಟಿ.ಸಾಂಗ್ಲಿಯಾನ, ಕಳೆದ ಲೋಕಸಭಾ ಅವಧಿಯಲ್ಲಿ ತಮ್ಮೊಂದಿಗೆ ಕೆಲಸ ಮಾಡಿದ್ದೇನೆ. ಪಕ್ಷದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯನಾಗಿ ಚುನಾವಣೆ ಪ್ರಚಾರ ಸೇರಿದಂತೆ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಆದರೆ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಒಂದೂ ಕ್ಷೇತ್ರವನ್ನು ಕ್ರೈಸ್ತ ಸಮುದಾಯಕ್ಕೆ ಬಿಟ್ಟುಕೊಡದೆ ಕಾಂಗ್ರೆಸ್ ನಾಯಕರು ಕಡೆಗಣಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜ್ಯ ನಾಯಕರು ಹಾಗೂ ಪಕ್ಷದ ಹೈಕಮಾಂಡ್ ಸಹ ಕ್ರೈಸ್ತ ಸಮುದಾಯದ ಹಿತ ಕಾಪಾಡುವಲ್ಲಿ ವಿಫಲವಾಗಿದೆ. ಹೀಗಾಗಿ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ಸ್ಥಾನ ಹಾಗೂ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಪತ್ರದಲ್ಲಿ ಮಾಜಿ ಸಂಸದ ಉಲ್ಲೇಖಿಸಿದ್ದಾರೆ.
ಬೆಂಗಳೂರು ಉತ್ತರ ಅಥವಾ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಎಚ್.ಟಿ.ಸಾಂಗ್ಲಿಯಾನ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿರಲಿಲ್ಲ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಎಚ್ಚರಿಕೆ ನೀಡಿದ್ದ ಅವರು ಪಕ್ಷ ಟಿಕೆಟ್ ನೀಡದಿದ್ದಲ್ಲಿ ಪಕ್ಷೇತರನಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದು ಹೇಳಿದ್ದರು. ಆದರೆ ಕೊನೆ ಕ್ಷಣದಲ್ಲಿ ನಾಮಪತ್ರ ಸಲ್ಲಿಸದೆ ಸುಮ್ಮನಾಗಿದ್ದರು ಎನ್ನಲಾಗಿದೆ.
ಬೆಂಗಳೂರು ಉತ್ತರ ಹಾಗೂ ಬೆಂಗಳೂರು ಕೇಂದ್ರದಲ್ಲಿ ಅಲ್ಪಸಂಖ್ಯಾತ ಮತ್ತು ಕ್ರೈಸ್ತ ಸಮುದಾಯಗಳ ಮತದಾರರ ಸಂಖ್ಯೆ ಹೆಚ್ಚಿದೆ. ಅವರ ದಿಢೀರ್‌ ರಾಜೀನಾಮೆಯಿಂದ ಕಾಂಗ್ರೆಸ್ ಅಭ್ಯರ್ಥಿಗೆ ಕ್ರೈಸ್ತ ಸಮುದಾಯದ ಮತಗಳು ಕೈ ತಪ್ಪುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com