

ಶಿವಮೊಗ್ಗ: ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರದಲ್ಲಿ ಕಾಂಗ್ರೆಸ್ ನಾಯಕರಾದ ಡಿಕೆ ಶಿವಕುಮಾರ್ ಹಾಗೂ ಎಂ.ಬಿ. ಪಾಟೀಲ್ ಬೀದಿ ಕುಡುಕರ ರೀತಿಯಲ್ಲಿ ಬಡಿದಾಡುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಕೆ. ಎಸ್. ಈಶ್ವರಪ್ಪ ಟೀಕಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ರಾಘವೇಂದ್ರ ಪರ ಇಂದು ನಡೆದ ಪ್ರಚಾರದ ವೇಳೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ. ಕೆ. ಶಿವಕುಮಾರ್ ಕ್ಷಮೆ ಕೇಳ್ತೀನಿ ಅಂತಾರೆ, ಎಂ. ಬಿ. ಪಾಟೀಲ್ ಕ್ಷಮೆ ಕೇಳೋಕೆ ಅವನ್ಯಾರು ಅಂತಾರೆ. ಇವರಿಬ್ಬರ ನಡುವಿನ ವಾಕ್ಸಮರ ನಾಚಿಕೆಗೇಡಿನವಾಗಿದೆ ಎಂದರು.
ಕಾಂಗ್ರೆಸ್ ಹಾಗೂ ಜೆಡಿಎಸ್ ನಲ್ಲಿ ತಳಮಟ್ಟದಿಂದಲೇ ಹೊಂದಾಣಿಕೆ ಇಲ್ಲ, ಶಿವಮೊಗ್ಗ ಸೇರಿದಂತೆ ರಾಜ್ಯದಲ್ಲಿ ಎಲ್ಲೂ ಮೈತ್ರಿಕೂಟದ ಮಧ್ಯೆ ಹೊಂದಾಣಿಕೆ ಇಲ್ಲ ಎಂದು ತಿಳಿಸಿದರು.
ರಾಜ್ಯದ 28 ಕ್ಷೇತ್ರಗಳಲ್ಲಿ ಬಿಜೆಪಿಗೆ ಉತ್ತಮ ಪ್ರತಿಕ್ರಿಯೆ ಕಂಡುಬರುತ್ತಿದೆ. ನಿರೀಕ್ಷೆಗೂ ಮೀರಿ ಕಾರ್ಯಕರ್ತರು ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ರಾಜ್ಯದಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ಈಶ್ವರಪ್ಪ ಭರವಸೆ ವ್ಯಕ್ತಪಡಿಸಿದರು.