ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮತದಾನ; 241 ಅಭ್ಯರ್ಥಿಗಳು, 2.67 ಕೋಟಿ ಮತದಾರರು

ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯ ನಾಳೆ ನಿರ್ಧಾರವಾಗಲಿದೆ. ಗುರುವಾರ ಬೆಳಗ್ಗೆ 7ರಿಂದ ಸಂಜೆ 6ರವರೆಗೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಬೆಂಗಳೂರು: ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯ ನಾಳೆ ನಿರ್ಧಾರವಾಗಲಿದೆ. ಗುರುವಾರ ಬೆಳಗ್ಗೆ 7ರಿಂದ ಸಂಜೆ 6ರವರೆಗೆ ಮತದಾನ ನಡೆಯಲಿದ್ದು, ಒಟ್ಟು 2.67 ಕೋಟಿ ಮತದಾರರು 241 ಅಭ್ಯರ್ಥಿಗಳ ಹಣೆಬರಹ ಬರೆಯಲಿದ್ದಾರೆ. 
ದೇಶಾದ್ಯಂತ ಏಳು ಹಂತಗಳಲ್ಲಿ ಮತದಾನ ನಡೆಯುತ್ತಿದ್ದು, ರಾಷ್ಟ್ರಮಟ್ಟದಲ್ಲಿ ಎರಡನೇ ಹಂತದ ಮತದಾನ ಇದಾಗಿದ್ದು, ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ನಡೆಯುತ್ತಿದೆ. ಏ. 23ರಂದು ಎರಡನೇ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. 
ಇಂದು ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರು, ಮತದಾರರ ಎಡಗೈನ ತೋರು ಬೆರಳಿಗೆ ಮತದಾನದ ಗುರುತಿನ ಶಾಹಿ ಹಾಕಲಾಗುತ್ತದೆ. ಮೊದಲ ಹಂತದಲ್ಲಿ 1.35 ಕೋಟಿ ಪುರುಷರು, 1.32 ಕೋಟಿ ಮಹಿಳೆಯರು ಹಾಗೂ 2817 ಲೈಂಗಿಕ ಅಲ್ಪಸಂಖ್ಯಾತರು ಸೇರಿ 2.67 ಕೋಟಿ ಮತದಾರರು ಮತಚಲಾಯಿಸಲಿದ್ದಾರೆ. ಮುಕ್ತ ಹಾಗೂ ಶಾಂತಿಯುತ ಮತದಾನಕ್ಕೆ ಮತದಾನದ ನಡೆಯುವ ಕ್ಷೇತ್ರಗಳಲ್ಲಿ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದರು. 
ನಾಳೆ ಉಡುಪಿ -ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ ಕ್ಷೇತ್ರಗಳಿಗ ಮತದಾನ ನಡೆಯಲಿದೆ.  
ಈ ಭಾರಿ ಶೇ.99.93 ಭಾವಚಿತ್ರವಿರುವ ಗುರುತಿನ ಚೀಟಿಗಳನ್ನು ನೀಡಲಾಗಿದೆ. ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರಿದ್ದರೆ ಮತದಾರರು, ಪಾಸ್ ಪೋರ್ಟ್, ಚಾಲನಾ ಪರವಾನಗಿ, ಕೇಂದ್ರ, ರಾಜ್ಯ ಸರ್ಕಾರಿ ನೌಕರರಾಗಿದ್ದರೆ ಭಾವಚಿತ್ರವುಳ್ಳ ಸೇವಾ ಗುರುತಿನ ಚೀಟಿ, ಬ್ಯಾಂಕ್, ಅಂಚೆ ಕಚೇರಿಯ ಭಾವಚಿತ್ರವುಳ್ಳ ಪಾಸ್ ಬುಕ್, ಪ್ಯಾನ್‌ ಕಾರ್ಡ್, ಆರ್ ಬಿಐ ವಿತರಿಸಿದ ಸ್ಮಾರ್ಟ್ ಕಾರ್ಡ್, ಮನ್ರೇಗ ಉದ್ಯೋಗ ಚೀಟಿ, ಆರೋಗ್ಯ ವಿಮೆಯ ಸ್ಮಾರ್ಟ್ ಕಾರ್ಡ್, ಭಾವಚಿತ್ರವುಳ್ಳ ಪಿಂಚಣಿ ದಾಖಲೆ, ಶಾಸಕ, ಸಂಸದರು ಹಾಗೂ ವಿಧಾನಪರಿಷತ್ ಸದಸ್ಯರ ಅಧಿಕೃತ ಗುರುತಿನ ಚೀಟಿ, ಆಧಾರ್ ಕಾರ್ಡ್ -ಇವುಗಳಲ್ಲಿ ಯಾವುದಾದರೂ ಒಂದು ಗುರುತಿನ ಚೀಟಿಯನ್ನು ತೋರಿಸಿ ಮತ ಚಲಾಯಿಸಬಹುದು ಎಂದರು. 
ಮತಗಟ್ಟೆಯ 100 ಮೀಟರ್ ವ್ಯಾಪ್ತಿಯಲ್ಲಿ ರಾಜಕೀಯ ಪಕ್ಷಗಳ ಮುಖಂಡರು, ಅಭ್ಯರ್ಥಿಗಳು ಪ್ರಚಾರ ನಡೆಸುವಂತಿಲ್ಲ. ಮತದಾರರ ಮೇಲೆ ಪ್ರಭಾವ ಬೀರುವಂತಿಲ್ಲ. ದುರ್ಬಲ ವರ್ಗಗಳನ್ನು ಬೆದರಿಸುವಂತಹ ಕೆಲಸದಲ್ಲಿ ತೊಡಗುವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಸಂಜೀವ್ ಕುಮಾರ್ ಎಚ್ಚರಿಕೆ ನೀಡಿದರು. 
ಮತಗಟ್ಟೆಯೊಳಗೆ ಮೊಬೈಲ್‌ ಗಳನ್ನು ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ. ಅನಿವಾಸಿ ಭಾರತೀಯರಿಗೆ ಯಾವುದೇ ಆನ್ ಲೈನ್‌ ಮತದಾನದ ವ್ಯವಸ್ಥೆ ಕಲ್ಪಿಸಲಾಗಿಲ್ಲ. ಮತದಾನ ಮಾಡಲು ಯಾವುದೇ ಆ್ಯಪ್ ತಯಾರಿಸಲಾಗಿಲ್ಲ. ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದಲ್ಲಿ, ಯಾವುದೇ ಗುರುತಿನ ಚೀಟಿ ತೋರಿಸಿ ಮತ ಚಲಾಯಿಸಲು ಅವಕಾಶವಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. 
ರಾಜ್ಯಾದ್ಯಂತ ಒಟ್ಟು 30,164 ಮತಗಟ್ಟೆಗಳಿವೆ. ಬೆಂಗಳೂರು ಗ್ರಾಮಾಂತರ ಅತಿ ಹೆಚ್ಚು ಅಂದರೆ, 2672 ಹಾಗೂ ಉಡುಪಿ-ಚಿಕ್ಕಮಗಳೂರು ಜಿಲ್ಲೆಯಲ್ಲಿ ಅತಿ ಕಡಿಮೆ ಅಂದರೆ 1837 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಒಟ್ಟು 393 ಸಖಿ, 32 ಬುಡಕಟ್ಟು ಸಮುದಾಯಕ್ಕೆ ಮೀಸಲಾದ ಹಾಗೂ ದಿವ್ಯಾಂಗರೇ ನಿರ್ವಹಿಸುವ  61 ಮತಗಟ್ಟೆಗಳಿವೆ. ರಾಜ್ಯಾದ್ಯಂತ ಒಟ್ಟು 4.29 ಲಕ್ಷ ದಿವ್ಯಾಂಗ ಮತದಾರರಿದ್ದು, ಅವರಿಗೆ  ಅನುಕೂಲ ಕಲ್ಪಿಸುವ ಸಲುವಾಗಿ ಮತಗಟ್ಟೆಗಳಲ್ಲಿ ವಿಶೇಷ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ಗಾಲಿ ಕುರ್ಚಿಗಳು, ಭೂತಗನ್ನಡಿ, ಸಹಾಯಕರು, ಸನ್ಹೆ ಭಾಷೆಯ ವಿವರಣಾಕಾರರು, ವಾಹನಗಳ ವ್ಯವಸ್ಥೆ, ಸ್ವಯಂ ಸೇವಕರು, ವಾಕಿಂಗ್ ಸ್ಟಿಕ್ ಮತ್ತಿತರರ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. 
ಬಿಬಿಎಂಪಿ ವ್ಯಾಪ್ತಿಯಲ್ಲಿ, ಮೈಸೂರು, ಬೆಳಗಾವಿ, ಹುಬ್ಬಳ್ಳಿ ಧಾರವಾಡ, ಬಳ್ಳಾರಿ ಹಾಗೂ ಕಲಬುರಗಿಯಲ್ಲಿ ದಿವ್ಯಾಂಗ ಮತದಾರರಿಗೆ ಓಲಾ ಕ್ಯಾಬ್ ವ್ಯವಸ್ಥೆ ಕಲ್ಪಿಸಲಾಗಿದೆ. ಬಿಬಿಎಂಪಿ ಪ್ರದೇಶದಲ್ಲಿ 39 ಕ್ಯಾಬ್ ಗಳ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು. 
ಮತದಾನದ ದಿನದಂದು ಡ್ರೈ ಡೇ ಎಂದು ಗುರುತಿಸಲಾಗಿದ್ದು, ಮದ್ಯ ಮಾರಾಟ ನಿಷೇಧಿಸಲಾಗಿದೆ. 48 ಗಂಟೆಗಳ ಅವಧಿಯಲ್ಲಿ ಲೌಡ್ ಸ್ಪೀಕರ್ ಗಳ ಮೇಲೆ ನಿರ್ಬಂಧ ಹೇರಲಾಗಿದೆ. ಮಾಧ್ಯಮಗಳ ಮೇಲೆ ಕೂಡ ಹಲವು ನಿಬಂಧನೆಗಳನ್ನು ಹೇರಲಾಗಿದೆ. ಚುನಾವಣಾ ಕಾರ್ಯಕ್ಕಾಗಿ 2775 ಜೀಪು, 7557 ಕೆ ಎಸ್ ಆರ್ ಟಿ ಸಿ, 2278 ಮ್ಯಾಕ್ಸಿ ಕ್ಯಾಬ್, 8990 ಖಾಸಗಿ ವಾಹನಗಳು ಸೇರಿ ಒಟ್ಟು 21,600 ವಾಹನಗಳನ್ನು ನಿಯೋಜಿಸಲಾಗಿದೆ ಎಂದು ವಿವರಣೆ ನೀಡಿದರು. 
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಿರಂತರ ವಿದ್ಯುತ್ ವ್ಯತ್ಯಯವಾಗುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಮತದಾನದ ದಿನ ವಿದ್ಯುತ್ ವ್ಯತ್ಯಯ ಉಂಟಾಗದಂತೆ ಕ್ರಮ ಕೈಗೊಳ್ಳಲು ಇಂಧನ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com