ಗೆಲುವು ಸಾಧಿಸಿದ ಅಭ್ಯರ್ಥಿಗಳು
ಕರ್ನಾಟಕ
ಆರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು, ಹಾಸನದಲ್ಲಿ ಪ್ರಜ್ವಲ್ ಭರ್ಜರಿ ಜಯ; ಬೆಂಗಳೂರು ಗ್ರಾಮಾಂತರದಲ್ಲಿ ಡಿ.ಕೆ ಸುರೇಶ್ ಜಯಭೇರಿ
ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಪ್ರಗತಿಯಲ್ಲಿದ್ದು , ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು, ಬಳ್ಳಾರಿ, ಚಿಕ್ಕಬಳ್ಳಾಪುರ, ಕೋಲಾರ ,ಶಿವಮೊಗ್ಗ ...
ಬೆಂಗಳೂರು: ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಪ್ರಗತಿಯಲ್ಲಿದ್ದು , ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು, ಬಳ್ಳಾರಿ, ಚಿಕ್ಕಬಳ್ಳಾಪುರ, ಕೋಲಾರ ,ಶಿವಮೊಗ್ಗ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ವಿವಿ ಪ್ಯಾಟ್ ಚೀಟಿ ತಾಳೆ ಹಾಕುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು ಬಳಿಕ ಬಗ್ಗೆ ಚುನಾವಣಾ ಆಯೋಗ ಅಧಿಕೃತ ಫಲಿತಾಂಶವನ್ನು ಘೋಷಣೆ ಮಾಡಲಿದೆ.
ಹಾಸನ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಮೊಮ್ಮಗ ಹಾಗೂ ಸಚಿವ ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಭರ್ಜರಿ ಗೆಲುವು ಸಾಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ, ಇಲ್ಲಿ ಕಾಂಗ್ರೆಸ್‌ನಿಂದ ಕಣಕ್ಕಿಳಿರುವ ಮಿಥುನ್ ರೈ ಸೋಲನುಭವಿಸಿದ್ದಾರೆ
ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಎದುರು ಜಯ ಸಾಧಿಸಿದ್ದಾರೆ. ಕೋಲಾರದಲ್ಲಿ ಹಾಲಿ ಸಂಸದ ಕೆ ಎಚ್ ಮುನಿಯಪ್ಪ ಸೋಲು ಕಂಡಿದ್ದು, ಅವರು ಸತತ ಏಳು ಬಾರಿ ಈ ಕ್ಷೇತ್ರದಿಂದ ಗೆದ್ದಿದ್ದರು, ಬಿಬಿಎಂಪಿ ಸದಸ್ಯ ಮುನಿಸ್ವಾಮಿ ಅವರು ಈ ಕ್ಷೇತ್ರದಿಂದ ಗೆಲುವು ಸಾಧಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ
ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ ಎನ್ ಬಚ್ಚೇಗೌಡ ಅವರು ಕಾಂಗ್ರೆಸ್ ಅಭ್ಯರ್ಥಿ ವೀರಪ್ಪ ಮೊಯ್ಲಿ ಎದುರು ಭರ್ಜರಿ ಗೆಲುವು ಸಾಧಿಸಿದ್ದಾರೆ, ಬಳ್ಳಾರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿ ಎಸ್ ಉಗ್ರಪ್ಪ ಅವರಿಗೆ ಬಿಜೆಪಿಯ ದೇವೇಂದ್ರಪ್ಪ ಸೋಲುಣಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ನಿರೀಕ್ಷೆಯಂತೆ ಗೆಲುವು ಸಾಧಿಸಿದ್ದಾರೆ. ತಮ್ಮ ಪ್ರತಿಸ್ಫರ್ಧಿ ಬಿಜೆಪಿ ಅಭ್ಯರ್ಥಿ ಅಶ್ವಥ್ ನಾರಾಯಣ್ ವಿರುದ್ದ ಗೆಲುವು ದಾಖಲಿಸಿದ್ದಾರೆ.
ಶಿವಮೊಗ್ಗ ಬಿಜೆಪಿ ಅಭ್ಯರ್ಥಿ ಬಿ ವೈರಾಘವೇಂದ್ರ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ವಿರುದ್ದ ಭಾರೀ ಅಂತರದಲ್ಲಿ ಜಯ ಸಾಧಿಸಿದ್ದು ಅಧಿಕೃತ ಫಲಿತಾಂಶ ಪ್ರಕಟಣೆ ಬಾಕಿ ಇದೆ, ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಗೆಲುವು ಸಾಧಿಸಿದ್ದು, ಕಾಂಗ್ರೆಸ್‌ನ ಬಿ ಕೆ ಹರಿಪ್ರಸಾದ್ ಸೋತಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ