ತುಮಕೂರಿಂದಲೇ ಸ್ಪರ್ಧಿಸುತ್ತೇನೆ, ಸೋಮವಾರ ನಾಮಪತ್ರ ಸಲ್ಲಿಕೆ: ದೇವೇಗೌಡ

ಈ ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಬೇಕೇ, ಬೇಡವೇ ಎಂಬ ಗೊಂದಲದಲ್ಲಿದ್ದ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರು....
ಎಚ್ ಡಿ ದೇವೇಗೌಡ
ಎಚ್ ಡಿ ದೇವೇಗೌಡ
ಬೆಂಗಳೂರು: ಈ ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಬೇಕೇ, ಬೇಡವೇ ಎಂಬ ಗೊಂದಲದಲ್ಲಿದ್ದ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರು ಶನಿವಾರ ಕೊನೆಗೂ ಚುನಾವಣೆಗೆ ಸ್ಪರ್ಧಿಸುವ ನಿರ್ಧಾರ ಪ್ರಕಟಿಸಿದ್ದು, ತುಮಕೂರಿನಿಂದಲೇ ಸ್ಪರ್ಧಿಸುವುದಾಗಿ ಹೇಳಿದ್ದಾರೆ.
ಮೊಮ್ಮಗನಿಗೆ ತಾವು ಪ್ರತಿನಿಧಿಸುತ್ತಿದ್ದ ಹಾಸನ ಕ್ಷೇತ್ರ ಬಿಟ್ಟುಕೊಟ್ಟ ನಂತರ ಎಲ್ಲಿ ಸ್ಪರ್ಧೆ ಮಾಡಬೇಕು ಎಂಬ ತೊಯ್ದಾಟ ದಲ್ಲಿದ್ದ ದೇವೇ ಗೌಡರು ಅಂತಿಮವಾಗಿ ತುಮಕೂರು ಕ್ಷೇತ್ರದಿಂದ ಸ್ಪರ್ಧೆಗೆ ತೀರ್ಮಾನಿಸಿದ್ದಾರೆ.
ತುಮಕೂರು ಹಾಲಿ ಸಂಸದ ಮುದ್ದಹನುಮೇಗೌಡ ಅವರು ಇಂದು ತಮ್ಮ ತೋಟದ ಮನೆಯಲ್ಲಿ ಸಭೆ ಸೇರಿ, ತಾವೂ ಸಹ ತುಮಕೂರಿನಿಂದಲೇ, ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದರು. ಇದರ ಬೆನ್ನಲ್ಲೇ ದೇವೇಗೌಡರು ಸಹ ತಾವು ತುಮಕೂರಿನಿಂದ ಸ್ಪರ್ಧಿಸುವುದಾಗಿ ಮತ್ತು ಸೋಮವಾರ ನಾಮಪತ್ರ ಸಲ್ಲಿಸುವುದಾಗಿ ಹೇಳಿದ್ದಾರೆ.
ಪದ್ಮನಾಭನಗರ ನಿವಾಸದಲ್ಲಿ ಶುಕ್ರವಾರ ರಾತ್ರಿ ನಡೆದ ತುಮಕೂರು ಜಿಲ್ಲೆಯ ಜೆಡಿಎಸ್‌ ಸಚಿವರು, ಶಾಸಕರು, ಮಾಜಿ ಶಾಸಕರು, ಮುಖಂಡರ ಸಭೆಯಲ್ಲಿ ಅಂತಿಮವಾಗಿ ಅಲ್ಲಿಂದಲೇ ಸ್ಪರ್ಧೆ ಮಾಡಲು ನಿರ್ಧರಿಸಲಾಯಿತು ಎನ್ನಲಾಗಿದೆ.
ಚುನಾವಣಾಪೂರ್ವ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್​​ ತುಮಕೂರು ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟುಕೊಟ್ಟಿದೆ. ಕಾಂಗ್ರೆಸ್‍ನ ಹಾಲಿ ಸಂಸದರಿದ್ದರೂ ಜೆಡಿಎಸ್‍ಗೆ ಬಿಟ್ಟು ಕೊಟ್ಟಿರುವ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಈಗಾಗಲೇ ಹಾಲಿ ಸಂಸದ ಮುದ್ದಹನುಮೇಗೌಡ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಅಸಮಾಧಾನ ಹೊರಹಾಕಿದ್ದಾರೆ.
ಇನ್ನು ಕಾಂಗ್ರೆಸ್​​ ಸ್ಥಳೀಯ ನಾಯಕರು ನನ್ನ ಮೇಲೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಒತ್ತಡ ಹಾಕುತ್ತಿದ್ದಾರೆ. ಹೀಗಾಗಿ ನಾನು ಸೋಮವಾರ ಅಪಾರ ಬೆಂಬಲಿಗರ ಜತೆಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದೇನೆ. ಬಳಿಕ ನನಗೆ ಕಾಂಗ್ರೆಸ್​-ಜೆಡಿಎಸ್​​ ಮೈತ್ರಿ ನಾಯಕರು ಟಿಕೆಟ್​​ ನೀಡುತ್ತಾರೆಂಬ ಭರವಸೆಯಿದೆ ಎಂದು ಸಂಸದ ಮುದ್ದಹನುಮೇಗೌಡರು ತುಮಕೂರಿನಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com