
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅತಿ ಹೆಚ್ಚು ಜನಸಂಖ್ಯೆವುಳ್ಳ ಗ್ರಾಮಗಳ ಸಮಗ್ರ ಅಭಿವೃದ್ಧಿಗಾಗಿ 150 ಕೋಟಿ ರೂ.ಗಳ ವೆಚ್ಚದಲ್ಲಿ ''ಮುಖ್ಯಮಂತ್ರಿ ಆದರ್ಶ ಗ್ರಾಮ'' ಎಂಬ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಅವರು ಹೇಳಿದ್ದಾರೆ.
ಪರಿಶಿಷ್ಟ ಜಾತಿಯ 100 ಹಾಗೂ ಪರಿಶಿಷ್ಟ ಪಂಗಡದ 50 ಗ್ರಾಮಗಳನ್ನು ಈ ಯೋಜನೆಗೆ ಆಯ್ಕೆ ಮಾಡಿ ತಲಾ ಒಂದು ಕೋಟಿ ರೂ.ವೆಚ್ಚದಲ್ಲಿ ಮೂಲಸೌಲಭ್ಯಗಳನ್ನು ಕಲ್ಪಿಸಿ ಸಮಗ್ರವಾಗಿ ಅಭಿವೃದ್ಧಿಪಡಿಸಿ ಮಾದರಿ ಗ್ರಾಮಗಳನ್ನಾಗಿ ಮಾಡಲಾಗುವುದು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಉಪ ಯೋಜನೆಯಡಿ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಲಭ್ಯವಿರುವ ಅನುದಾನದಲ್ಲಿ ಈ ಯೋಜನೆ ರೂಪಿಸಿ ಜಾರಿಗೊಳಿಸಲಾಗುತ್ತದೆ. ರಸ್ತೆ, ಒಳಚರಂಡಿ, ವಿದ್ಯುತ್, ಸಮುದಾಯ ಭವನ, ಶಾಲಾ ಕಟ್ಟಡದ ರಿಪೇರಿ ಮತ್ತಿತರ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ.
ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಗೆ ಕೇಂದ್ರ ಸರಕಾರವು 40 ಕೋಟಿ ರೂ. ಹಣ ಬಿಡುಗಡೆ ಮಾಡಿದ್ದು ಈ ಯೋಜನೆಗೆ ರಾಜ್ಯ ಸರಕಾರವೂ 40 ಕೋಟಿ ರೂ. ಅನುದಾನ ನೀಡಲಿದೆ. ಕೇಂದ್ರ ಸರಕಾರ ಪ್ರತಿ ಗ್ರಾಮಕ್ಕೆ 20 ಲಕ್ಷ ರೂ.ನೀಡಿದರೆ ರಾಜ್ಯ ಸರಕಾರವೂ 20 ಲಕ್ಷ ನೀಡಲಿದೆ. ಈ ಯೋಜನೆಗೆ ಆಯ್ಕೆಯಾದ ಹಳ್ಳಿಗೆ ಒಟ್ಟು 40 ಲಕ್ಷ ರೂ ಲಭ್ಯವಾಗಲಿದೆ. ಚಿತ್ರದುರ್ಗ, ಕೋಲಾರ, ಮೈಸೂರು, ಚಾಮರಾಜನಗರ ಹಾಗೂ ಕಲಬುರ್ಗಿ ಜಿಲ್ಲೆಗಳ 200 ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ, ಎಂದು ಸಚಿವ ಆಂಜನೇಯ ತಿಳಿಸಿದರು.
Advertisement