ಸರಣಿ ವಿವಾದಗಳಲ್ಲಿ ಕಾಂಗ್ರೆಸ್: ನಾಯಕತ್ವ ಸ್ಥಾನದಿಂದ ಕೆಳಗಿಳಿಯುವರೇ ಸಿದ್ದರಾಮಯ್ಯ?

ರಾಜ್ಯದಲ್ಲಾಗುತ್ತಿರುವ ಬೆಳವಣಿಗೆಗಳು ಕಾಂಗ್ರೆಸ್ ವಿವಾದಗಳ ಸರಣಿಯಲ್ಲಿ ಸಿಲುಕುವಂತೆ ಮಾಡುತ್ತಿದ್ದು, ಈ ಸರಣಿ ವಿವಾದ ಇದೀಗ ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಸ್ಥಾನಕ್ಕೆ...
ಮುಖ್ಯಮಂತ್ರಿ ಸಿದ್ದರಾಮಯ್ಯ (ಸಂಗ್ರಹ ಚಿತ್ರ)
ಮುಖ್ಯಮಂತ್ರಿ ಸಿದ್ದರಾಮಯ್ಯ (ಸಂಗ್ರಹ ಚಿತ್ರ)
Updated on

ಮೈಸೂರು: ರಾಜ್ಯದಲ್ಲಾಗುತ್ತಿರುವ ಬೆಳವಣಿಗೆಗಳು ಕಾಂಗ್ರೆಸ್ ವಿವಾದಗಳ ಸರಣಿಯಲ್ಲಿ ಸಿಲುಕುವಂತೆ ಮಾಡುತ್ತಿದ್ದು, ಈ ಸರಣಿ ವಿವಾದ ಇದೀಗ ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಸ್ಥಾನಕ್ಕೆ ಕುತ್ತು ತರಲಿದೆಯೇ ಎಂಬ ಹಲವು ಅನುಮಾನಗಳು ಮೂಡತೊಡಗಿದೆ.

ಇತ್ತೀಚೆಗಷ್ಟೇ ಡಿವೈಎಸ್ಪಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದ ಅನುಪಮಾ ಶೆಣೈ ಅವರು ಸರ್ಕಾರದ ವಿರುದ್ಧ ಸಿಡಿದೆದ್ದಿದ್ದರು. ಇದಾದ ಕೆಲವೇ ದಿನಗಳಲ್ಲಿ ಚಿಕ್ಕಮಗಳೂರಿನ ಡಿವೈಎಸ್ಪಿ ಕಲ್ಲಪ್ಪ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಮಂಗಳೂರು ಡಿವೈಎಸ್ಪಿ ಗಣಪತಿಯವರು ಆತ್ಮಹತ್ಯೆ ಮಾಡಿಕೊಂಡಿರುವುದು ಸಿದ್ದರಾಮಯ್ಯ ಅವರು ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದೆ.

ಇದರಂತೆ ಸಿದ್ದರಾಮಯ್ಯ ಅವರು ಒತ್ತಡದಲ್ಲಿ ಸಿಲುಕಲು ಮತ್ತೊಂದು ಘಟನೆ ಕೂಡ ಕಾರಣವಾಗಿದೆ ಎನ್ನಬಹುದು. ಇತ್ತೀಚೆಗಷ್ಟೇ ಸಿದ್ದರಾಮಯ್ಯ ಅವರ ಎದುರಿನಲ್ಲೇ ಅವರ ಆಪ್ತ ಗೆಳೆಯ ಮರೀಗೌಡ ಅವರು ಮೈಸೂರು ಜಿಲ್ಲಾಧಿಕಾರಿ ಶಿಖಾ ಅವರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಬೆದರಿಕೆ ಹಾಕಿದ್ದರು. ಘಟನೆ ನಡೆದು ಹಲವು ದಿನಗಳು ಕಳೆದಿದ್ದರೂ ಮರೀಗೌಡ ಅವರನ್ನು ಬಂಧಿಸುವಲ್ಲಿ ಸರ್ಕಾರ ವಿಫವಾಗಿದೆ. ಇದರ ಜೊತೆಗೆ ಲೋಕೊಪಯೋಗಿ ಸಚಿವ ಹೆಚ್. ಸಿ ಮಹದೇವಪ್ಪ ಅವರ ಪುತ್ರ ಸುನೀಲ್ ಬೋಸ್ ಅವರ ವಿರುದ್ಧ ಅಕ್ರಮ ಮರಳು ಸಾಗಾಣಿಕೆ ಆರೋಪ ಕೇಳಿಬಂದಿದೆ. ಪ್ರಕರಣದ ವಿರುದ್ಧ ವಿರೋಧ ಪಕ್ಷಗಳು ಕಿಡಿಕಾರುತ್ತಿದ್ದು, ಹಲವು ವಿರೋಧಗಳನ್ನು ವ್ಯಕ್ತಪಡಿಸುತ್ತಿದೆ.

ಕೆಲ ದಿನಗಳ ಹಿಂದೆ ಸಂಪುಟ ಪುನಾರಚನೆ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ವಪಕ್ಷದಿಂದಲೇ ಹಲವು ವಿರೋಧಗಳು ವ್ಯಕ್ತವಾಗಿದ್ದವು. ಕಾಂಗ್ರೆಸ್ ಪಕ್ಷದ ಶಾಸಕರೇ ಸಿದ್ದರಾಮಯ್ಯ ವಿರುದ್ಧ ಬಂಡಾಯವೆದ್ದಿದ್ದರು. ಈ ವಿಚಾರ ಕಾಂಗ್ರೆಸ್ ಹೈ ಕಮಾಂಡ್ ನಲ್ಲೂ ಬೇಸರವನ್ನುಂಟು ಮಾಡಿತ್ತು.

ತೀರ್ಥಹಳ್ಳಿಯ ನಂದಿತಾ ಪ್ರಕರಣ ಹಾಗೂ ಐಎಎಸ್ ಅಧಿಕಾರಿ ಡಿ.ಕೆ. ರವಿ ಆತ್ಮಹತ್ಯೆ ಪ್ರಕರಣಗಳು ಕಳೆದ ಬಾರಿ ನಡೆದ ಅಧಿವೇಶನವನ್ನು ಸಂಪೂರ್ಣವಾಗಿ ಹಾಳಾಗುವಂತೆ ಮಾಡಿತ್ತು. ಇದಕ್ಕೆ ಪುಷ್ಟಿ ನೀಡುವಂತೆ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಇದೀಗ ಕೆ.ಜೆ. ಜಾರ್ಜ್ ಹಾಗೂ ಇನ್ನಿತರೆ ಹಿರಿಯ ಅಧಿಕಾರಿಗಳ ಹೆಸರುಗಳು ಕೇಳಿಬಂದಿದೆ. ಜಾರ್ಜ್ ರಾಜೀನಾಮೆ ನೀಡುವಂತೆ ಕೂಡ ಬಿಜೆಪಿ ನಾಯಕರು ಪಟ್ಟುಹಿಡಿದಿದ್ದಾರೆ. ಸರ್ಕಾರ ಅಧಿಕಾರಿಗಳ ಪರವಾಗಿ ನಿಂತು ಪ್ರಾಮಾಣಿಕ ಅಧಿಕಾರಿಗಳಿಗೆ ಮೋಸ ಮಾಡುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿದೆ.

ಇಷ್ಟೆಲ್ಲಾ ಬೆಳವಣಿಗೆಗಳು ರಾಜ್ಯದಲ್ಲಿ ನಡೆಯುತ್ತಿದ್ದರೂ ಸಿದ್ದರಾಮಯ್ಯ ಅವರ ಸರ್ಕಾರ ಮಾತ್ರ ರಾಜ್ಯ ಅಭಿವೃದ್ಧಿ ಪಥದತ್ತ ಸಾಗುತ್ತಿದ್ದು, ಈಗಾಗಲೇ ಸಾಮಾಜಿಕ ಕ್ಷೇತ್ರದಲ್ಲಿ ಸಾಕಷ್ಟು ಉತ್ತಮ ಕೆಲಸಗಳನ್ನು ಮಾಡಲಾಗುತ್ತಿದೆ ಎಂದು ಹೇಳುತ್ತಿದೆ.

2018 ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅಧಿಕಾರ ನಡೆಸುವಂತೆ ಕಾಂಗ್ರೆಸ್ ಹಿರಿಯ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಹಿಂದೆಯೇ ಸೂಚನೆ ನೀಡಿದ್ದರು. ಇದೀಗ ರಾಜ್ಯದಲ್ಲಾಗುತ್ತಿರುವ ಬೆಳವಣಿಗೆ ಕುರಿತು ಕಾಂಗ್ರೆಸ್ ಹೈ ಕಮಾಂಡ್ ಮುಂದೆ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com