

ಬೆಂಗಳೂರು: ಜಾರಿಗೆ ತಂದಿರುವ ಯೋಜನೆಗೆ ಕೇಂದ್ರ ಸರ್ಕಾರ ಸೂಕ್ತ ಸಮಯಕ್ಕೆ, ಸೂಕ್ತ ರೀತಿಯಲ್ಲಿ ಹಣವನ್ನು ಬಿಡುಗಡೆ ಮಾಡಬೇಕೆಂದು ರಾಜ್ಯ ಸರ್ಕಾರ ಹೇಳಿದೆ.
ದೆಹಲಿಯಲ್ಲಿ ನಡೆದ 11ನೇ ಇಂಟರ್ ಸ್ಟೇಟ್ ಕೌನ್ಸಿಲ್ (ಅಂತರ್ ರಾಜ್ಯ ಸಭೆ)ಯಲ್ಲಿ ಮುಖ್ಯಮಂತ್ರಿ ಪರವಾಗಿ ಪಾಲ್ಗೊಂಡಿದ್ದ ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ್ ಅವರು ಭಾಗಿಯಾಗಿದ್ದರು.
ಸಭೆಯಲ್ಲಿ ಮಾತನಾಡಿರುವ ಪರಮೇಶ್ವರ್ ಅವರು, ಕೇಂದ್ರದಲ್ಲಿ ಜಾರಿಗೆ ತಂದಿರುವ ಯೋಜನೆಗಳಲ್ಲಿ ರಾಜ್ಯ ಸರ್ಕಾರ ಭಾಗಿಯಾಗಿದ್ದರೂ ಯೋಜನೆಗಳ ಸಂಪೂರ್ಣ ಜವಾಬ್ದಾರಿಯನ್ನು ಕೇಂದ್ರ ಸರ್ಕಾರ ಹೊತ್ತುಕೊಳ್ಳಬೇಕು. ಕೇಂದ್ರ ಜಾರಿಗೆ ತಂದಿರುವ ಶಿಕ್ಷಣ ಹಕ್ಕು (ಆರ್ ಟಿಇ) ಮತ್ತು ಮನ್ರೇಗಾ ಯೋಜನೆಗಳಲ್ಲಿ ರಾಜ್ಯ ಸರ್ಕಾರ ಸಮಸ್ಯೆಗಳನ್ನು ಎದುರಿಸುತ್ತಿದೆ. ಯೋಜನೆಗಳಿಗೆ ಕೇಂದ್ರ ಹಣವನ್ನು ಸರಿಯಾದ ರೀತಿಯಲ್ಲಿ, ಸರಿಯಾದ ಸಮಯಕ್ಕೆ ಸೂಕ್ತ ರೀತಿಯಲ್ಲಿ ಬಿಡುಗಡೆ ಮಾಡುತ್ತಿಲ್ಲ. ಇದು ದೊಡ್ಡ ಸಮಸ್ಯೆಯಾಗಿದೆ ಎಂದು ಹೇಳಿದ್ದಾರೆ.