ಮರೀಗೌಡ ವಿರುದ್ಧ ಯಾವುದೇ ಬಾಕಿ ಪ್ರಕರಣಗಳಿಲ್ಲ: ಎಸ್'ಪಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಸ್ನೇಹಿತ ಮರೀಗೌಡ ಅವರ ವಿರುದ್ಧ ಯಾವುದೇ ರೀತಿಯ ಬಾಕಿ ಪ್ರಕರಣಗಳಿಲ್ಲ ಎಂದು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಖರೆ ಅವರು...
ಮರೀಗೌಡ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ
ಮರೀಗೌಡ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಸ್ನೇಹಿತ ಮರೀಗೌಡ ಅವರ ವಿರುದ್ಧ ಯಾವುದೇ ರೀತಿಯ ಬಾಕಿ ಪ್ರಕರಣಗಳಿಲ್ಲ ಎಂದು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಖರೆ ಅವರು ಸೋಮವಾರ ಹೇಳಿದ್ದಾರೆ.

ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಬೆದರಿಕೆ ಹಾಕಿದ ಪ್ರಕರಣ ಸೇರಿ ಹಲವು ಪ್ರಕರಣಗಳು ಮರೀಗೌಡ ಅವರ ಮೇಲಿದೆ ಎಂಬ ಆರೋಪಗಳು ಕೇಳಿಬಂದಿದ್ದವು.

ಮರೀಗೌಡ ವಿರುದ್ಧ ಜಯಪುರ ಮತ್ತು ಮೈಸೂರು ಗ್ರಾಮಾಂತರ ಠಾಣೆಯಲ್ಲಿ 10 ಪ್ರಕರಣಗಳು ದಾಖಲಾಗಿದ್ದವು. 2007ರಲ್ಲಿ ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಆಸ್ಪತ್ರೆ ಉದ್ಘಾಟನಾ ಸಮಾರಂಭಕ್ಕೆ ಅಂದಿನ ಶಾಸಕರಾಗಿದ್ದ ಸಿದ್ದರಾಮಯ್ಯ ಅವರಿಗೇ ಆಹ್ವಾನ ನೀಡದ ಕಾರಣ ಸಿದ್ದರಾಮಯ್ಯ ಅವರ ಅಭಿಮಾನಿಗಳು ಸರ್ಕಾರಿ ಬಸ್ ಗಳಿಗೆ ಕಲ್ಲು ತೂರಾಟ ನಡೆಸಿದ್ದರು. ಈ ಪ್ರಕರಣದಲ್ಲಿ ಮರೀಗೌಡ ವಿರುದ್ಧ ಸೆಕ್ಷನ್ 144 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಬಂಧನಕ್ಕೊಳಪಡಿಸಲಾಗಿತ್ತು. ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಹೆಸರು ಕೂಡ ಕೇಳಿಬಂದಿತ್ತು.

ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿತ್ತು. ನಂತರ 2009ರಲ್ಲಿ ಜಯಪುರ ಠಾಣೆಯ 5 ಹಾಗೂ ಗ್ರಾಮಾಂತರ ಠಾಣೆಯ 1 ಪ್ರಕರಣವನ್ನು ಸರ್ಕಾರ ಹಿಂಪಡೆಯಿತು. 4 ಪ್ರಕರಣಗಳಲ್ಲಿ ಸಿ ವರದಿಯನ್ನು ಸಲ್ಲಿಸಲಾಗಿತ್ತು. ಈ ಎಲ್ಲಾ ಪ್ರಕರಣಗಳ ಕುರಿತು ಸರ್ಕಾರಿ ಅಭಿಯೋಜಕರು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದರು. ಇದರ ಆಧಾರದ ಮೇಲೆಯೇ ಸಿ ರಿಪೋರ್ಟ್ ನ್ನು ಹಾಕಲಾಗಿತ್ತು. ಇದರ ಅರ್ಥ ಪ್ರಕರಣ ತಪ್ಪಾಗಿ ದಾಖಲಿಸಲಾಗಿದ್ದು, ದುರುದ್ದೇಶಪೂರ್ವಕವಾಗಿ ದಾಖಲಿಸಲಾಗಿದೆ ಎಂಬುದನ್ನು ಸಾಬೀತುಪಡಿಸಿತ್ತು. ಇದರಂತೆ ಎಲ್ಲಾ ಪ್ರಕರಣಗಳು ಇತ್ಯರ್ಥವಾಗಿದ್ದೂ, ಯಾವುದೇ ಪ್ರಕರಣಗಳು ಬಾಕಿ ಉಳಿದಿಲ್ಲ ಎಂದು ಖರೆ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com