ಡಿಸಿಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ: ಹಾಸ್ಟೆಲ್, ಶಾಲೆ ನಿರ್ಮಾಣಕ್ಕೆ ಭೂಮಿ ನೀಡುವಂತೆ ಸೂಚನೆ
ಬೆಂಗಳೂರು: ಅಭಿವೃದ್ಧಿ ಕಾರ್ಯಗಳಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಜಿಲ್ಲಾಧಿಕಾರಿಗಳ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಿಡಿಕಾರಿದ್ದು, ಹಾಸ್ಟೆಲ್ ಹಾಗೂ ಶಾಲೆಗಳ ನಿರ್ಮಾಣ ಕಾರ್ಯಕ್ಕೆ ಭೂಮಿ ನೀಡುವಂತೆ ಮಂಗಳವಾರ ಸೂಚನೆ ನೀಡಿದ್ದಾರೆ.
ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳೊಂದಿಗೆ ಎರಡನೇ ದಿನದ ಸಭೆ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಭೆ ವೇಳೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಮೊರಾರ್ಜಿ ದೇಸಾಯಿ ಶಾಲೆಗಳ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ನಿರ್ಮಾಣ ಮಾಡಲು ಮೂರು ತಿಂಗಳೊಳಗಾಗಿ ಸಮಾಜ ಕಲ್ಯಾಣ ಇಲಾಖೆಗೆ ಭೂಮಿ ನೀಡುವಂತೆ ಸಭೆ ವೇಳೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಅಭಿವೃದ್ಧಿ ಕಾರ್ಯಗಳಲ್ಲಿ ಅಧಿಕಾರಿಗಳು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ. ಈ ಕುರಿತಂತೆ ಪರಿಶೀಲನೆ ನಡೆಸಲು ಮತ್ತೆ ನವೆಂಬರ್ ತಿಂಗಳಲ್ಲಿ ಮತ್ತೊಂದು ಸುತ್ತಿನ ಸಭೆ ಏರ್ಪಡಿಸುತ್ತಿದ್ದು, ಸಭೆ ವೇಳೆ ಯಾವುದೇ ರೀತಿಯ ಬೆಳವಣಿಗೆಗಳು ಕಂಡು ಬರದಿದ್ದರಲ್ಲಿ, ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಇದೇ ವೇಳೆ ಅರಣ್ಯ ಹಕ್ಕು ಕಾಯ್ದೆಯಡಿ ವಿಲೇವಾರಿಯಾಗದೆ ಉಳಿದಿರುವ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವ ಅವರು, ತಿರಸ್ಕರಿಸಿರುವ ಅರ್ಜಿಗಳನ್ನು ಮರುಪರಿಶೀಲನೆ ಮಾಡುವಂತೆ ತಿಳಿಸಿದ್ದಾರೆ. ಅರಣ್ಯ ಹಕ್ಕು ಕಾಯ್ದೆಯಡಿ ಅರ್ಜಿಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡುವಂತೆಯೂ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ