

ಬೆಂಗಳೂರು: ದುಬಾರಿ ವಾಚ್ ವಿವಾದ ಪ್ರಕರಣ ಮುಕ್ತಾಯಗೊಳ್ಳುತ್ತಿದ್ದಂತೆಯೇ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಫೋನ್ ಕದ್ದಾಲಿಕೆ ಆರೋಪ ಕೇಳಿಬಂದಿದೆ.
ವಿಧಾನಸಭೆಯಲ್ಲಿ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಈ ಆರೋಪ ಮಾಡಿದ್ದು ತಮ್ಮ ಫೋನ್ ನನ್ನು ಸಿದ್ದರಾಮಯ್ಯ ಸರ್ಕಾರ ಕದ್ದಾಲಿಸುತ್ತಿದೆ ಎಂದು ಆರೋಪ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ದುಬಾರಿ ವಾಚ್ ನ ಮೂಲವನ್ನು ಪತ್ತೆ ಹಚ್ಚಲು ಪ್ರಾರಂಭಿಸಿದ ಬಳಿಕ ಕದ್ದಾಲಿಕೆ ನಡೆಸಲಾಗುತ್ತಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.
ಇನ್ನು ವಿರೋಧಪಕ್ಷದ ನಾಯಕ ಜಗದೀಶ್ ಶೆಟ್ಟರ್ ಕೂಡ ಸರ್ಕಾರದ ವಿರುದ್ಧ ದೂರವಾಣಿ ಕದ್ದಾಲಿಕೆ ಆರೋಪ ಮಾಡಿದ್ದಾರೆ. ತಮ್ಮ ದೂರವಾಣಿಯನ್ನೂ ಸೇರಿದಂತೆ ಹಲವು ವಿಪಕ್ಷ ನಾಯಕರ ದೂರವಾಣಿಯನ್ನು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಕದ್ದಾಲಿಸುತ್ತಿದೆ ಎಂದು ಹೇಳಿದ್ದಾರೆ. ಈ ಬಗ್ಗೆ ಪಕ್ಷದ ಶಾಸಕರು, ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರೊಂದಿಗೆ ಚರ್ಚೆ ನಡೆಸಿದ ಬಳಿಕ ಮುಂದಿನ ಕ್ರಮ ಕೈಗೊಳ್ಳುವುದಾಗಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.