ಬೆಂಗಳೂರು: ಕೇಂದ್ರ ಸರ್ಕಾರದ ವಿದ್ಯುತ್ ಪೂರೈಕೆ ಆಫರ್ ಅನ್ನು ರಾಜ್ಯ ಸರ್ಕಾರ ತಿರಸ್ಕರಿಸಿದೆ.
ಈ ಕುರಿತು ಪತ್ರಕರ್ತರೊಂದಿಗೆ ಮಾತನಾಡಿದ ಇಂಧನ ಸಚಿವ ಡಿಕೆ ಶಿವಕುಮಾರ್, ಹೆಚ್ಚಿನ ಬೆಲೆಗೆ ಕೇಂದ್ರ ಸರ್ಕಾರ 319 ಮೆಗಾವ್ಯಾಟ್ ವಿದ್ಯುತ್ ಪೂರೈಕೆ ಮಾಡಲು ಮುಂದೆ ಬಂದಿದೆ. ಹಾಗಾಗಿ, ಕೇಂದ್ರ ಸರ್ಕಾರದ ಕೊಡುಗೆಯನ್ನು ನಾವು ಸ್ವೀಕರಿಸುತ್ತಿಲ್ಲ ಎಂದು ಹೇಳಿದ್ದಾರೆ.
ಈಗಾಗಲೇ ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಅನ್ನು ಕಡಿಮೆ ದರದಲ್ಲಿ ಖರೀದಿಸಲಾಗುತ್ತಿದೆ. ಕೇಂದ್ರಕ್ಕೆ ಹೆಚ್ಚು ಬೆಲೆ ನೀಡಿ ವಿದ್ಯುತ್ ಖರೀದಿಸಿದಾಗ, ಸಕ್ಕರೆ ಕಾರ್ಖಾನೆ ಮಾಲೀಕರು ಹೆಚ್ಚು ಬೆಲೆ ಕೇಳುತ್ತಾರೆ. ಇದರಿಂದ ರಾಜ್ಯ ಸರ್ಕಾರಕ್ಕೆ ಮತ್ತಷ್ಟು ನಷ್ಟ ಉಂಟಾಗುತ್ತದೆ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ವಿದ್ಯುತ್ ಪೂರೈಕೆಯನ್ನು ನಾವು ತಿರಸ್ಕರಿಸಿದ್ದೇವೆ ಎಂದು ಡಿಕೆ ಶಿವಕುಮಾರ್ ಸ್ಪಷ್ಟನೇ ನೀಡಿದ್ದಾರೆ.
ಗ್ರಾಮೀಣ ಪ್ರದೇಶಗಳಲ್ಲಿ ನಿರಂತರವಾಗಿ 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಲು ಸರ್ಕಾರ ಪ್ರಯತ್ನಿಸುತ್ತಿದೆ. ಸರ್ಕಾರ ಈಗಾಗಲೇ ಖಾಸಗಿ ವಲಯದಿಂದ ವಿದ್ಯುತ್ ಖರೀದಿಸುತ್ತಿದೆ ಎಂದು ಅವರು ತಿಳಿಸಿದ್ದಾರೆ.