ರಾಜ್ಯ

ಬೆಂಗಳೂರಿನ 35 ವಿದ್ಯಾರ್ಥಿಗಳು ಎಸ್ಎಸ್ಎಲ್ ಸಿ ಪರೀಕ್ಷೆಯಿಂದ ವಂಚಿತ

ಖಾಸಗಿ ಶಾಲೆಯ ಯಡವಟ್ಟಿನಿಂದಾಗಿ ಬೆಂಗಳೂರಿನ 35 ವಿದ್ಯಾರ್ಥಿಗಳು ಇಂದಿನಿಂದ ಆರಂಭವಾಗಿರುವ ಎಸ್ಎಸ್ಎಲ್ ಸಿ...

ಬೆಂಗಳೂರಿನ 35 ವಿದ್ಯಾರ್ಥಿಗಳು ಎಸ್ಎಸ್ಎಲ್ ಸಿ ಪರೀಕ್ಷೆಯಿಂದ ವಂಚಿತ
ಸಾಂದರ್ಭಿಕ ಚಿತ್ರ
Published On :
ಬೆಂಗಳೂರು: ಖಾಸಗಿ ಶಾಲೆಯ ಯಡವಟ್ಟಿನಿಂದಾಗಿ ಬೆಂಗಳೂರಿನ 35 ವಿದ್ಯಾರ್ಥಿಗಳು ಇಂದಿನಿಂದ ಆರಂಭವಾಗಿರುವ ಎಸ್ಎಸ್ಎಲ್ ಸಿ ಪರೀಕ್ಷೆಯಿಂದ ವಂಚಿತರಾಗಿದ್ದಾರೆ.
ಬೆಂಗಳೂರಿನ ಸಾರಾಯಿಪಾಳ್ಯದಲ್ಲಿರುವ ವಿವೇಕಾನಂದ ಶಾಲೆಯ ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಪ್ರವೇಶ ಪತ್ರ ನೀಡದ ಹಿನ್ನೆಲೆಯಲ್ಲಿ 35 ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆ ಬರೆಯುವ ಅವಕಾಶ ಕಳೆದುಕೊಂಡಿದ್ದಾರೆ.
ಇಂದು ಬೆಳಗ್ಗೆ ಪ್ರವೇಶ ಪತ್ರ ಪಡೆದುಕೊಳ್ಳಲು ವಿದ್ಯಾರ್ಥಿಗಳಿಗೆ ಶಾಲೆಯ ಬಳಿ ತೆರಳಿದ್ದರು.ಆದರೆ ಈ ಶಾಲೆ ಶಿಕ್ಷಣ ಇಲಾಖೆಯಿಂದ ಮಾನ್ಯತೆ ಪಡೆಯದ ಹಿನ್ನೆಲೆಯಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ನೀಡಲು ನಿರಾಕರಿಸಿದೆ. ಶಾಲೆಯ ಈ ಯಡವಟ್ಟಿನಿಂದಾಗಿ ಏನೂ ತಪ್ಪು ಮಾಡದ ವಿದ್ಯಾರ್ಥಿಗಳು ಒಂದು ಶೈಕ್ಷಣಿಕ ವರ್ಷವನ್ನೇ ಕಳೆದುಕೊಂಡಿದ್ದಾರೆ.
ಪರೀಕ್ಷೆಗೆ ಪ್ರವೇಶ ಪತ್ರ ನೀಡಲು ಪ್ರಾಚಾರ್ಯರು ಪ್ರತಿ ವಿದ್ಯಾರ್ಥಿಯಿಂದ 5 ಸಾವಿರ ರುಪಾಯಿ ತೆಗೆದುಕೊಂಡಿದ್ದರು. ಇಂದು ಬೆಳಗ್ಗೆಯವರೆಗೂ ಪ್ರವೇಶ ಪತ್ರ ನೀಡುವುದಾಗಿ ಹೇಳುತ್ತಾ ಬಂದಿದ್ದರು. ಆದರೆ ಈಗ ಶಾಲೆ ಮಾನ್ಯತೆ ಪಡೆದಿಲ್ಲ ಅಂತ ಬೋರ್ಡ್ ಪ್ರವೇಶ ಪತ್ರ ನೀಡಿಲ್ಲ ಎಂದು ಹೇಳುತ್ತಿರುವುದಾಗಿ ಪರೀಕ್ಷೆಯಿಂದ ವಂಚಿತನಾದ ವಿದ್ಯಾರ್ಥಿಯೊಬ್ಬ ತಿಳಿಸಿದ್ದಾರೆ.
'ಇದು ನಮ್ಮ ತಪ್ಪಲ್ಲ. ಆದರೂ ನಾವು ಒಂದು ಮಹತ್ವದ ಶೈಕ್ಷಣಿಕ ವರ್ಷವನ್ನು ಕಳೆದುಕೊಳ್ಳುತ್ತಿದ್ದೇವೆ. ದಯವಿಟ್ಟು ಸರ್ಕಾರ ನಮಗೆ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು' ಎಂದು ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ.
ಇನ್ನು ಶಾಲಾ ಆಡಳಿತ ಮಂಡಳಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ವಿದ್ಯಾರ್ಥಿಗಳು ಹಾಗೂ ಪೋಷಕರು ಶಾಲೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.