ಈ ಸಂಬಂಧ ಇಂದು ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ನಗರ ಪೊಲೀಸ್ ಆಯುಕ್ತ ಎನ್.ಎಸ್.ಮೇಘರಿಕ್ ಅವರು, ಏಪ್ರಿಲ್ 23ರಂದು ಕತ್ರಿಗುಪ್ಪೆಯಲ್ಲಿ ರಾತ್ರಿ 9.40ರ ಸುಮಾರಿಗೆ ಯುವತಿಯೊಬ್ಬರನ್ನು ದುಷ್ಕರ್ಮಿ ಎತ್ತಿಕೊಂಡು ಹೋಗಿ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಅಂದೇ ಸ್ಥಳೀಯ ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು ದೂರು ನೀಡುವಂತೆ ಯುವತಿಗೆ ಹಾಗೂ ಪಿಜಿ ಮಾಲೀಕರಿಗೆ ಪೊಲೀಸರು ಸೂಚಿಸಿದ್ದರು. ಆದರೆ ಇಬ್ಬರೂ ದೂರು ನೀಡಲು ಹಿಂಜರಿದಿದ್ದರು. ಇಂತಹ ಪ್ರಕರಣಗಳಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲು ಬರುವುದಿಲ್ಲ. ಹೀಗಾಗಿ ಕ್ರಮ ಕೈಗೊಳ್ಳಲು ಸಾಧ್ಯವಾಗಿಲ್ಲ ಎಂದಿದ್ದಾರೆ. ಅಲ್ಲದೆ ಈ ಪ್ರಕರಣದಲ್ಲಿ ಪೊಲೀಸರು ನಿರ್ಲಕ್ಷ್ಯ ವಹಿಸಿಲ್ಲ ಎಂದು ಪೊಲೀಸ್ ಆಯುಕ್ತರು ಸ್ಪಷ್ಟಪಡಿಸಿದ್ದಾರೆ.