

ಬೆಂಗಳೂರು: ಚುನಾವಣೆ ವೇಳೆ ಸೀರೆ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಜಗಳಕ್ಕೆ ಸಂಬಂಧ ಪಟ್ಟಂತೆ 10 ತಿಂಗಳ ಬಳಿಕ ಮೇಯರ್ ಬಿ.ಎನ್. ಮಂಜುನಾಥ್ ರೆಡ್ಡಿ ವಿರುದ್ಧ ಜಾತಿ ನಿಂದನೆ ಮತ್ತು ಕೊಲೆ ಬೆದರಿಕೆ ಪ್ರಕರಣ ದಾಖಲಾಗಿದೆ.
ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಸಿಟಿ ಸಿವಿಲ್ ಕೋರ್ಟ್ ನಿರ್ದೇಶನದ ಮೇರೆಗೆ ಮೈಕೊ ಲೇಔಟ್ ಪೊಲೀಸ್ ಠಾಣೆಯಲ್ಲಿ ಜಾತಿ ನಿಂದನೆ ಪ್ರಕರಣ ದಾಖಲಾಗಿದ್ದು, ಸೀರೆ ವ್ಯಾಪಾರಿ ಪಾಪಣ್ಣ ಎಂಬುವವರು ದೂರು ದಾಖಲಿಸಿದ್ದಾರೆ. 2015ರ ಆಗಸ್ಟ್ 17ರಂದು ಚುನಾವಣೆ ಸಂದರ್ಭದಲ್ಲಿ ಮೇಯರ್ ಮಂಜುನಾಥರೆಡ್ಡಿ ಹಾಗೂ ಅವರ ಬೆಂಬಲಿಗರು ತಮ್ಮ ಮೇಲೆ ಹಲ್ಲೆ ನಡೆಸಿದ್ದರು. ಈ ವೇಳೆ ನನ್ನ ಸಹಾಯಕ್ಕೆ ಬಂದ ಸ್ನೇಹಿತ ಮುರುಗನ್ ಮೇಲೂ ಅವರ ಮಂಜುನಾಥ್ ರೆಡ್ಡಿ ಬೆಂಬಲಿಗರು ಹಲ್ಲೆ ಮಾಡಿದ್ದರು. ಅದೇ ದಿನ ಮೈಕೋ ಲೇಔಟ್ ಠಾಣೆಗೆ ಹೋಗಿ ದೂರು ಕೊಟ್ಟಿದ್ದೆವು. ಆದರೆ, ಪೊಲೀಸರು ದೂರು ಸ್ವೀಕರಿಸಲು ನಿರಾಕರಿಸಿದರು ಎಂದು ಸೀರೆ ವ್ಯಾಪಾರಿ ಪಾಪಣ್ಣ ದೂರಿನಲ್ಲಿ ಆರೋಪಿಸಿದ್ದಾರೆ.
ಪೊಲೀಸರು ದೂರು ಸ್ವೀಕರಿಸಲು ನಿರಾಕರಿಸಿದ ಹಿನ್ನಲೆಯಲ್ಲಿ ಅನಿವಾರ್ಯವಾಗಿ ನ್ಯಾಯಾಲಯದ ಮೊರೆ ಹೋದೆವು ಎಂದು ಪಾಪಣ್ಣ ಹೇಳಿದ್ದಾರೆ. ಪಾಪಣ್ಣ ಸಲ್ಲಿಸಿದ ಪ್ರಕರಣದ ವಿಚಾರಣೆ ನಡೆಸಿದ 2ನೇ ಸಿಟಿ ಸಿವಿಲ್ ಕೋರ್ಟ್ ನ್ಯಾಯಾಧಿಶರು, ದೂರು ದಾಖಲಿಸಿಕೊಂಡು ತನಿಖೆ ನಡೆಸಿ ವರದಿ ನೀಡುವಂತೆ ಮೈಕೋಲೇಔಟ್ ಠಾಣೆ ಪೊಲೀಸರಿಗೆ ನಿರ್ದೇಶಿಸಿದ ಹಿನ್ನೆಲೆಯಲ್ಲಿ ಸೋಮವಾರ ಕೇಸ್ ದಾಖಲಾಗಿದೆ. ಕೋರ್ಟ್ ಆದೇಶದ ಅನ್ವಯ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ. ಘಟನೆಯ ಸತ್ಯಾಸತ್ಯತೆ ಪರಿಶೀಲಿಸಿದ ನಂತರ ವರದಿ ತಯಾರಿಸಿ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಏನಿದು ಪ್ರಕರಣ?
ಬಿಬಿಎಂಪಿ ಚುನಾವಣೆ ಸಂದರ್ಭದಲ್ಲಿ ಸೀರೆ ಹಂಚಿಕೆ ಮಾಡುತ್ತಿದ್ದಾರೆ ಎಂಬ ಆರೋಪದ ಮೇಲೆ 2015ರ ಆಗಸ್ಟ್ 17ರಂದು ಬಿಟಿಎಂ ಲೇಔಟ್‌ನಲ್ಲಿ ಕಾರಿನಲ್ಲಿ ಕುಳಿತಿದ್ದ ಸೀರೆ ವ್ಯಾಪಾರಿ ಪಾಪಣ್ಣ ಹಾಗೂ ಅವರ ಸ್ನೇಹಿತ ಮುರುಗನ್ ಮೇಲೆ ಆಗಿನ ಕೌನ್ಸಿಲರ್ ಆಗಿದ್ದ ಬಿ.ಎನ್. ಮಂಜುನಾಥ್ ರೆಡ್ಡಿ ಹಾಗೂ ಅವರ ಬೆಂಬಲಿಗರು ಹಲ್ಲೆ ನಡೆಸಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.