
ಬೆಂಗಳೂರು: ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಹಗರಣ ಸಂಬಂಧ ಪ್ರಮುಖ ಆರೋಪಿಯಾಗಿರುವ ನಿವೃತ್ತ ನ್ಯಾಯಮೂರ್ತಿ ವೈ ಭಾಸ್ಕರ್ ರಾವ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.
ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಹಗರಣ ಸಂಬಂಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ ಅಧಿಕಾರಿಗಳು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದ ಚಾರ್ಚ್ ಶೀಟ್ ಅನ್ನು ರದ್ದುಗೊಳಿಸಬೇಕು ಎಂದು ಕೋರಿ ರಾವ್ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಇಂದಿಗೆ ತೀರ್ಪು ಮುಂದೂಡಿತ್ತು. ಅದರಂತೆ ನ್ಯಾಯಾಲಯ ತೀರ್ಪು ನೀಡಿದ್ದು, ವೈ ಭಾಸ್ಕರ್ ರಾವ್ ಅವರ ಪರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ ನ್ಯಾ.ಆನಂದ ಬೈರಾರೆಡ್ಡಿ ಅವರಿದ್ದ ಏಕಸದಸ್ಯಪೀಠ ವಜಾಗೊಳಿಸಿ ತೀರ್ಪು ನೀಡಿದ್ದಾರೆ. ಆ ಮೂಲಕ ಭಾಸ್ಕರ್ ರಾವ್ ಅವರು ಮತ್ತೆ ಸಂಕಷ್ಟಕ್ಕೆ ಸಿಲುಕಿದಂತಾಗಿದೆ.
ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ನಿವೃತ್ತ ನ್ಯಾಯಮೂರ್ತಿ ವೈ.ಭಾಸ್ಕರರಾವ್ ತಮ್ಮ ವಿರುದ್ಧ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಲ್ಲಿಸಿರುವ ಹೆಚ್ಚುವರಿ ದೋಷಾರೋಪ ಪಟ್ಟಿ ರದ್ದುಗೊಳಿಸಬೇಕು ಎಂದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದ ವಿಚಾರಣೆಗೆ ಹಾಜರಾಗದೇ ಭಾಸ್ಕರ ರಾವ್ ಹೈಕೋರ್ಟ್ ಮೆಟ್ಟಿಲೇರಿದ್ದರು.
Advertisement