
ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು ಸಲ್ಲಿಸಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ರಾಜಭವನಕ್ಕೆ ಭೇಟಿ ನೀಡಿದ ಬಿಜೆಪಿ ನಿಯೋಗ, ರಾಜ್ಯಪಾಲ ವಜುಭಾಯಿ ವಾಲಾರನ್ನು ಭೇಟಿ ಮಾಡಿ ದೂರು ನೀಡಿತು. ರಾಜ್ಯದಲ್ಲಿ ಇತ್ತೀಚೆಗೆ ನಡೆದಿರುವ ಹತ್ಯೆ ಘಟನೆಗಳು, ಗಲಭೆಗಳ ಕುರಿತು ರಾಜ್ಯಪಾಲರಿಗೆ ಮಾಹಿತಿ ನೀಡಿತು.
ವಿಶೇಷವಾಗಿ ಆರ್‌ಎಸ್‌ಎಸ್ ಕಾರ್ಯಕರ್ತ ರುದ್ರೇಶ್ ಹತ್ಯೆ ಪ್ರಕರಣವನ್ನು ಪ್ರಸ್ತಾಪಿಸಿ ಆರೋಪಿಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ದೂರು ಸಲ್ಲಿಕೆ ಮಾಡಿದರು. ಕೂಡಲೇ ರುದ್ರೇಶ್ ಹಂತಕರ ಬಂಧನಕ್ಕೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಮನವಿ ಮಾಡಿದರು.
ಇನ್ನೂ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕೆಂದು ಕೇಂದ್ರ ಗೃಹ ಸಚಿವ ರಾಜ್ ನಾಥ್ ಸಿಂಗ್ ಅವರಿಗೆ ಶಾಸಕ ಸಿ.ಟಿ ರವಿ ಪತ್ರ ಬರೆದಿದ್ದಾರೆ. ರಾಜ್ಯ ಪೊಲೀಸರು ಭಯದಿಂದಾಗಿ ರುದ್ರೇಶ್ ಹತ್ಯೆಗೆ ಕೌಟುಂಬಿಕ ಕಲಹ ಕರಾಣ ಎಂದು ಹೇಳುವ ಮೂಲಕ ಪ್ರಕರಣದ ದಿಕ್ಕು ತಪ್ಪಿಸಲು ಯತ್ನಿಸುತ್ತಿದ್ದಾರೆ. ಕೇಂದ್ರ ಗೃಹ ಇಲಾಖೆ ಕೆಲ ಇಸ್ಲಾಮಿಕ್ ಸಂಘಟನೆಗಳನ್ನು ನಿಷೇಧಿಸಿದ್ದರಿಂದ ಕುಪಿತಗೊಂಡವರು ಈ ರೀತಿ ಕೊಲೆಗಳನ್ನು ಮಾಡುತ್ತಿದ್ದಾರೆ ಎಂದು ಸಿ,ಟಿ ರವಿ ಆರೋಪಿಸಿದ್ದಾರೆ.
Advertisement