

ಬೆಂಗಳೂರು: ನಿಗಮ-ಮಂಡಳಿ ನೇಮಕಾತಿ ಪ್ರಕ್ರಿಯೆಯನ್ನು ಅಂತಿಮಗೊಳಿಸುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಅವರು ಶುಕ್ರವಾರ ನವದೆಹಲಿಗೆ ಭೇಟಿ ನೀಡಲಿದ್ದಾರೆ.
100ಕ್ಕೂ ಹೆಚ್ಚು ಪಕ್ಷದ ಕಾರ್ಯಕರ್ತರು ಹಾಗೂ ಹಲವು ಜಿಲ್ಲೆಗಳ ಸ್ಥಳೀಯ ನಾಯಕರು ಅಧಿಕಾರಕ್ಕಾಗಿ ಆಗ್ರಹಿಸುತ್ತಿದ್ದು, ಆಯ್ಕೆ ಪ್ರಕ್ರಿಯೆ ಇದೀಗ ಸಿದ್ದರಾಮಯ್ಯ ಅವರಿಗೆ ತಲೆನೋವಾಗಿ ಪರಿಣಮಿಸಿದೆ.
ಇದಲ್ಲದೆ, 2018ರ ವಿಧಾನಸಭಾ ಚುನಾವಣೆ ಹತ್ತಿರಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಶೀಘ್ರಗತಿಯಲ್ಲಿ ನಿಗಮ-ಮಂಡಳಿ ನೇಮಕಾತಿಯನ್ನು ಪೂರ್ಣಗೊಳಿಸುವ ಸಲುವಾಗಿ ಸಿದ್ದರಾಮಯ್ಯ ಅವರು ದೆಹಲಿಗೆ ಭೇಟಿ ನೀಡುತ್ತಿದ್ದಾರೆ. 2018ರಲ್ಲಿ ಕಾಂಗ್ರೆಸ್'ನ್ನು ಮತ್ತೆ ಅಧಿಕಾರಕ್ಕೆ ತರುವ ಶಕ್ತಿಯಿರುವ ನಾಯಕರನ್ನು ಗಮನದಲ್ಲಿಟ್ಟುಕೊಂಡು ನಿಗಮ-ಮಂಡಳಿಯ ಆಯ್ಕೆ ಪ್ರಕ್ರಿಯೆಯನ್ನು ಮಾಡುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.
ದೆಹಲಿ ಭೇಟಿ ಕುರಿತಂತೆ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಿಗಮ-ಮಂಡಳಿ ಆಯ್ಕೆ ಕುರಿತಂತೆ ಶುಕ್ರವಾರ ದೆಹಲಿಗೆ ಭೇಟಿ ನೀಡುತ್ತಿದ್ದೇನೆ. ಈ ಬಗ್ಗೆ ಪಕ್ಷದ ಹೈ ಕಮಾಂಡ್ ಜೊತೆಗೆ ಚರ್ಚೆ ನಡೆಸಲಿದ್ದೇನೆಂದು ಹೇಳಿದ್ದಾರೆ.
ಸಂಪುಟಕ್ಕೆ ಯೋಗೇಶ್ವರ್ ಸೇರ್ಪಡೆ?
ಇದೇ ವೇಳೆ ಸಚಿವ ಸಂಪುಟಕ್ಕೆ ಯೋಗೇಶ್ವರ್ ಅವರು ಸೇರ್ಪಡೆಗೊಳ್ಳಲಿದ್ದಾರೆಂಬ ಮಾತುಗಳು ಬರುತ್ತಿದ್ದು, ಹೈಕಮಾಂಡ್ ಜೊತೆಗಿನ ಚರ್ಚೆ ವೇಳೆ ಪರಮೇಶ್ವರ್ ಅವರು ಈ ಬಗ್ಗೆ ಮಾತುಕತೆ ನಡೆಸಲಿದ್ದಾರೆಂದು ಹೇಳಲಾಗುತ್ತಿದೆ.