

ಬೆಂಗಳೂರು: ಕೃಷಿ ಬಳಕೆ ಬಿಡಿ, ಪ್ರಸ್ತುತ ರಾಜ್ಯದಲ್ಲಿನ ಜನತೆಗೆ ಕುಡಿಯುವುದಕ್ಕೇ ನೀರಿಲ್ಲ ಎಂದ ಮೇಲೆ ತಮಿಳುನಾಡಿಗೆ ನೀರನ್ನು ಹರಿಸಲು ಹೇಗೆ ಸಾಧ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ ಹೇಳಿದ್ದಾರೆ.
ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಕರ್ನಾಟಕದ ವಿರುದ್ಧ ಸುಪ್ರೀಂ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಸುಪ್ರೀಂಕೋರ್ಟ್ ರಾಜ್ಯದ ಜಲಾಶಯಗಳಲ್ಲಿರುವ ನೀರಿನ ಪ್ರಮಾಣವನ್ನು ಪರಿಶೀಲಿಸುವ ಅಗತ್ಯವಿದೆ. ನೀರಿನ ಮಟ್ಟ ಅಳೆಯಲು ಸುಪ್ರೀಂ ತಜ್ಞರ ಸಮಿತಿಯನ್ನು ಕಳುಹಿಸಬೇಕು. ತಮಿಳುನಾಡಿಗೆ ನೀರು ಬಿಡುಗಡೆ ಮಾಡುವಂತೆ ಆದೇಶ ನೀಡಲಾಗಿದೆ. ಕೃಷಿ ಬಳಕೆ ಬಿಡಿ. ಪ್ರಸ್ತುತ ರಾಜ್ಯದ ಜನತೆಗೆ ಕುಡಿಯುವ ನೀರಿಗೆ ಅಭಾವ ಉಂಟಾಗಿದೆ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಹರಿಸಲು ಹೇಗೆ ಸಾಧ್ಯ ಎಂದು ಹೇಳಿದ್ದಾರೆ.
ನದಿ ನೀರು ಹಂಚಿಕೆ ಕುರಿತಂತೆ ಚರ್ಚೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ 3 ಗಂಟೆಗೆ ಸರ್ವಪಕ್ಷ ಸಭೆಯನ್ನು ಕರೆದಿದ್ದಾರೆ. ಸಭೆಯಲ್ಲಿ ಈ ಬಗ್ಗೆ ಮಾತುಕತೆ ನಡೆಸಲಾಗುತ್ತದೆ. ಚರ್ಚೆ ವೇಳೆ ಜಲಾಶಯಗಳಲ್ಲಿರುವ ವಾಸ್ತವಿಕತೆಯನ್ನು ಸುಪ್ರೀಂಗೆ ಮನವರಿಕೆ ಮಾಡಿಕೊಡುವಂತೆ ಸಿದ್ದರಾಮಯ್ಯ ಅವರ ಬಳಿ ಮನವಿ ಮಾಡಿಕೊಳ್ಳುತ್ತೇವೆಂದು ಹೇಳಿದ್ದಾರೆ.