

ಮಂಡ್ಯ: ತಮಿಳುನಾಡಿಗೆ ನೀರು ಹರಿಸಿದನ್ನು ವಿರೋಧಿಸಿ ಕರ್ನಾಟಕ ರಾಜ್ಯಾದ್ಯಂತ ನಡೆಯುತ್ತಿರುವ ವ್ಯಾಪಕ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಮಂಡ್ಯದಲ್ಲಿ ರೈತರು ಹೆದ್ದಾರಿ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಮಂಡ್ಯದ ಸಂಜಯ್ ವೃತ್ತದಲ್ಲಿ ಸೇರಿರುವ ಸಾವಿರಾರು ಕನ್ನಡಪ ಹೋರಾಟಗಾರರು ಹಾಗೂ ರೈತಪ ಸಂಘಟನೆ ಕಾರ್ಯಕರ್ತರು ತಮಿಳುನಾಡು ಸಿಎಂ ಜಯಲಲಿತಾ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದು, ಜಯಲಲಿತಾ ಪ್ರತಿಕೃತಿ ಧಹಿಸಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದೇ ಆಕ್ರೋಶ ಭರಿತ ರೈತರು ಮಂಡ್ಯ-ಮೈಸೂರು-ಬೆಂಗಳೂರು ಹೆದ್ದಾರಿಯನ್ನು ಬಂದ್ ಮಾಡಿದ್ದು, ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಇನ್ನು ಮುಂಜಾನೆ ಹೆದ್ದಾರಿ ಮೂಲಕ ಹಾದು ಹೋಗುತ್ತಿದ್ದ ತಮಿಳುನಾಡು ಲಾರಿಗಳ ಮೇಲೆ ಕಲ್ಲು ತೂರಾಟ ಮಾಡಲಾಗಿದೆ.
ಶಾಲಾ-ಕಾಲೇಜುಗಳಿಗೆ ರಜೆ ಮುಂದುವರಿಕೆ ಸಾಧ್ಯತೆ
ಇದೇ ವೇಳೆ ರೈತರ ಮುಷ್ಕರ ಹಾಗೂ ಪ್ರತಿಭಟನೆಯ ಹಿನ್ನಲೆಯಲ್ಲಿ ಮಂಡ್ಯದಲ್ಲಿ ಈ ಹಿಂದೆ ಘೋಷಣೆ ಮಾಡಲಾಗಿದ್ದ ರಜೆಯನ್ನು ವಿಸ್ತರಣೆ ಮಾಡುವ ಸಾಧ್ಯತೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಮತ್ತೆರೆಡು ದಿನಗಳ ಕಾಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಈ ವರೆಗೂ ಯಾವುದೇ ಅಧಿಕೃತ ಘೋಷಣೆ ಹೊರಬಿದ್ದಿಲ್ಲ.