
ಬೆಂಗಳೂರು: ಕಾವೇರಿ ವಿವಾದ ಕುರಿತಂತೆ ಕರ್ನಾಟಕದ ಸರ್ಕಾರ ಪರ ವಕೀಲ ಫಾಲಿ ನಾರೀಮನ್ ಅವರು ಸರ್ಕಾರದ ಅಭಿಪ್ರಾಯವನ್ನು ಕೇಳದೆಯೇ 6 ದಿನಗಳ ಕಾಲ 10 ಸಾವಿರ ಕ್ಯೂಸೆಕ್ಸ್ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡಲು ಸಿದ್ಧರಿದ್ದೇವೆಂದು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಈ ಕುರಿತಂತೆ ನಿನ್ನೆ ನಡೆದ ರಾಜ್ಯ ಕಾಂಗ್ರೆಸ್ ಸಮನ್ವಯ ಸಮಿತಿ ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕ ರಾಜ್ಯದ ಪರ ವಾದ ಮಂಡಿಸುತ್ತಿದ್ದ ನಾರೀಮನ್ ಅವರು ಸರ್ಕಾರದ ಅಭಿಪ್ರಾಯ ಹಾಗೂ ನಿರ್ಧಾರವನ್ನು ಕೇಳದೆಯೇ ವಾದವನ್ನು ಮಂಡಿಸಿದ್ದರು. ತಮಿಳುನಾಡಿಗೆ 10 ಸಾವಿರ ಕ್ಯೂಸೆಕ್ಸ್ ನೀರನ್ನು ಬಿಡಲು ರಾಜ್ಯ ಸಿದ್ಧವಿದೆ ಎಂದು ಹೇಳಿದ್ದರು. ಜಗದೀಶ್ ಶೆಟ್ಟರ್ ಅವರ ಅಧಿಕಾರವಾಧಿಯಲ್ಲಿಯೂ ತಮಿಳುನಾಡಿಗೆ ನೀರನ್ನು ಬಿಡುಗಡೆ ಮಾಡಲಾಗಿತ್ತು. ಆಗಲೂ ನಾರೀಮನ್ ಅವರು ಸರ್ಕಾರದ ನಿರ್ಧಾರವನ್ನು ಕೇಳಿರಲಿಲ್ಲ ಎಂದು ಹೇಳಿದ್ದಾರೆ.
ಶೆಟ್ಟರ್ ಅವರು ಅಧಿಕಾರದಲ್ಲಿದ್ದಾಗ ನೀರನ್ನು ಬಿಡುಗಡೆ ಮಾಡಲಾಗಿತ್ತು. 1995ರಲ್ಲಿ ದೇವಗೌಡ ಅವರು ಮುಖ್ಯಮಂತ್ರಿಯಾಗಿದ್ದಾಗ ಹಾಗೂ ಎಸ್.ಎಂ.ಕೃಷ್ಣ ಅವರ ಅಧಿಕಾರಾವಧಿಯಲ್ಲಿಯೂ ನೀರನ್ನು ಬಿಡುಗಡೆ ಮಾಡಲಾಗಿತ್ತು. ಈ ಎಲ್ಲಾ ಬೆಳವಣಿಗೆಗಳನ್ನು ಗಮನಿಸಿ ಸುಪ್ರೀಂ ಆದೇಶ ನೀಡಿದೆ. ಕಾವೇರಿ ವಿವಾದ ನ್ಯಾಯಾಲಯದಲ್ಲಿ ವಿಚಾರಣೆಯಾಗುವುದಕ್ಕೂ ಮುನ್ನ ನಾನು, ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಹಾಗೂ ಹೆಚ್.ಕೆ.ಪಾಟೀಲ್ ನಾರೀಮನ್ ಅವರನ್ನು ಭೇಟಿಯಾಗಿ ಜಲಾಶಯಗಳಲ್ಲಿರುವ ವಾಸ್ತವಿಕತೆಯನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡುವಂತೆ ಸೂಚನೆ ನೀಡಿದ್ದೆವು ಎಂದು ಹೇಳಿದ್ದಾರೆ.
ರಾಜ್ಯದಾದ್ಯಂತ ಕಾವೇರಿ ಕಿಚ್ಚು ಭುಗಿಲೆದ್ದಿದ್ದು, ತಮಿಳುನಾಡಿಗೆ ನೀರನ್ನು ಬಿಡುಗಡೆ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಸಾಕಷ್ಟು ವಿರೋಧಗಳು ವ್ಯಕ್ತವಾಗುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರತಿಪಕ್ಷಗಳು ಹರಿಹಾಯುತ್ತಿದ್ದು, ರಾಜೀನಾಮೆ ನೀಡುವಂತೆ ಆಗ್ರಹಿಸುತ್ತಿವೆ.
Advertisement