

ಬೆಂಗಳೂರು: ತಮಿಳುನಾಡಿಗೆ ಮತ್ತೆ 42 ಸಾವಿರ ಕ್ಯೂಸೆಕ್ ನೀರು ಬಿಡುಲು ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಸೆ.21 ರ ಬೆಳಿಗ್ಗೆ 11 ಗಂಟೆ ವೇಳೆಗೆ ಸಚಿವ ಸಂಪುಟ ಸಭೆ ಕರೆದಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶ ಪಾಲಿಸಲು ಅಸಾಧ್ಯವಾಗಿದ್ದು, ಈ ಬಗ್ಗೆ ಈಗಾಗಲೇ ಸಿಎಂ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ಜೊತೆ ಮಾತುಕತೆ ನಡೆಸಿದ್ದಾರೆ. ಈಗ ಸುಪ್ರೀಂ ಕೋರ್ಟ್ ನ ಆದೇಶದ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟ ಸಭೆ ಕರೆದಿದ್ದು ಸಂಪುಟ ಸಹೋದ್ಯೋಗಿಗಳ ಅಭಿಪ್ರಾಯವನ್ನು ಸಂಗ್ರಹಿಸಲಿದ್ದಾರೆ.
ಕೆಆರ್ ಎಸ್ ಜಲಾಶಯದಲ್ಲಿ ನೀರಿನ ಮಟ್ಟ ಡೆಡ್ ಸ್ಟೋರೇಜ್ ತಲುಪಿದ್ದು, ಇಂತಹ ಸ್ಥಿತಿಯಲ್ಲೂ ಕರ್ನಾಟಕ ತಮಿಳುನಾಡಿಗೆ ಸೆ.27 ವರೆಗೆ ಪ್ರತಿ ದಿನ 6 ಸಾವಿರ ಕ್ಯೂಸೆಕ್ ನೀರಿನಂತೆ ಒಟ್ಟು 42 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಆದೇಶ ನೀಡಿದೆ. ಸುಪ್ರೀಂ ಕೋರ್ಟ್ ಪಾಲಿಸಲು ಸಾಧ್ಯವಾಗದಂತಹ ಆದೇಶ ಎಂಬ ಒಕ್ಕೊರಲ ಅಭಿಪ್ರಾಯ ವ್ಯಕ್ತವಾಗಿದೆ.
ಕಳೆದ ಒಂದು ವಾರದ ಹಿಂದೆ ಸುಪ್ರೀಂ ಕೋರ್ಟ್ ಆದೇಶ ನೀಡಿದ್ದಾಗಲೂ ಸಹ ಸಿದ್ದರಾಮಯ್ಯ ಕಾವೇರಿ ನೀರು ಬಿಡುವುದರ ಬಗ್ಗೆ ಸಚಿವ ಸಂಪುಟ ಸಭೆ ನಡೆಸಿ, ಸುಪ್ರೀಂ ಕೋರ್ಟ್ ನ ಆದೇಶ ಪಾಲಿಸುವುದಾಗಿ ತಿಳಿಸಿದ್ದರು. ಒಂದೆಡೆ ಜಲಾಶಯದಲ್ಲಿ ನೀರಿನ ಮಟ್ಟ ಕುಸಿಯುತ್ತಿದ್ದು ತಮಿಳುನಾಡಿಗೆ ನೀರು ಬಿಡಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಮತ್ತೊಂದೆಡೆ ನೀರು ಬಿಡದೆ ಇದ್ದರೆ ನ್ಯಾಯಾಂಗ ನಿಂದನೆ ಆರೋಪ ಕೇಳಿಬರುವ ಆತಂಕವಿದೆ. ಆದರೆ ಪಾಲಿಸಲು ಆಗದ ಆದೇಶವನ್ನು ಉಲ್ಲಂಘಿಸಿದರೆ ನ್ಯಾಯಾಂಗ ನಿಂದನೆಯಾಗುವುದಿಲ್ಲ ಎಂದು ಕಾನೂನು ತಜ್ಞರು ಅಭಿಪ್ರಾಯಪಟ್ಟಿದ್ದಾರೆ ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಸಚಿವ ಸಂಪುಟ ಕೈಗೊಳ್ಳಲಿರುವ ನಿರ್ಧಾರದ ಬಗ್ಗೆ ಕುತೂಹಲ ಮೂಡಿದೆ.