

ಬೆಂಗಳೂರು: ಮುಂದಿನ ಭವಿಷ್ಯದ ನಿರ್ಧಾರಗಳನ್ನು ಕೈಗೊಳ್ಳುವುದು ಶಾಸಕಾಂಗವೇ, ಸರ್ಕಾರದ ಪರವಾಗಿ ನಾವಿದ್ದೇವೆ. ಸುಪ್ರೀಂ ಆದೇಶವನ್ನು ಕಾರ್ಯರೂಪಕ್ಕೆ ತರದೆ ತಮಿಳುನಾಡಿಗೆ ಒಂದು ಹನಿ ನೀರನ್ನೂ ಬಿಡಬೇಡಿ. ಇದರಲ್ಲಿ ನ್ಯಾಯಾಂಗ ನಿಂದನೆಯ ಪ್ರಶ್ನೆಯೇ ಏಳುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಕಾವೇರಿ ವಿವಾದ ಸಂಬಂಧ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪು ಕುರಿತಂತೆ ಅಂತಿಮ ನಿರ್ಧಾರ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ಕರೆದಿದ್ದ ಸರ್ವ ಪಕ್ಷ ಸಭೆಯಲ್ಲಿ ಭಾಗಿಯಾಗಿ ಮಾತನಾಡಿರುವ ಹೆಚ್.ಡಿ. ಕುಮಾರಸ್ವಾಮಿ ಅವರು, ರಾಜ್ಯದಲ್ಲಿ ಕುಡಿಯುವ ನೀರಿಗೆ ಅಭಾವ ಉಂಟಾಗಿದ್ದು, ಇತರೆ ರಾಜ್ಯಕ್ಕೆ ನೀರನ್ನು ಬಿಡುಗಡೆ ಮಾಡುವ ಪರಿಸ್ಥಿತಿಯಲ್ಲಿ ನಾವಿಲ್ಲ. ನ್ಯಾಯಾಂಗಕ್ಕಿಂತ ಶಾಸಕಾಂಗ ದೊಡ್ಡದು. ಮುಂದಿನ ಭವಿಷ್ಯದ ನಿರ್ಧಾರಗಳನ್ನು ಕೈಗೊಳ್ಳುವುದು ಶಾಸಕಾಂಗವೇ, ಸರ್ಕಾರದ ಪರವಾಗಿ ನಾವಿದ್ದೇವೆ. ಇದರಲ್ಲಿ ನ್ಯಾಯಾಂಗ ನಿಂದನೆಯ ಪ್ರಶ್ನೆಯೇ ಏಳುವುದಿಲ್ಲ. ತಮಿಳುನಾಡಿಗೆ ಒಂದು ಹನಿ ನೀರನ್ನೂ ಬಿಡಬೇಡಿ ಎಂದು ಹೇಳಿದ್ದಾರೆ.
ಕರ್ನಾಟಕ ರಾಜ್ಯಕ್ಕೆ ಕುಡಿಯುವ ನೀರಿನ ಅಗತ್ಯವಿದ್ದು, ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿನ ಕೃಷಿಗೆ ನೀರು ಬಿಡುಗಡೆ ಮಾಡುವ ಅಗತ್ಯವಿಲ್ಲ. ಹೀಗಾಗಿ ನ್ಯಾಯಾಲಯದ ತೀರ್ಪನ್ನು ಕಾರ್ಯರೂಪಕ್ಕೆ ತರಬಾರದು ಎಂದು ಸಭೆಯಲ್ಲಿದ್ದ ಎಲ್ಲಾ ನಾಯಕರು ಒಮ್ಮತದಿಂದಲೇ ಕಾವೇರಿಯ ಒಂದು ಹನಿ ನೀರನ್ನೂ ತಮಿಳುನಾಡಿಗೆ ಬಿಡಕೂಡದು ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಈ ಹಿಂದೆ ಬಿಜೆಪಿ ಕೂಡ ಇದೇ ರೀತಿಯಾಗಿ ಅಭಿಪ್ರಾಯವನ್ನು ವ್ಯಕ್ತಪಡಿಸಿತ್ತು. ತಮಿಳುನಾಡಿಗೆ ನೀರನ್ನು ಬಿಡುಗಡೆ ಮಾಡದಂತೆ ಅಭಿಪ್ರಾಯ ವ್ಯಕ್ತಪಡಿಸಿತ್ತು. ಆದರೆ, ನ್ಯಾಯಾಂಗ ನಿಂದನೆಯಾಗುತ್ತದೆ ಎಂಬ ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ್ಯಾಯಾಲಯದ ಆದೇಶವನ್ನು ಪಾಲಿಸಿದ್ದರು. ತಮ್ಮ ಅಭಿಪ್ರಾಯವನ್ನು ಸಿದ್ದರಾಮಯ್ಯ ಅವರು ಧಿಕ್ಕರಿಸಿದ್ದಾರೆಂದು ಹೇಳಿ ಕೆಲ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದರು. ಇದರಂತೆ ನಿನ್ನೆ ನಡೆದ ಸರ್ವಪಕ್ಷ ಸಭೆಯನ್ನು ಬಿಜೆಪಿ ಬಹಿಷ್ಕರಿಸಿತ್ತು. ಯಾವೊಬ್ಬ ಬಿಜೆಪಿ ನಾಯಕನೂ ಸಭೆಯಲ್ಲಿ ಭಾಗಿಯಾಗಿರಲಿಲ್ಲ.