ಮಂಡ್ಯ: ಕಾವೇರಿ ನೀರಿಗಾಗಿ ಮಂಡ್ಯದಲ್ಲಿ ನಡೆಯುತ್ತಿದ್ದ ಚಳುವಳಿಯನ್ನು ಶನಿವಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಕಾವೇರಿ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಜಿ.ಮಾದೇಗೌಡ ಅವರ ಹೇಳಿದ್ದಾರೆ.
ನಗರದ ಸರ್.ಎಂ. ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಮಾದೇಗೌಡ ಅವರ ನೇತೃತ್ವದಲ್ಲಿ ಕಳೆದ 18 ದಿನಗಳಿಂದ ಸುಪ್ರೀಂ ಕೋರ್ಟ್ ಆದೇಶದ ವಿರುದ್ಧ ಮತ್ತು ತಮಿಳುನಾಡಿಗೆ ನೀರು ಬಿಡದಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುತ್ತಿತ್ತು. ಆದರೆ ಸುಪ್ರೀಂ ಕೋರ್ಟ್ ಆದೇಶ ಪಾಲಿಸದಿರಲು ರಾಜ್ಯ ಸರ್ಕಾರ ನಿರ್ಧರಿಸಿದ ಹಿನ್ನೆಲೆಯಲ್ಲಿ ಮತ್ತು ಕಾವೇರಿ ಕೊಳ್ಳದ ರೈತರಿಗೆ ಪರಿಹಾರ ನೀಡುವುದಾಗಿ ಹಾಗೂ ಪ್ರತಿಭಟನೆ ವೇಳೆ ಬಂಧನಕ್ಕೊಳಗಾಗಿದ್ದ ರೈತರ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ ಹಿನ್ನೆಲೆಯಲ್ಲಿ ಇಂದು ಚಳವಳಿಯನ್ನು ಸ್ಥಗಿಗೊಳಿಸಲಾಗಿದೆ ಎಂದು ಮಾದೇಗೌಡರು ತಿಳಿಸಿದ್ದಾರೆ.
ಮಂಡ್ಯದಲ್ಲಿ ನಡೆಯುತ್ತಿದ್ದ ಪ್ರತಿಭಟನೆಗೆ ಕನ್ನಡಪರ ಸಂಘಟನೆಗಳು, ಕಲಾವಿದರು, ಸಾಹಿತಿಗಳು ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ನೀಡಿದ್ದವು.
ಮಾದೇಗೌಡ ಅವರು ತಮ್ಮ ಇಳಿ ವಯಸ್ಸಿನಲ್ಲೂ ಕಳೆದ ಗುರುವಾರ ಸರ್ಕಾರಿ ಕಚೇರಿಗಳಿಗೆ ತೆರಳಿ ಬಾಗಿಲು ಮುಚ್ಚಿಸುವ ಮೂಲಕ ಸುಪ್ರೀಂ ಕೋರ್ಟ್ ಆದೇಶದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.