ಸುಳ್ಳು ಜಾತಿ ಪ್ರಮಾಣ ಪತ್ರ: ಅಧಿಕಾರಿಗಳ ವಿರುದ್ಧ ಸಿಎಂ ಕೆಂಡಾಮಂಡಲ

ಪರಿಶಿಷ್ಟ ಜಾತಿ ಮತ್ತು ಪಂಗಡದವರ ಹೆಸರಿನಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ನೀಡುವ ಅಧಿಕಾರಿಗಳ ವಿರುದ್ಧ  ಕಾನೂನು ಕ್ರಮ ಜರುಗಿಸಿ ಎಂದು ಮುಖ್ಯಮಂತ್ರಿ ...
ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದ ಸಿದ್ದರಾಮಯ್ಯ
ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದ ಸಿದ್ದರಾಮಯ್ಯ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡದವರ ಹೆಸರಿನಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ನೀಡುವ ಅಧಿಕಾರಿಗಳ ವಿರುದ್ಧ  ಕಾನೂನು ಕ್ರಮ ಜರುಗಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ. 

ವಿಧಾನಸೌಧದಲ್ಲಿ ಮಂಗಳವಾರ ನಡೆದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ನಿಯಂತ್ರಣಕ್ಕಾಗಿ ಇರುವ ರಾಜ್ಯ ಮಟ್ಟದ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ಪಡೆದಿರುವ ಸಂಬಂಧ 482 ಪ್ರಕರಣಗಳು ವಿಚಾರಣೆಗೆ ಬಾಕಿ ಇವೆ, ದೂರುಗಳು ಬಂದ ಕೂಡಲೇ ವಿಚಾರಣೆ ನಡೆಸಿ ಸುಳ್ಳು ಜಾತಿ ಪ್ರಮಾಣ ಪತ್ರ ರದ್ದು ಮಾಡಬೇಕಾದ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದು ಸರಿಯಲ್ಲ. ಪರಿಶಿಷ್ಟ ಸಮುದಾಯದವರ ಹೆಸರಿನಲ್ಲಿ ಉದ್ಯೋಗ ಪಡೆದು ವಂಚಿಸುತ್ತಿರುವ ಪ್ರಕರಣಗಳು ಕೊನೆಯಾಗಬೇಕು ಎಂದು ಸೂಚಿಸಿದ್ದಾರೆ.
ಪ್ರಮಾಣ ಪತ್ರ ಪಡೆದವರನ್ನು ಮಾತ್ರ ಶಿಕ್ಷಿಸಿದರೆ ಸಾಲದು. ಪರಿಶೀಲಿಸದೆ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳನ್ನೂ ಶಿಕ್ಷೆಗೆ ಗುರಿಪಡಿಸಿದರೆ ಇದು ನಿಯಂತ್ರಣಕ್ಕೆ ಬರಲಿದೆ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಮುಂದಾಗಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಾತಿ ನಿಂದನೆ ಕೇಸುಗಳು ಹಲವು ಜಿಲ್ಲೆಗಳಲ್ಲಿ ಹೆಚ್ಚಿವೆ. ಈ ಕೇಸುಗಳ ವಿಲೇವಾರಿ ಮಾಡಲು ವಿಶೇಷ ನ್ಯಾಯಾಲಯ ಸ್ಥಾಪಿಸಲು  ಹೈಕೋರ್ಟ್‌ ರಿಜಿಸ್ಟ್ರಾರ್‌ ಜನರಲ್‌ ಜತೆ ಚರ್ಚೆ ನಡೆಸುವಂತೆ ಸಭೆಯಲ್ಲಿದ್ದ ಕಾನೂನು ಸಚಿವ ಟಿ.ಬಿ. ಜಯಚಂದ್ರ ಹಾಗೂ ಸಮಾಜ ಕಲ್ಯಾಣ ಸಚಿವ ಎಚ್‌.ಆಂಜನೇಯ ಅವರಿಗೆ ಸಿದ್ದರಾಮಯ್ಯ ಸೂಚಿಸಿದರು.
ಸುಳ್ಳು ಜಾತಿ ಪ್ರಮಾಣ ಪತ್ರ ನೀಡುವ ಹಾಗೂ ಪಡೆಯುವ ಸಂಬಂದ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಲ್ಲಿ ಪೊಲೀಸ್ ಇಲಾಖೆ, ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಉಪ ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಜರುಗಿಸಬೇಕೆಂದು ಸಿಎಂ ಆದೇಶಿಸಿದ್ದಾರೆ. ಇದೇ ವೇಳೆ ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿ ಮಣಿವಣ್ಣನ್‌ ವಿರುದ್ಧ ಸಿದ್ದರಾಮಯ್ಯ ಸಿಟ್ಟಾದ ಘಟನೆ ಸಭೆಯಲ್ಲಿ ನಡೆಯಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com